ಕೊಪ್ಪಳ: ‘ಹನುಮನ ಜನ್ಮಸ್ಥಳವಾದ ಜಿಲ್ಲೆಯ ಅಂಜನಾದ್ರಿ ಬೆಟ್ಟದಲ್ಲಿ ಡಿ. 12 ಮತ್ತು 13ರಂದು ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ ನಡೆಯಲಿದ್ದು, ಇದರಲ್ಲಿ ಪಾಲ್ಗೊಳ್ಳುವ ಮಾಲಾಧಾರಿಗಳಿಗೆ ಸಮರ್ಪಕ ವ್ಯವಸ್ಥೆ ಕಲ್ಪಿಸಬೇಕು’ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಪೂರ್ವಭಾವಿ ಸಭೆ ನಡೆಸಿದ ಅವರು ‘ಹನುಮಮಾಲಾ ವಿಸರ್ಜನೆಗಾಗಿ ಸುಮಾರು 2 ಲಕ್ಷಕ್ಕೂ ಹೆಚ್ಚು ಜನ ಸೇರುವ ಸಂಭವವಿದೆ. ಭಕ್ತರಿಗೆ ಸೂಕ್ತ ಭದ್ರತಾ ವ್ಯವಸ್ಥೆ, ಆಹಾರ, ಕುಡಿಯುವ ನೀರು, ವಸತಿ ಸೇರಿದಂತೆ ಎಲ್ಲಾ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವುದರಿಂದ ದೇವಾಲಯದ ಆವರಣದಲ್ಲಿ ಶುಚಿತ್ವ ಕಾಯ್ದುಕೊಳ್ಳಲು ಹೆಚ್ಚಿನ ಒತ್ತು ಕೊಡಬೇಕು. ಆಹಾರದ ಗುಣಮಟ್ಟ ಪರಿಶೀಲನೆ ನಂತರವೇ ವಿತರಣೆಗೆ ಕ್ರಮ ಕೈಗೊಳ್ಳಬೇಕು. ಪ್ರಸಾದ ವಿತರಣೆಗೆ ಅಗತ್ಯ ಕೌಂಟರ್‌ಗಳನ್ನು ತೆರೆದು ಸಾರ್ವಜನಿಕರಿಗೂ ಸುಲಭವಾಗಿ ಪ್ರಸಾದ ಸಿಗುವಂತೆ ಮಾಡಬೇಕು’ ಎಂದು ಹೇಳಿದರು.
‘ಕಾರ್ಯಕ್ರಮ ಸುವ್ಯವಸ್ಥಿತವಾಗಿ ನಡೆಯಲು ರಚಿಸಲಾದ ವಿವಿಧ ಸಮಿತಿಗಳು ಪರಸ್ಪರ ಸಮನ್ವಯತೆ ಸಾಧಿಸಬೇಕು. ಯಾವುದೇ ಗೊಂದಲ, ತೊಂದರೆಗೆ ಆಸ್ಪದ ಕೊಡದ ರೀತಿಯಲ್ಲಿ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಬೇಕು’ ಎಂದರು.
ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಮಾತನಾಡಿ ‘ಹನುಮಮಾಲಾ ವಿಸರ್ಜನೆಗೆ ಯಾವುದೇ ತೊಂದರೆಯಾಗದಂತೆ ವ್ಯವಸ್ಥಿತ ರೀತಿಯಲ್ಲಿ ಸಮಿತಿಗಳು ಕಳೆದ ವರ್ಷದಂತೆ ಕಾರ್ಯನಿರ್ವಹಿಸಲಿದ್ದು, ಮೂಲಸೌಕರ್ಯ ಸಮಿತಿ, ಆಹಾರ, ರಸ್ತೆ ನಿರ್ವಹಣಾ, ಆರೋಗ್ಯ, ಸ್ವಚ್ಛತಾ, ಪ್ರಸಾದ ವಿತರಣಾ, ಸಾರಿಗೆ, ವಿದ್ಯುತ್, ಭದ್ರತಾ, ಪ್ರಚಾರ, ಶಿಷ್ಠಾಚಾರ, ಅಬಕಾರಿ ಸಮಿತಿ, ಅರಣ್ಯ, ಸಹಾಯವಾಣಿ ಕೇಂದ್ರ ಸಮಿತಿ ಸೇರಿದಂತೆ ಒಟ್ಟು 14 ಸಮಿತಿಗಳನ್ನು ರಚಿಸಿ ಆಯಾ ಇಲಾಖೆಗಳ ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ’ ಎಂದು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಪ್ರಾದೇಶಿಕ ಸಾರಿಗೆ ಅಧಿಕಾರಿ ಎಲ್.ಬಿ ನಾಲವಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ನಾಗರಾಜ, ಆಹಾರ ಇಲಾಖೆ, ಪೊಲೀಸ್, ನಗರಸಭೆ, ಅರಣ್ಯ ಇಲಾಖೆ ಸೇರಿದಂತೆ ಇತರೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.