ಮಂಡ್ಯ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ವಿರುದ್ಧ ಕೃಷಿ ಸಹಾಯಕ ನಿರ್ದೇಶಕರು ರಾಜ್ಯಪಾಲರಿಗೆ ನೀಡಿದ್ದಾರೆ ಎನ್ನಲಾದ ದೂರಿನ ಸಂಬಂಧ ತನಿಖೆ ನಡೆಸಲು ಸಿಐಡಿ ಅಧಿಕಾರಿಗಳ ತಂಡ ಬುಧವಾರ ನಗರದ ಕೃಷಿ ಇಲಾಖೆ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿ ಮಂಗಳವಾರ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಸಿಐಡಿ ಐಜಿ ಪ್ರವೀಣ್ ಮಧುಕರ್ ಪವಾರ್ ನೇತೃತ್ವದ ತಂಡ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಕೃಷಿ ಜಂಟಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಿತು. ಜಂಟಿ ನಿರ್ದೇಶಕ ವಿ.ಎಸ್.ಅಶೋಕ್ ಅವರೊಂದಿಗೆ ಸಿಐಡಿ ಅಧಿಕಾರಿಗಳು ಕೆಲ ಕಾಲ ಮಾತುಕತೆ ನಡೆಸಿದರು.
ನಂತರ ಪತ್ರ ಬರೆದಿದ್ದಾರೆ ಎನ್ನಲಾದ ಎಲ್ಲಾ 7 ಸಹಾಯಕ ನಿರ್ದೇಶಕ ಜೊತೆ ಸಿಐಡಿ ಅಧಿಕಾರಿಗಳು ಪ್ರತ್ಯೇಕವಾಗಿ ಮಾತುಕತೆ ನಡೆಸಿದರು. ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಜೊತೆಯಲ್ಲಿದ್ದರು. ಒಂದು ಗಂಟೆಗೂ ಹೆಚ್ಚು ಕಾಲ ಅಧಿಕಾರಿಗಳ ತಂಡ ವಿಚಾರಣೆ ನಡೆಸಿತು.
ರಾಜ್ಯಪಾಲರ ಕಚೇರಿಗೆ ಬಂದಿರುವ ಪತ್ರ ಮೈಸೂರು ನಗರದ ಸರಸ್ವತಿ ಪುರಂ ಅಂಚೆ ಕಚೇರಿಯಿಂದ ಕಳುಹಿಸಲಾಗಿದೆ ಎಂಬ ಮಾಹಿತಿ ಇರುವ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳ ತಂಡ ಪರಿಶೀಲನೆಗಾಗಿ ಮೈಸೂರಿಗೆ ತೆರಳಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.