ADVERTISEMENT

ಕೊಪ್ಪಳ: ಮಾಹಿತಿ ಹಕ್ಕು ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಸೂಚನೆ

ಯಾವ ಮಾಹಿತಿ ಕೊಡಬೇಕು, ಕೊಡಬಾರದು ಎನ್ನುವ ಜ್ಞಾನವೂ ಅಗತ್ಯ: ಅತುಲ್‌

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2024, 14:39 IST
Last Updated 25 ಅಕ್ಟೋಬರ್ 2024, 14:39 IST
ಕೊಪ್ಪಳದಲ್ಲಿ ಶುಕ್ರವಾರ ನಡೆದ ಆರ್‌ಟಿಐ ಕುರಿತ ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ನಲಿನ್‌ ಅತುಲ್‌ ಉದ್ಘಾಟಿಸಿದರು
ಕೊಪ್ಪಳದಲ್ಲಿ ಶುಕ್ರವಾರ ನಡೆದ ಆರ್‌ಟಿಐ ಕುರಿತ ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ನಲಿನ್‌ ಅತುಲ್‌ ಉದ್ಘಾಟಿಸಿದರು   

ಕೊಪ್ಪಳ: ‘ಇಲಾಖೆಗಳಲ್ಲಿ ಮಾಹಿತಿ ಹಕ್ಕು ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಮಾಹಿತಿ ಹಕ್ಕು ಕಾಯ್ದೆ ಕುರಿತು ಶುಕ್ರವಾರ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಹಾಗೂ ವಿಷಯ ನಿರ್ವಾಹಕರಿಗೆ ಜಿಲ್ಲಾಡಳಿತ ಭವನದಲ್ಲಿ ನಡೆದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ‘ಸರ್ಕಾರಿ ಕಚೇರಿಗಳ ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವದ ಉದ್ದೇಶಕ್ಕಾಗಿಯೇ ಮಾಹಿತಿ ಹಕ್ಕು ಕಾಯ್ದೆ ಜಾರಿಯಲ್ಲಿದೆ. ಈ ಕಾಯ್ದೆಯಡಿ ಸ್ವೀಕೃತವಾಗುವ ಅರ್ಜಿಗಳಿಗೆ ಇಲಾಖೆಗಳಿಂದ ಮಾಹಿತಿ ಒದಗಿಸಲು ಅಧಿಕಾರಿಗಳು ಯಾವುದೇ ರೀತಿಯ ಗೊಂದಲ ಮಾಡಿಕೊಳ್ಳಬಾರದು’ ಎಂದರು.

‘ಅರ್ಜಿಗಳ ವಿಲೇವಾರಿಯಲ್ಲಿ ತೊಂದರೆ ಮಾಡಿಕೊಂಡರೆ ವಿಳಂಬವಾಗುತ್ತದೆ. ಈ ಹಿನ್ನೆಲೆಯಲ್ಲಿ ಕಾಯ್ದೆಯ ಬಗ್ಗೆ ಎಲ್ಲ ಅಧಿಕಾರಿಗಳು ಮೊದಲು ಸರಿಯಾಗಿ ಅರ್ಥೈಸಿಕೊಂಡು ನಿಯಮಾನುಸಾರ ಮಾಹಿತಿ ನೀಡಬೇಕು. ನಿಗದಿತ ಅವಧಿಯೊಳಗೆ ಮಾಹಿತಿಯನ್ನು ಅಥವಾ ಅವಶ್ಯವಿದ್ದಲ್ಲಿ ಹಿಂಬರಹ ನೀಡಬೇಕು. ಕಾಯ್ದೆಯಡಿ ಯಾವ ಮಾಹಿತಿ ಕೊಡಬೇಕು. ಕೊಡಬಾರದು ಎಂಬುದರ ಬಗ್ಗೆ ಸುಪ್ರಿಂ ಕೋರ್ಟ್, ಹೈಕೋರ್ಟ್‌ಗಳು ಅನೇಕ ಆದೇಶಗಳನ್ನು ಹೊರಡಿಸಿವೆ. ಸರ್ಕಾರವೂ ಕೂಡ ಸುತ್ತೋಲೆಗಳನ್ನು ನೀಡಿದೆ. ಇವುಗಳ ಬಗ್ಗೆಯೂ ಜ್ಞಾನ ಹೊಂದಬೇಕು’ ಎಂದು ಸಲಹೆ ನೀಡಿದರು. 

ADVERTISEMENT

‘ಮಾಹಿತಿ ಹಕ್ಕು ಕಾಯ್ದೆಯಡಿ ಸರ್ಕಾರಿ ನೌಕರರ ಯಾವುದೇ ವೈಯಕ್ತಿಕ ಮಾಹಿತಿ ನೀಡುವಂತಿಲ್ಲ. ಕಾಯ್ದೆಯಡಿ ಇಲಾಖೆಗಳಿಂದ ಯಾವ ಮಾಹಿತಿ ನೀಡಬಹುದು ಎಂಬ ವಿವರಗಳನ್ನು ತಮ್ಮ ಇಲಾಖಾ ವೆಬ್‌ಸೈಟ್‌ಗಳಲ್ಲಿ ನಮೂದಿಸಬೇಕು. ಇದರಿಂದ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಹಾಕುವ ಅರ್ಜಿದಾರರಿಗೂ ಅನುಕೂಲವಾಗುತ್ತದೆ. ಮಾಹಿತಿ ಹಕ್ಕು ಕಾಯ್ದೆಯ ಬಗ್ಗೆ ಅಧಿಕಾರಿಗಳಲ್ಲಿ ಹೆಚ್ಚಿನ ಅರಿವು ಮೂಡಿಸಲು ಈ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದ್ದು, ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಹೇಳಿದರು.

ಬೆಳಗಾವಿಯ ವಕೀಲರಾದ ಮಾಹಿತಿ ಹಕ್ಕು ವಿಶೇಷ ತರಬೇತಿದಾರ ಅಶೋಕ ಹಲಗಲಿ ಮಾಹಿತಿ ತಿಳಿಸಿಕೊಟ್ಟರು. ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ಕೃಷ್ಣಮೂರ್ತಿ ದೇಸಾಯಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.