ಗಂಗಾವತಿ: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಗೆದ್ದು ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಜನಾರ್ದನ ರೆಡ್ಡಿ ನಾಮಪತ್ರದಲ್ಲಿ ದೋಷವಿದ್ದು, ಈ ಕುರಿತು ವಿಚಾರಣೆ ನಡೆಸಬೇಕು ಎಂದು ಅನಂತಪುರದ ಗಣಿ ಉದ್ಯಮಿ ಶ್ಯಾಂ ಪ್ರಸಾದ್ ಜಿಲ್ಲಾ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.
ರೆಡ್ಡಿ ಸಲ್ಲಿಸಿದ ನಾಮಪತ್ರದಲ್ಲಿ ಸಾಕಷ್ಟು ಲೋಪದೋಷಗಳು ಇವೆ. ಆಸ್ತಿ ವಿವರದಲ್ಲಿ ವಾಹನಗಳ ಬಗ್ಗೆ ಉಲ್ಲೇಖಿಸಿಲ್ಲ. ಈ ಕುರಿತು ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಶ್ಯಾಂ ಪ್ರಸಾದ್ ಅವರು ಸಲ್ಲಿಸಿದ ದೂರಿನ ಮೇರೆಗೆ ದೂರಿನಲ್ಲಿ ಉಲ್ಲೇಖಿಸಿರುವ ಅಂಶಗಳನ್ನು ಪರಿಶೀಲನೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ಚುನಾವಣಾಧಿಕಾರಿಗಳು ಕೊಪ್ಪಳ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದ್ದಾರೆ.
ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಗಂಗಾವತಿ ಕ್ಷೇತ್ರದ ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ,‘ನಾಮಪತ್ರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ್ದೇವೆ. ಲೋಪಗಳಿದ್ದರೆ ಆಗಲೇ ಗಮನಕ್ಕೆ ತರಬೇಕಿತ್ತು ಎಂದು ದೂರುದಾರರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.