ADVERTISEMENT

ಅಶ್ವತ್ಥನಾರಾಯಣ ಹೇಳಿಕೆ ಸರಿಯೇ? ಬಿಜೆಪಿಗೆ ಜನರೇ ಪಾಠ ಕಲಿಸುತ್ತಾರೆ: ಹಿಟ್ನಾಳ್‌

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2023, 11:11 IST
Last Updated 16 ಫೆಬ್ರುವರಿ 2023, 11:11 IST
ಶಾಸಕ ಕೆ. ರಾಘವೇಂದ್ರ ಹಿಟ್ನಾಳ
ಶಾಸಕ ಕೆ. ರಾಘವೇಂದ್ರ ಹಿಟ್ನಾಳ   

‌ಕೊಪ್ಪಳ: ಉನ್ನತ ಶಿಕ್ಷಣ ಸಚಿವ ಸಿ.ಎನ್‌. ಅಶ್ವತ್ಥನಾರಾಯಣ ಅವರು ‘ಸಿದ್ದರಾಮಯ್ಯ ಅವರನ್ನೂ ಹೊಡೆದು ಹಾಕಬೇಕು’ ಎಂದು ನೀಡಿರುವ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಚುನಾವಣೆಯಲ್ಲಿ ಜನರೇ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಿದರು.

ಇಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿ ‘ಅಶ್ವತ್ಥನಾರಾಯಣ ಹೇಳಿಕೆ ಸರಿಯಲ್ಲ. ಈ ಕುರಿತು ಪಕ್ಷದ ವತಿಯಿಂದ ರಾಜ್ಯದಾದ್ಯಂತ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸುವ ಬಗ್ಗೆ ಚಿಂತನೆ ನಡೆಯುತ್ತಿದೆ’ ಎಂದರು.

ಕುಕನೂರಿನಲ್ಲಿ ಎರಡು ದಿನಗಳ ಹಿಂದೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ‘ಹನುಮನ ಭಕ್ತರು ಬೇಕೊ?, ಟಿಪ್ಪುವಿನ ಸಂತರು ಬೇಕೊ? ಎಂದು ಪ್ರಶ್ನಿಸಿದ್ದರು.

ADVERTISEMENT

ಈ ಕುರಿತು ಪ್ರತಿಕ್ರಿಯಿಸಿದ ಹಿಟ್ನಾಳ್‌ ‘ನಾಲ್ಕೂವರೆ ವರ್ಷಗಳ ಅವಧಿಯಲ್ಲಿ ಬಿಜೆಪಿ ಯಾವ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ. ಅದನ್ನು ಮರೆಮಾಚಲು ಈಗ ಕೋಮು ಗಲಭೆ ಸೃಷ್ಟಿಸುವ ಹುನ್ನಾರ ನಡೆಸುತ್ತಿದೆ. ಒಂದೇ ಒಂದು ನೀರಾವರಿ ಯೋಜನೆ ಜಾರಿಗೊಳಿಸಿಲ್ಲ’ ಎಂದರು.

‘ಸಿದ್ದರಾಮಯ್ಯನವರನ್ನು ಸೋಲಿಸುವುದು, ಗೆಲ್ಲಿಸುವುದು ಬಿಜೆಪಿ ಕೈಯಲ್ಲಿ ಇಲ್ಲ. ಕೋಲಾರದಲ್ಲಿ ಅವರಿಗೆ ಸಂಪೂರ್ಣ ಬೆಂಬಲ ಸಿಗುತ್ತಿದೆ. ಅಲ್ಲಿ ಅವರು ಗೆದ್ದೇ ಗೆಲ್ಲುತ್ತಾರೆ. ಬಾದಾಮಿಯಲ್ಲಿ ಸ್ಪರ್ಧಿಸಬೇಕು ಎಂದು ಆ ಕ್ಷೇತ್ರದ ಜನ ದುಂಬಾಲು ಬಿದ್ದಿದ್ದಾರೆ. ಸಿದ್ದರಾಮಯ್ಯ ಅವರಿಗೆ ಕ್ಷೇತ್ರವಿಲ್ಲ ಎನ್ನುವುದು ಸತ್ಯವಲ್ಲ’ ಎಂದರು.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲ ಕೊಪ್ಪಳ ಜಿಲ್ಲೆಗೆ ಹೊರಗಿನವರೇ ಸಚಿವರಾಗಿದ್ದಾರೆ. ಆದ್ದರಿಂದ ಇಲ್ಲಿ ಅಭಿವೃದ್ಧಿ ಕೆಲಸಗಳು ಘೋಷಣೆಗೆ ಮಾತ್ರ ಸೀಮಿತವಾಗಿವೆ ಎಂದರು.

ಇವನ್ನೂ ಓದಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.