ADVERTISEMENT

ಭ್ರೂಣ ಲಿಂಗ ಪತ್ತೆ, ಹತ್ಯೆ ಶಿಕ್ಷಾರ್ಹ ಅಪರಾಧ: ಡಾ.ಮಾರುತಿ

​ಪ್ರಜಾವಾಣಿ ವಾರ್ತೆ
Published 18 ಮೇ 2024, 14:34 IST
Last Updated 18 ಮೇ 2024, 14:34 IST
ಶ್ರೀರಂಗಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶನಿವಾರ ಭ್ರೂಣ ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ನಿಷೇಧ ಕಾಯ್ದೆ ಕುರಿತು ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಜಾಗೃತಿ ಫಲಕಗಳನ್ನು ಪ್ರದರ್ಶಿಸಿದರು
ಶ್ರೀರಂಗಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶನಿವಾರ ಭ್ರೂಣ ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ನಿಷೇಧ ಕಾಯ್ದೆ ಕುರಿತು ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಜಾಗೃತಿ ಫಲಕಗಳನ್ನು ಪ್ರದರ್ಶಿಸಿದರು   

ಶ್ರೀರಂಗಪಟ್ಟಣ: ‘ಭ್ರೂಣ ಲಿಂಗ ಪತ್ತೆ ಮಾಡುವುದು ಮತ್ತು ಭ್ರೂಣವನ್ನು ಹತ್ಯೆ ಮಾಡುವುದು ಶಿಕ್ಷಾರ್ಹ ಅಪರಾಧ’ ಎಂದು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಪಿ.ಮಾರುತಿ ಎಚ್ಚರಿಸಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ಶನಿವಾರ ಏರ್ಪಡಿಸಿದ್ದ ಭ್ರೂಣ ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ನಿಷೇಧ ಕಾಯ್ದೆ ಕುರಿತು ಏರ್ಪಡಿಸಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಸಾಮಾಜಿಕ ಸಮತೋಲನಕ್ಕೆ ಗಂಡು ಮತ್ತು ಹೆಣ್ಣು ಮಕ್ಕಳ ಸಂಖ್ಯೆ ಸಮನಾಗಿರಬೇಕು. ಲಿಂಗಾನುಪಾತದಲ್ಲಿ ವ್ಯತ್ಯಾಸವಾದರೆ ಸಂಘರ್ಷಗಳಿಗೆ ಕಾರಣವಾಗುತ್ತದೆ. ಹಾಗಾಗಿ ಸಾಮಾಜಿಕ ಅಸಮತೋಲನ ಉಂಟಾಗದಂತೆ ನೋಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ADVERTISEMENT

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್‌.ಡಿ. ಬೆನ್ನೂರ ಮಾತನಾಡಿ, ‘ಲಿಂಗಾನುಪಾತದಲ್ಲಿ ವ್ಯತ್ಯಾಸವಾದರೆ ಮಹಿಳೆಯರ ಮೇಲೆ ಅತ್ಯಾಚಾರ, ವಿವಾಹ ವಿಚ್ಛೇದನ, ಕೌಟುಂಬಿಕ ಕಲಹ ಇತರ ಸಮಸ್ಯೆಗಳು ತಲೆದೋರುತ್ತವೆ. ಭ್ರೂಣ ಹತ್ಯೆಯಿಂದ ಮಹಿಳೆಯ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೂ ವ್ಯತಿರಿಕ್ತ ಪರಿಣಾಮ ಉಂಟಾಗುತ್ತದೆ. ಭ್ರೂಣ ಪತ್ತೆ ಮತ್ತು ಹತ್ಯೆ ಮಹಾ ಅಪರಾಧವಾಗಿದ್ದು, ಅಂಥ ಪ್ರಕರಣಗಳ ಬಗ್ಗೆ ಮಾಹಿತಿ ಸಿಕ್ಕಿದರೆ ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಥವಾ ಪೊಲೀಸ್‌ ಠಾಣೆಗೆ ಮಾಹಿತಿ ನೀಡಬೇಕು ’ಎಂದು ತಿಳಿಸಿದರು.

ಪ್ರಸೂತಿ ತಜ್ಞರಾದ ಡಾ.ಕುಮಾರ್‌ ಮಾತನಾಡಿ, ‘ಗರ್ಭಿಣಿಯರು ಕಾಲ ಕಾಲಕ್ಕೆ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಬೇಕು. ರಕ್ತಹೀನತೆ ಉಂಟಾಗದಂತೆ ಜಾಗ್ರತೆ ವಹಿಸಬೇಕು’ ಎಂದರು.

ಆರೋಗ್ಯ ಸುರಕ್ಷಣಾಧಿಕಾರಿ ಬಿ.ಮಂಗಳಾ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ರಾಜ, ಎಂ.ಸಿ. ಚಂದನ್‌, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಸ್ಮಿತಾ, ಶುಶ್ರೂಣಾಧಿಕಾರಿ ಸುಧಾ, ಆಶಾ ಕಾರ್ಯಕರ್ತೆಯರಾದ ಚಾಂದನಿ, ಮೀನಾ, ಹೇಮಾವತಿ ಹಾಗೂ ಗರ್ಭಿಣಿಯರು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.