ಕನಕಗಿರಿ: ‘ರಾಜಕಾರಣಕ್ಕಾಗಿ ಆಗಾಗ್ಗೆ ದೇಶದ ಪವಿತ್ರ ಗ್ರಂಥ ಸಂವಿಧಾನ ಬದಲಾವಣೆ ಮಾಡಬೇಕು ಹಾಗೂ ತಿದ್ದುಪಡಿ ಮಾಡಬೇಕು ಎಂದು ಹೇಳಿಕೆ ನೀಡುವ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸುತ್ತಿರುವ ಸಂಸದ ಅನಂತಕುಮಾರ ಹೆಗಡೆ ಅವರ ವಿರುದ್ಧ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು’ ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ತಾಲ್ಲೂಕು ಘಟಕದ ಅಧ್ಯಕ್ಷ ಪಾಮಣ್ಣ ಅರಳಿಗನೂರು ಒತ್ತಾಯಿಸಿದರು.
ಇಲ್ಲಿನ ತಹಶೀಲ್ದಾರ್ ಕಚೇರಿಯ ಶಿರಸ್ತೇದಾರ ಶರಣಪ್ಪ ಅವರಿಗೆ ಮಂಗಳವಾರ ಮನವಿ ಸಲ್ಲಿಸಿ ಮಾತನಾಡಿದರು.
ಹೆಗಡೆ ಅವರು ಸದಾ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯಗಳ ವಿರುದ್ಧವಾಗಿ ಮಾತನಾಡುತ್ತಿದ್ದಾರೆ. ಶೋಷಿತರು, ಬಡವರು ಹಾಗೂ ಹಿಂದುಳಿದ ವರ್ಗ, ಅಲ್ಪಸಂಖ್ಯಾತರಿಗೆ ಸಿಗುತ್ತಿರುವ ಸೌಲಭ್ಯಗಳನ್ನು ತಪ್ಪಿಸಲು ಈ ನಾಟಕವಾಡುತ್ತಿದ್ದಾರೆ. ಇಂಥ ವ್ಯಕ್ತಿಯನ್ನು ದೇಶದಿಂದ ಗಡಿಪಾರು ಮಾಡಬೇಕು ಎಂದು ಅವರು ಆಗ್ರಹಿಸಿದರು.
ಬಿಜೆಪಿಯಲ್ಲಿ ಇಡೀ ವಿಶ್ವಕ್ಕೆ ಮಾದರಿಯಾದ ಸಂವಿಧಾನ ಬದಲಾವಣೆ ಮಾಡಿ ಮನುವಾದವನ್ನು ಜಾರಿಗೆ ತರುವ ಹುನ್ನಾರ ನಡೆದಿದೆ. ಸಂವಿಧಾನವನ್ನು ಉಳಿಸುವ ಸಲುವಾಗಿ ಹೆಗಡೆ ಅಂಥವರ ವಿರುದ್ಧ ಹೋರಾಟ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಗತಿಸಿದರೂ ಸಮಾಜದಲ್ಲಿ ಇಲ್ಲಿಯವರೆಗೆ ಅಸಮಾನತೆ, ಜಾತೀಯತೆ, ಇತರೆ ಅನಿಷ್ಟ ಪದ್ಧತಿಗಳು ನಿರ್ಮೂಲನೆಯಾಗಿಲ್ಲ. ಶೋಷಿತರು ಸಂಕಷ್ಟದಲ್ಲಿ ಕಾಲ ಕಳೆಯುತ್ತಿದ್ದಾರೆ. ಇಂಥ ಸಮುದಾಯಗಳಿಗೆ ಸೌಲಭ್ಯ ಕಲ್ಪಿಸುವ ಬದಲಾಗಿ ಸಂಸದ ಅನಂತಕುಮಾರ ಅವರು ಕುತ್ತು ತರುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಒಕ್ಕೂಟದ ಪದಾಧಿಕಾರಿಗಳಾದ ಶಾಂತಪ್ಪ ಬಸರಿಗಿಡದ, ಕನಕಪ್ಪ ಮ್ಯಾಗಡೆ, ಆನಂದ ನಾಯಕ, ಬಾಲರಾಜ, ದುರಗಪ್ಪ ಕಲಕೇರಿ ಹಾಗೂ ಇತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.