ಕೊಪ್ಪಳ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ವೇಳೆ ಮತ್ತೊಂದು ಗೋಧ್ರಾ ರೀತಿಯಲ್ಲಿ ಹತ್ಯಾಕಾಂಡ ಘಟನೆ ನಡೆಯಬಹುದು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದ್ದನ್ನು ನೋಡಿದರೆ ಹರಿಪ್ರಸಾದ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲ ಒಳಸುಳಿ ಬಲ್ಲವರಾಗಿದ್ದಾರೆ ಎನ್ನುವುದು ಖಾತ್ರಿಯಾಗುತ್ತದೆ ಎಂದು ಮಾಜಿ ಸಚಿವ ಸಿ.ಟಿ. ರವಿ ಹೇಳಿದರು.
ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಅಂಜನಾದ್ರಿಯಲ್ಲಿ ಶುಕ್ರವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು ಮುಖ್ಯಮಂತ್ರಿ ಯಾರನ್ನು ರಕ್ಷಣೆ ಮಾಡುತ್ತಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿದೆ.
ಹಿಂದೂ ಕಾರ್ಯಕರ್ತರನ್ನು ಕೊಲೆ ಮಾಡಿದವರ ಮೇಲಿದ್ದ ಪ್ರಕರಣಗಳನ್ನು ಸಿಎಂ ವಾಪಸ್ ಪಡೆದಿದ್ದಾರೆ ಎಂದು ಆರೋಪಿಸಿದರು.
ಸಿಎಂ ಹಿಂಬಾಲಕರು ಈ ರೀತಿಯ ಕೃತ್ಯ ಮಾಡುವ ಸೂಚನೆ ಇರಬೇಕು. ಅದಕ್ಕೆ ಹರಿಪ್ರಸಾದ್ ಆ ರೀತಿ ಹೇಳಿಕೆ ನೀಡಿರಬಹುದು. ಅವರನ್ನು ತನಿಖೆಗೆ ಒಳಪಡಿಸಬೇಕು
ರಾಮ ಭಕ್ತರಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.
ರಾಮಮಂದಿರ ಉದ್ಘಾಟನೆ ಅಂಗವಾಗಿ ಹಿಂದೂ ಕಾರ್ಯಕರ್ತರು ಮನೆಮನೆಗೆ ತೆರಳಿ ಮಂತ್ರಾಕ್ಷತೆ ನೀಡುತ್ತಿದ್ದಾರೆ. ಇದಕ್ಕೆ ಅನ್ನಭಾಗ್ಯದ ಅಕ್ಕಿ ಬಳಕೆ ಮಾಡಲಾಗುತ್ತಿದೆ ಎಂದು ಕೆಲ ಕಾಂಗ್ರೆಸ್ ನಾಯಕರು ಹೇಳಿಕೆ ನೀಡುತ್ತಿದ್ದಾರೆ. ಅನ್ನ ಬೆಳೆದ ರೈತ ಎಲ್ಲಿಯೂ ತನ್ನ ಅಕ್ಕಿ ಎಂದು ಹೇಳಿಲ್ಲ. ಕೇಂದ್ರ ಸರ್ಕಾರ ನೀಡುತ್ತಿರುವ ಐದು ಕೆ.ಜಿ. ಅಕ್ಕಿ ಮೇಲೆ ರಾಜ್ಯ ಸರ್ಕಾರ ಒಂದು ಕೆ.ಜಿ. ಅಕ್ಕಿ ಕೊಟ್ಟಿಲ್ಲ. ನನ್ನದು ಎನ್ನುವುದು ದೊಡ್ಡ ಅಹಂಕಾರ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.