ಮಂಡ್ಯ: ಮಾಸ್ಕ್ ಧರಿಸಬೇಕು, ಅಂತರ ಕಾಪಾಡಿಕೊಳ್ಳಬೇಕು ಎಂದು ಬುದ್ಧಿ ಹೇಳಿದ್ದಕ್ಕೆ ಕ್ವಾರಂಟೈನ್‌ನಿಂದ ಬಿಡುಗಡೆಯಾಗಿ ಬಂದಿದ್ದ ನಾಲ್ವರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಆಶಾ ಕಾರ್ಯಕರ್ತೆ ಕೆ.ವೈ.ಶೋಭಾ ಶುಕ್ರವಾರ ಆರೋಪಿಸಿದ್ದಾರೆ.
14 ದಿನ ಕ್ವಾರಂಟೈನ್ ಅವಧಿ ಪೂರೈಸಿ ಗುರುವಾರ ಮಂಜೇಗೌಡ ರುದ್ರೇಶ, ಪ್ರಿಯಾಂಕಾ, ಗೀತಾ ಮತ್ತು ನಿಖಿಲ್ ಸಂತೇಬಾಚಹಳ್ಳಿ ಸಮೀಪದ ಕೊಡಗಹಳ್ಳಿ ಗ್ರಾಮಕ್ಕೆ ಬಂದಿದ್ದರು. ಕ್ವಾರಂಟೈನ್ ಅವಧಿ ಮುಗಿದಿದ್ದರೂ ಮನೆಯಲ್ಲೇ ಪ್ರತ್ಯೇಕವಾಗಿ ಇರಬೇಕು ಎಂದು ಅರಿವು ಮೂಡಿಸುತ್ತಿದ್ದೆ. ಈ ವೇಳೆ ಮಂಜೇಗೌಡ, ನಿನ್ನದು ಅತಿಯಾಯ್ತು. ನಮ್ಮ ಮೇಲೆ ದೌರ್ಜನ್ಯ ಮಾಡಿ ಮಾನಸಿಕ ಹಿಂಸೆ, ಕಿರುಕುಳ ನೀಡುತ್ತಿದ್ದೀಯಾ ಎಂದು ನಿಂದಿಸಿದರು ಎಂದು ದೂರಿದ್ದಾರೆ.
ನನ್ನ ಕರ್ತವ್ಯ ನಾನು ಮಾಡುತ್ತಿದ್ದೇನೆ ಎಂದು ಹೇಳಿದ್ದಕ್ಕೆ ಮಂಜೇಗೌಡ ಹಾಗೂ ಅವರ ಕುಟುಂಬ ಸದಸ್ಯರು ಏಕಾಏಕಿ ಹಲ್ಲೆ ಮಾಡಿ, ನನ್ನ ಮಾಂಗಲ್ಯ ಸರ ಕಿತ್ತುಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
‘ಆಶಾ ಕಾರ್ಯಕರ್ತೆ ಹಾಲಿನ ಡೇರಿ ನಿರ್ದೇಶಕಿಯೂ ಆಗಿದ್ದಾರೆ. ಡೇರಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆಯಾಗಿದೆ. ಬುದ್ಧಿ ಹೇಳಿದ್ದಕ್ಕೆ ಹಲ್ಲೆ ಮಾಡಲಾಗಿದೆ ಎಂಬ ಬಗ್ಗೆ ಪರಿಶೀಲಿಸಲಾಗುವುದು. ಆಶಾ ಕಾರ್ಯಕರ್ತೆ ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ಕೊಟ್ಟಿಲ್ಲ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.