ADVERTISEMENT

ನಿಗದಿತ ಅವಧಿಯಲ್ಲಿ ಪರಿಹಾರ ಒದಗಿಸಿ: ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್

ದೌರ್ಜನ್ಯ ನಿಯಂತ್ರಣ, ಜಿಲ್ಲಾ ಜಾಗೃತಿ, ಉಸ್ತುವಾರಿ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 5 ಜುಲೈ 2024, 15:55 IST
Last Updated 5 ಜುಲೈ 2024, 15:55 IST
ಕೊಪ್ಪಳದಲ್ಲಿ ಶುಕ್ರವಾರ ನಡೆದ ದೌರ್ಜನ್ಯ ನಿಯಂತ್ರಣ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸಭೆಯಲ್ಲಿ ಜಿಲ್ಲಾಧಿಕಾರಿ ನಲಿನ್‌ ಅತುಲ್‌ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್‌ ರತ್ನಂ ಪಾಂಡೆಯ ಇದ್ದರು
ಕೊಪ್ಪಳದಲ್ಲಿ ಶುಕ್ರವಾರ ನಡೆದ ದೌರ್ಜನ್ಯ ನಿಯಂತ್ರಣ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸಭೆಯಲ್ಲಿ ಜಿಲ್ಲಾಧಿಕಾರಿ ನಲಿನ್‌ ಅತುಲ್‌ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್‌ ರತ್ನಂ ಪಾಂಡೆಯ ಇದ್ದರು   

ಕೊಪ್ಪಳ: ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ, ಜಾತಿನಿಂದನೆ ಪ್ರಕರಣಗಳಲ್ಲಿ ಕಡ್ಡಾಯ ದೂರು ದಾಖಲಿಸಿ ಸಂತ್ರಸ್ತರಿಗೆ ನಿಯಮಾನುಸಾರ ನಿಗದಿತ ಅವಧಿಯಲ್ಲಿ ಪರಿಹಾರ ಒದಗಿಸಬೇಕು’ ಎಂದು ದೌರ್ಜನ್ಯ ನಿಯಂತ್ರಣ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಅಧ್ಯಕ್ಷರಾದ ಜಿಲ್ಲಾಧಿಕಾರಿ ನಲಿನ್ ಅತುಲ್ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಮಾಜ ಕಲ್ಯಾಣ ಇಲಾಖೆಯಿಂದ ನಡೆದ ಸಮಿತಿಯಲ್ಲಿ ಮಾತನಾಡಿದ ಅವರು ‘ಜಿಲ್ಲೆಯಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯದವರ ಮೇಲೆ ದೌರ್ಜನ್ಯವಾದರೆ ವೈದ್ಯಕೀಯ ಸೇವೆ ಒದಗಿಸಬೇಕು. ಸಂತ್ರಸ್ತರಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು’ ಎಂದು ನಿರ್ದೇಶನ ನೀಡಿದರು.

‘ಪರಿಶಿಷ್ಟ ಜಾತಿ, ಪಂಗಡಗಳ ಕಾಲೊನಿಯಲ್ಲಿ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಒದಗಿಸಬೇಕು. ದೌರ್ಜನ್ಯ ಪ್ರಕರಣಗಳಲ್ಲಿ ದೂರು ಸಲ್ಲಿಸಲು ಬಂದಾಗ ಯಾವುದೇ ಕಾರಣ ನೀಡದೆ ದೂರು ಸ್ವೀಕರಿಸಬೇಕು. ಪೊಲೀಸ್ ಠಾಣೆಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ನಿಯಮಾನುಸಾರ ವಿಲೇವಾರಿ ಮಾಡಲು ಕ್ರಮ ವಹಿಸಬೇಕು. ಸಮುದಾಯದ ಭವನಗಳ ನಿರ್ಮಾಣ, ಅಂಗನವಾಡಿಗಳ ದುರಸ್ತಿ ಸೇರಿದಂತೆ ಯಾವುದೇ ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು’ ಎಂದು ಹೇಳಿದರು.

ADVERTISEMENT

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜು ತಳವಾರ ಮಾತನಾಡಿ ‘2024ನೇ ಕ್ಯಾಲೆಂಡರ್ ವರ್ಷದಲ್ಲಿ 36 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, ಎಫ್.ಐ.ಆರ್ ಹಂತದಲ್ಲಿ 31 ಪ್ರಕರಣಗಳ ಹಾಗೂ ದೋಷಾರೋಪ ಪಟ್ಟಿ ಹಂತದಲ್ಲಿ 22 ಪ್ರಕರಣಗಳಲ್ಲಿ ₹49.25 ಲಕ್ಷ ಪರಿಹಾರ ಒದಗಿಸಲಾಗಿದೆ’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ರತ್ನಂ ಪಾಂಡೆಯ, ಹೆಚ್ಚುವರಿ ಎಸ್‌ಪಿ ಹೇಮಂತಕುಮಾರ್, ಸಹಾಯಕ ಆಯುಕ್ತ ಕ್ಯಾಪ್ಟನ್‌ ಮಹೇಶ್ ಮಾಲಗಿತ್ತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಕಾವ್ಯಾರಾಣಿ, ಕೊಪ್ಪಳ ತಹಶೀಲ್ದಾರ್‌ ವಿಠ್ಠಲ್ ಚೌಗಲಾ, ನಗರಸಭೆ ಪೌರಾಯುಕ್ತ ಗಣಪತಿ, ದೌರ್ಜನ್ಯ ನಿಯಂತ್ರಣ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಚಂದ್ರಪ್ಪ, ಚಂದಾಲಿಂಗಪ್ಪ ಮಾದರ, ಸಿದ್ದು ಮಣ್ಣಿನವರ, ಮರಳಸಿದ್ದಪ್ಪ ಪೂಜಾರ, ಮಾರುತಿ ಚಾಮಲಾಪುರ ಹಾಗೂ ಸುಂಕಪ್ಪ ಮಾಲಗತ್ತಿ ಪಾಲ್ಗೊಂಡಿದ್ದರು.

‘ಎಸ್‌ಸಿಪಿ-ಟಿಎಸ್‌ಪಿ ಅನುದಾನ ಅದೇ ಉದ್ದೇಶಕ್ಕಷ್ಟೇ ಬಳಸಿ’

ಕೊಪ್ಪಳ: ಸರ್ಕಾರದಿಂದ ಬಿಡುಗಡೆಯಾದ ಎಸ್‌ಸಿಪಿ-ಟಿಎಸ್‌ಪಿ ಅನುದಾನವನ್ನು ನಿಗದಿತ ಕಾಲವಧಿಯಲ್ಲಿ ಸಮರ್ಪಕವಾಗಿ ಹಾಗೂ ನಿರ್ದಿಷ್ಟ ಉದ್ದೇಶಕ್ಕೆ ಮಾತ್ರ ಬಳಸಬೇಕು ಎಂದು ಜಿಲ್ಲಾಧಿಕಾರಿ ನಲಿನ್‌ ಅತುಲ್‌ ಹೇಳಿದರು. ಶುಕ್ರವಾರ ನಡೆದ 2023-24ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಬುಡಕಟ್ಟು ಉಪಯೋಜನೆ ಅಧಿನಿಯಮ-2013 ರನ್ವಯ ಅನುಸೂಚಿತ ಜಾತಿಗಳು ಉಪಯೋಜನೆ ಬುಡಕಟ್ಟು ಉಪಯೋಜನೆಗಳ ಜಿಲ್ಲಾ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ‘ಸರ್ಕಾರ ವಿವಿಧ ಯೋಜನೆಗಳನ್ನು ಜಾರಿ ಮಾಡಿ ಅವುಗಳ ಸಮರ್ಪಕ ಅನುಷ್ಠಾನಕ್ಕೆ ಅಗತ್ಯವಿರುವಷ್ಟು ಅನುದಾನ ಮಾಡಲಾಗಿದೆ. ತಳ ಸಮುದಾಯದ ಅಭಿವೃದ್ಧಿ ಯೋಜನೆಯ ಮೂಲ ಧ್ಯೇಯವಾಗಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.