ADVERTISEMENT

ಬೆಟ್ಟಿಂಗ್ ದಂಧೆಗೆ ಕಡಿವಾಣ ಹಾಕಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2024, 5:13 IST
Last Updated 6 ನವೆಂಬರ್ 2024, 5:13 IST
ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ವಿವಿಧ ಸಂಘಟನೆಗಳು ಹಾಗೂ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕುಮಾರ ಅವರು ಸಭೆ ನಡೆಸಿದರು. ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್‌.ಎಲ್‌.ನಾಗರಾಜು ಪಾಲ್ಗೊಂಡಿದ್ದರು 
ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ವಿವಿಧ ಸಂಘಟನೆಗಳು ಹಾಗೂ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕುಮಾರ ಅವರು ಸಭೆ ನಡೆಸಿದರು. ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್‌.ಎಲ್‌.ನಾಗರಾಜು ಪಾಲ್ಗೊಂಡಿದ್ದರು    

ಮಂಡ್ಯ: ‘ಜಿಲ್ಲೆಯಲ್ಲಿ ಬೆಟ್ಟಿಂಗ್ ದಂಧೆಗೆ ಸಿಲುಕಿ ಯುವಕನೊಬ್ಬ ಮನನೊಂದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದು ಬಹಳ ನೋವಿನ ಸಂಗತಿಯಾಗಿದೆ. ಜಿಲ್ಲೆಯಲ್ಲಿ ಬೆಟ್ಟಿಂಗ್ ದಂಧೆಗೆ ಕಡಿವಾಣ ಹಾಕಿ’ ಎಂದು ಜಿಲ್ಲಾಧಿಕಾರಿ ಕುಮಾರ ಅವರು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ವಿವಿಧ ಸಂಘಟನೆಗಳು ಹಾಗೂ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.

ಜೂಜು ಹಾಗೂ ಕ್ರಿಕೆಟ್ ಬೆಟ್ಟಿಂಗ್ ದಂಧೆಯು ಯುವಕರುಗಳನ್ನು ದಾರಿ ತಪ್ಪಿಸುತ್ತಿದ್ದು ಅವರನ್ನು ಸಾಲದ ಸುಳಿಯಲ್ಲಿ ಸಿಲುಕುವಂತೆ ಮಾಡುತ್ತಿದೆ. ಜನಪರ ಸಂಘಟನೆಗಳು ಯುವಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹೆಚ್ಚು ಆಯೋಜಿಸಿ ಜೂಜು ಹಾಗೂ ಬೆಟ್ಟಿಂಗ್‌ಗಳಿಂದ ದೂರವಿಡಿ ಎಂದರು.

ADVERTISEMENT

ಜಿಲ್ಲೆಯಲ್ಲಿ ಆರೋಗ್ಯಕರ ಸಮಾಜದ ನಿರ್ಮಾಣ ಮಾಡಲು ಬೆಟ್ಟಿಂಗ್, ಇಸ್ಪೀಟು ಹಾಗೂ ಯಾವುದೇ ರೀತಿಯ ಜೂಜುಗಳ ಬಗ್ಗೆ ಮಾಹಿತಿ ಅಥವಾ ದೂರು ನೀಡಲು ಪೊಲೀಸ್ ಇಲಾಖೆಯಿಂದ ಸಹಾಯವಾಣಿಯನ್ನು ತೆರೆಯಲಾಗುವುದು. ದೂರುದಾರರ ಹೆಸರನ್ನು ಗೌಪ್ಯವಾಗಿಡುವಂತೆ ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ‘ಜಿಲ್ಲೆಯಲ್ಲಿ ನಡೆಯುತ್ತಿರುವ ಬೆಟ್ಟಿಂಗ್ ದಂಧೆಯ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಬೆಟ್ಟಿಂಗ್, ಇನ್ನಾವುದೇ ಜೂಜುಗಳನ್ನು ತಡೆಯುವ ನಿಟ್ಟಿನಲ್ಲಿ ಪೊಲೀಸ್ ಬೀಟ್ ವ್ಯವಸ್ಥೆ ಮಾಡಲಾಗುವುದು’ ಎಂದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಎಲ್ ನಾಗರಾಜು, ಹೆಚ್ಚುವರಿ ಪೊಲೀಸ್ ಅಧೀಕ್ಷಕ ತಿಮ್ಮಯ್ಯ, ಉಪ ವಿಭಾಗಾಧಿಕಾರಿ ಶಿವಮೂರ್ತಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಆನಂದ್, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ ಎಸ್. ಹೆಚ್ ನಿರ್ಮಲಾ, ತಹಶೀಲ್ದಾರ್ ಶಿವಕುಮಾರ್ ಬಿರಾದಾರ್, ಮುಖಂಡರಾದ ಎಂ.ಬಿ. ನಾಗಣ್ಣಗೌಡ, ಸಿ.ಕುಮಾರಿ, ಚಂದ್ರು, ಎಚ್.ಡಿ ಜಯರಾಮ್ ಹಾಜರಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.