ಕನಕಗಿರಿ: ‘ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಹೋರಾಟಗಾರರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ’ ಎಂದು ತಹಶೀಲ್ದಾರ್ ವಿಶ್ವನಾಥ ಮುರಡಿ ಹೇಳಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಮತ್ತು ಪಟ್ಟಣ ಪಂಚಾಯಿತಿ ಆಶ್ರಯದಲ್ಲಿ ಗುರುವಾರ ಆಯೋಜಿಸಿದ್ದ 78ನೇ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ‘ಶಿಕ್ಷಣ ಪಡೆಯುವ ಮೂಲಕ ದೇಶದ ಅಭಿವೃದ್ಧಿಗೆ ಮಾರಕವಾಗಿರುವ ಬಡತನ, ಅನಕ್ಷರತೆ, ಬಾಲ್ಯವಿವಾಹ, ಜನಸಂಖ್ಯೆ, ನಿರುದ್ಯೋಗದಂತಹ ಸಾಮಾಜಿಕ ಪಿಡುಗುಗಳನ್ನು ಬುಡ ಸಮೇತ ಕಿತ್ತೊಗೆಯಬೇಕು’ ಎಂದು ತಿಳಿಸಿದರು.
ವಿವಿಧ ಶಾಲಾ ವಿದ್ಯಾರ್ಥಿಗಳು ಪಥ ಸಂಚಲನ ನಡೆಸಿದರು. ರುದ್ರಸ್ವಾಮಿ ಅನುದಾನಿತ ಪ್ರೌಢಶಾಲೆ(ಪ್ರಥಮ), ಸರ್ಕಾರಿ ಪ್ರೌಢಶಾಲೆ (ದ್ವಿತೀಯ) ಹಾಗೂ ಸಾಯಿತೇಜ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ತೃತೀಯ ಸ್ಥಾನ ಪಡೆದುಕೊಂಡರು.
ಕಣ್ಮನ ಸೆಳೆದ ಸಾಂಸ್ಕೃತಿಕ ಕಾರ್ಯಕ್ರಮ: ಮೈದಾನದಲ್ಲಿ ಪಟ್ಟಣದ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ನಡೆದ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಕಣ್ಮನ ಸೆಳೆದವು.
ಸಾಂಸ್ಕೃತಿಕ ಕಾರ್ಯಕ್ರಮ: ದ್ಯಾಮವ್ವನಗುಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ(ಪ್ರಥಮ), ಸರ್ಕಾರಿ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆ(ದ್ವಿತೀಯ) ಹಾಗೂ ಶಾಸಕರ ಮಾದರಿಯ ಹಿರಿಯ ಪ್ರಾಥಮಿಕ ಶಾಲೆ ತೃತೀಯ ಸ್ಥಾನ ಪಡೆಯಿತು. ವಿಜೇತರಿಗೆ ನೆನಪಿನ ಕಾಣಿಕೆ ಮತ್ತು ಪ್ರಮಾಣ ಪತ್ರ ನೀಡಲಾಯಿತು.
ಗೊಲಗೇರಪ್ಪ ಕಾಲೊನಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಕರ್ನಾಟಕ ಪಬ್ಲಿಕ್ ಶಾಲೆ(ಪ್ರಾಥಮಿಕ), ಎಕ್ಸೆಲ್ ಶಾಲೆ, ವೆಂಕಟೇಶ್ವರ ಹಿರಿಯ ಪ್ರಾಥಮಿಕ ಶಾಲೆ, ಮೌಲಾನ್ ಆಜಾದ ಆಂಗ್ಲ ಮಾಧ್ಯಮ ಶಾಲೆ, ಬಿಸಿಎಂ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸಾಯಿತೇಜ ಸೇರಿದಂತೆ ಇತರೆ ಶಾಲೆಗಳ ವಿದ್ಯಾರ್ಥಿಗಳು ಸಾಮೂಹಿಕ ನೃತ್ಯ ಪ್ರದರ್ಶಿಸಿದರು.
ತಾ.ಪಂ ಪ್ರಭಾರ ಇಒ ಕೆ.ರಾಜಶೇಖರ, ಪಿಐ ಎಂ.ಡಿ.ಫೈಜುಲ್ಲಾ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿರೂಪಾಕ್ಷಿ, ಗ್ರೇಡ್-2 ತಹಶೀಲ್ದಾರ್ ವಿರೂಪಾಕ್ಷಿ ಹೊರಪೇಟೆ, ಪ್ರಭಾರ ಉಪ ಖಜಾನಾಧಿಕಾರಿ ದುರ್ಗಾಸಿಂಗ್ ಠಾಕೂರ, ಶಿಕ್ಷಣ ಸಂಯೋಜಕ ಆಂಜನೇಯ, ಬ್ಲಾಕ್ ಸಂಪನ್ಮೂಲ ವ್ಯಕ್ತಿ ಸುಮಂಗಲ, ಬಿಆರ್‌ಪಿ ಸುಮಂಗಲಾ, ಸಮೂಹ ಸಂಪನ್ಮೂಲ ವ್ಯಕ್ತಿ ಮಹೇಶ ಇತರರು ಹಾಜರಿದ್ದರು.
ಸ್ವಾತಂತ್ರ್ಯ ದಿನಾಚರಣೆಯ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಎಸ್ಎಸ್ಎಲ್‌ಸಿ ಪರೀಕ್ಷೆ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಗೀತಾ ಹಂಚಾಟೆ ಹಾಗೂ ಎಂಎಚ್ ಪಿಎಸ್ ಶಾಲೆ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶಾಮೀದಸಾಬ್ ಲೈನದಾರ ಅವರು ಧ್ವಜಾರೋಹಣ ನಿರ್ವಹಿಸಿದರು. ಮೌನೇಶ ಬಡಿಗೇರ ಹಾಗೂ ಧನಂಜಯ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.