ನಾಗಮಂಗಲ: ‘ಅಗಾಧ ಪ್ರತಿಭೆಯುಳ್ಳ ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವ ಮಹತ್ಕಾರ್ಯವನ್ನು ಆದಿಚುಂಚನಗಿರಿ ಮಠ ಮಾಡುತ್ತಿದೆ’ ಎಂದು ಇನ್ಫೊಸಿಸ್ ಪ್ರತಿಷ್ಠಾನದ ಸಂಸ್ಥಾಪಕಿ ಸುಧಾಮೂರ್ತಿ ಹೇಳಿದರು.
ತಾಲ್ಲೂಕಿನ ಆದಿಚುಂಚನಗಿರಿ ಮಠದಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ ಅವರ ಪಟ್ಟಾಭಿಷೇಕದ ಅಂಗ ವಾಗಿ ಸೋಮವಾರ ಆಯೋಜಿಸಿದ್ದ ಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಮೇಳದಲ್ಲಿ ‘ವಿಜ್ಞಾತಂ ಪ್ರಶಸ್ತಿ’ ಸ್ವೀಕರಿಸಿ ಅವರು ಮಾತನಾಡಿದರು.
ಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಮೇಳಗಳ ಆಯೋಜನೆಯೂ ಮಕ್ಕಳಲ್ಲಿರುವ ಪ್ರತಿಭೆ ಅನಾವರಣಕ್ಕೆ ಸಹಕಾರಿಯಾಗುತ್ತದೆ. ಮಾತು ಕಡಿಮೆ ಮಾಡಿ ಹೆಚ್ಚು ಯೋಚನೆ ಮಾಡುವ ಮೂಲಕ ಸಮಾಜವನ್ನು ಮುನ್ನಡೆಸಲು ಸಾಧ್ಯವಿದೆ. ಜ್ಞಾನದ ಮಟ್ಟ ಹೆಚ್ಚಿಸಿಕೊಂಡು ಆತ್ಮವಿಶ್ವಾಸ ವೃದ್ಧಿಸಿಕೊಳ್ಳಬೇಕು ಎಂದರು.
‘ಎಷ್ಟೇ ಹಣ ಗಳಿಸಿದರೂ ಹೊಟ್ಟೆಗೆ ತಿನ್ನುವುದು ಮೂರು ಹಿಡಿ ಅನ್ನವಷ್ಟೇ ಎಂಬ ಅಂಶ ನನಗೆ ಅರ್ಥವಾಗಿದೆ. ಬಾಲಗಂಗಾಧರನಾಥ ಸ್ವಾಮೀಜಿ ಅವರು ನಾಡಿನಲ್ಲಿ ಶಿಕ್ಷಣ ಸಂಸ್ಥೆ, ಅನಾಥಾಶ್ರಮ, ಅನ್ನದಾಸೋಹ ನಡೆಸಿ ಲಕ್ಷಾಂತರ ಮಂದಿಯ ಬಾಳಿಗೆ ಬೆಳಕಾಗಿದ್ದಾರೆ. ನಿರ್ಮಲಾನಂದನಾಥ ಸ್ವಾಮೀಜಿ ಅವರಂಥ ಸಮರ್ಥ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಿರುವುದೂ ಪವಾಡವಾಗಿದೆ’ ಎಂದರು.
ಕೇಂದ್ರ ಸಚಿವ ಭಗವಂತ ಖೂಬಾ ಮಾತನಾಡಿ, ನಿರ್ಮಲಾನಂದನಾಥ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಮಠವು ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಮನುಷ್ಯನ ಬದುಕಿಗೆ ಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ತಹಳದಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರ ಸಾಮರ್ಥ್ಯ ಬಳಕೆ ಮಾಡಿಕೊಳ್ಳುವ ಅವಕಾಶವನ್ನು ವಿವಿಧ ಕಾರ್ಯಕ್ರಮಗಳ ಮೂಲಕ ನೀಡಿದ್ದಾರೆ. ಅವು ಜನರನ್ನು ವಿಜ್ಞಾನ ಮತ್ತು ತಂತ್ರಜ್ಞಾನದ ಕಡೆಗೆ ಆಕರ್ಷಿತರಾಗುವಂತೆ ಮಾಡುತ್ತಿವೆ ಎಂದರು.
ನಂತರ ಬೆಂಗಳೂರಿನ ಬೇಲಿ ಮಠದ ಶಿವರುದ್ರ ಸ್ವಾಮೀಜಿ ಮಾತನಾಡಿ, ಎಲ್ಲರಿಗೂ ಸ್ಫೂರ್ತಿದಾಯಕವಾಗಿರುವ ಸುಧಾಮೂರ್ತಿ ಅವರಿಗೆ ಪ್ರಶಸ್ತಿ ನೀಡಿರುವುದು ಸಂತಸದ ಸಂಗತಿ. ವಿಜ್ಞಾನ ಮತ್ತು ತಂತ್ರಜ್ಞಾನ ಇಂದು ಹಾದಿ ತಪ್ಪಿ ಹೋಗುವ ಮಟ್ಟಿಗೆ ಬೆಳೆದು ನಿಂತಿದೆ. ವಿಜ್ಞಾನ ಮತ್ತು ತಂತ್ರ ಜ್ಞಾನ ಅಯೋಗ್ಯರ ಕೈಗೆ ಸಿಗದಂತೆ ನೋಡಿ ಕೊಳ್ಳುವುದು ಮುಖ್ಯವಾಗಿದೆ ಎಂದರು.
ಪಾಂಡವಪುರ ಶಾಸಕ ಸಿ.ಎಸ್.ಪುಟ್ಟರಾಜು, ನಾಗಮಂಗಲ ಶಾಸಕ ಸುರೇಶ್ ಗೌಡ ಮಾತನಾಡಿ, ವಿಜ್ಞಾನ ಮತ್ತು ತಂತ್ರಜ್ಞಾನದ ಏಳಿಗೆಗಾಗಿ ನಿರ್ಮಲಾನಂದನಾಥ ಸ್ವಾಮೀಜಿ ನಿರಂ ತರವಾಗಿ ಶ್ರಮಿಸುತ್ತಿದ್ದಾರೆ ಎಂದರು.
ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಚನ ನೀಡಿದರು.
ಆದಿಚುಂಚನಗಿರಿ ಮಠ, ನಿರ್ಮಲಾ ನಂದನಾಥ ಸ್ವಾಮೀಜಿ ಸಾಧನೆ, ಸುಧಾಮೂರ್ತಿ ಅವರ ಜೀವನ, ಸಾಧನೆ ಕುರಿತ ವಿಡಿಯೊ ಪ್ರದರ್ಶಿಸಲಾಯಿತು. ಬಳಿಕ ನಿರ್ಮಲಾನಂದನಾಥ ಸ್ವಾಮೀಜಿ ಅವರ 10ನೇ ವರ್ಷದ ಪಟ್ಟಾಭಿಷೇಕ ಕಾರ್ಯಕ್ರಮ ನೆರವೇರಿಸಲಾಯಿತು.
ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ: ಮೇಳದ ಅಂಗವಾಗಿ ಆಯೋಜಿಸಿದ್ದ ಪಿಪಿಟಿ ಪ್ರದರ್ಶನ, ಕ್ವಿಜ್, ವಸ್ತು ಪ್ರದರ್ಶನ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಪಡೆದ ವಿದ್ಯಾರ್ಥಿಗಳನ್ನು ಪ್ರಶಸ್ತಿ ಪತ್ರ, ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.
ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮಾನಂದನಾಥ ಸ್ವಾಮೀಜಿ, ಬೆಂಗಳೂರು ಮಠದ ಪ್ರಕಾಶನಾಥ ಸ್ವಾಮೀಜಿ, ಹಾಸನ ಶಾಖಾ ಮಠದ ಶಂಭುನಾಥ ಸ್ವಾಮೀಜಿ, ಪ್ರತಾಪ್ ಸಿಂಹ ದೇಸಾಯಿ, ಆದಿಚುಂಚನಗಿರಿ ವಿವಿಯ ಉಪ ಕುಲಪತಿ ಡಾ.ಎಂ.ಎ.ಶೇಖರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.