ಕೊಪ್ಪಳ: ತೀವ್ರ ನಿಗಾ ಘಟಕ (ಐಸಿಯು)ದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧೆಗೆ ಸರಿಯಾಗಿ ಚಿಕಿತ್ಸೆ ನೀಡದೆ ವೈದ್ಯರು ನಿರ್ಲಕ್ಷ ತೋರಿದ್ದಾರೆ. ಇದರಿಂದ ಅವರು ಮೃತಪಟ್ಟಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ.
ನಗರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊಪ್ಪಳ ತಾಲ್ಲೂಕಿನ ಕುಣಿಕೇರಿ ಗ್ರಾಮದ ಗಂಗಮ್ಮ ಕೆಂಬೋಡಿಮಠ (65) ಮೃತಪಟ್ಟವರು. ಇದಕ್ಕೆ ವೈದ್ಯರ ನಿರ್ಲಕ್ಷ ಕಾರಣ ಎಂದು ಆರೋಪಿಸಿ ಕುಟುಂಬದವರು ಮಂಗಳವಾರ ದಿಢೀರ್ ಐಸಿಯು ಘಟಕದ ಮುಂದೆ ಪ್ರತಿಭಟನೆ ನಡೆಸಲು ಮುಂದಾದರು.
'ಕೆಲಸದ ಸಮಯದಲ್ಲಿ ವೈದ್ಯರು ಇರಲಿಲ್ಲ. ಮೂರು ದಿನಗಳ ಹಿಂದೆಯೇ ಆಸ್ಪತ್ರೆಗೆ ದಾಖಲಾಗಿದ್ದರೂ ಸರಿಯಾಗಿ ಚಿಕಿತ್ಸೆ ನೀಡಿಲ್ಲ. ಅಪರೂಪಕ್ಕೆ ಎನ್ನುವಂತೆ ಬಂದರೂ ವೈದ್ಯರು ಸರಿಯಾಗಿ ಚಿಕಿತ್ಸೆ ನೀಡಲಿಲ್ಲ. ಇದರಿಂದಾಗಿ ಅಮ್ಮ ಪ್ರಾಣವನ್ನೇ ತೆತ್ತರು' ಎಂದು ಗಂಗಮ್ಮ ಅವರ ಮಗ ಸಿದ್ದಲಿಂಗಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪ್ರಭಾರ ಜಿಲ್ಲಾ ಶಸ್ತ್ರ ಚಿಕಿತ್ಸಕ ಈಶ್ವರ ಸವಡಿ 'ಸೋಮವಾರ ವೈದ್ಯರು ರೋಗಿಯನ್ನು ಪರೀಕ್ಷಿಸಿದ್ದಾರೆ. ಆರೋಗ್ಯ ಬಿಗಡಾಯಿಸಿದ್ದರಿಂದ ಐಸಿಯುಗೆ ಸ್ಥಳಾಂತರಿಸಿದ್ದರು. ವೈದ್ಯರಿಂದ ಇನ್ನಷ್ಟು ಮಾಹಿತಿ ಪಡೆಯಲಾಗುವುದು' ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.