ADVERTISEMENT

ಸರ್ಕಾರಿ ಜಮೀನು ಅಕ್ರಮ ಪರಭಾರೆ: ತಹಶೀಲ್ದಾರ್‌ ಸೇರಿ 10 ಮಂದಿ ವಿರುದ್ಧ FIR

​ಪ್ರಜಾವಾಣಿ ವಾರ್ತೆ
Published 22 ಜೂನ್ 2024, 15:53 IST
Last Updated 22 ಜೂನ್ 2024, 15:53 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಮಂಡ್ಯ: ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರ್ಕಾರಿ ಜಮೀನು ಅಕ್ರಮ ಪರಭಾರೆಗೆ ಸಂಬಂಧಿಸಿದಂತೆ ತಹಶೀಲ್ದಾರ್‌ ಸೇರಿ 10 ಮಂದಿ ವಿರುದ್ಧ ಮಂಡ್ಯ ಪಶ್ಚಿಮ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಮೃತ ವ್ಯಕ್ತಿ ಹೆಸರಿನಲ್ಲಿ ನಕಲಿ ಆಧಾರ್‌ ಕಾರ್ಡ್‌ ಸೃಷ್ಟಿಸಿ, ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಮಂಡ್ಯ ಗ್ರಾಮದ ಸರ್ವೆ ನಂ.174/8ರಲ್ಲಿರುವ 3 ಗುಂಟೆ ಸರ್ಕಾರಿ ಜಮೀನನನ್ನು ಅಕ್ರಮವಾಗಿ ಪರಭಾರೆ ಮಾಡಿ ಭೂಗಳ್ಳರಿಗೆ ಅಕ್ರಮ ಖಾತೆ ಮಾಡಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಕೆ.ಆರ್‌.ರವೀಂದ್ರ ದೂರು ನೀಡಿದ್ದರು. ಇದನ್ನ ಆಧರಿಸಿ ಮಂಡ್ಯ ತಹಶೀಲ್ದಾರ್ ಆಗಿದ್ದ ಕುಂಞ ಅಹಮದ್, ಉಪ ನೋಂದಣಾಧಿಕಾರಿಯಾಗಿದ್ದ ಶಿವಲಿಂಗೇಗೌಡ, ವಿಶೇಷ ಭೂಸ್ವಾಧೀನಾಧಿಕಾರಿ ಆಗಿದ್ದ ಹೋಟೆಲ್ ಶಿವಪ್ಪ, ಕೆ.ಮಧುಸೂಧನ್ ಸೇರಿ 10 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ADVERTISEMENT

ರವೀಂದ್ರ ಅವರು ಭೂಸ್ವಾಧೀನವಾಗಿರುವ ಜಮೀನನ್ನು ಸತ್ತ ವ್ಯಕ್ತಿಯ ಹೆಸರಿನಲ್ಲಿ ಆಧಾರ್ ಸೃಷ್ಟಿಸಿ ಅಕ್ರಮವಾಗಿ ಪರಭಾರೆ ಮಾಡಿರುವ ಬಗ್ಗೆ ಜಿಲ್ಲಾಧಿಕಾರಿ ಮತ್ತು ಎಸ್ಪಿಗೆ ದೂರು ಸಲ್ಲಿಸಿದ್ದರು. ಈ ದೂರು ಆಧರಿಸಿ ಉಪವಿಭಾಗಾಧಿಕಾರಿ, ಭೂ ದಾಖಲೆಗಳ ಉಪನಿರ್ದೇಶಕರು ಸಲ್ಲಿಸಿರುವ ತನಿಖೆ ನಡೆಸಿ ವರದಿ ಸಲ್ಲಿಸಿದ್ದು, ಅಕ್ರಮವಾಗಿ ಖಾತೆ ಮಾಡಿರುವುದನ್ನು ಪತ್ತೆ ಹಚ್ಚಿದ್ದಾರೆ. ಇದನ್ನು ಆಧರಿಸಿ ಕ್ರಮ ಜರುಗಿಸಲಾಗಿದೆ.

ತಪ್ಪಿತಸ್ಥ ಅಧಿಕಾರಿಗಳು, ನೌಕರರ ವಿರುದ್ಧ ಸಿಸಿಎ ನಿಯಮಗಳನುಸಾರ ಶಿಸ್ತು ಕ್ರಮ ಕೈಗೊಳ್ಳಲು ದೋಷಾರೋಪಣಾ ಪಟ್ಟಿ ಸಿದ್ಧಪಡಿಸಿ ಕಳುಹಿಸುವಂತೆ ಜಿಲ್ಲಾಧಿಕಾರಿಯು ಉಪ ವಿಭಾಗಾಧಿಕಾರಿಗೆ ಸೂಚಿಸಿದ್ದರು. ಅದರಂತೆ ಆರೋಪಿಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.