ಮಂಡ್ಯ: ಸೇವೆ ಕಾಯಂ ಮಾಡುವಂತೆ ಒತ್ತಾಯಿಸಿ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕರಿಸಿ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ನಗರದ ಜಯ ಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜಮಾಯಿಸಿದ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ಸದಸ್ಯರು ಮಾನವ ಸರಪಳಿ ರಚಿಸಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದರು. ಬೇಡಿಕೆ ಈಡೇರಿಸುವಂತೆ ಘೋಷಣೆ ಕೂಗಿದರು. ನಂತರ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದರು.
ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 11 ಸಾವಿರ ಅತಿಥಿ ಉಪನ್ಯಾಸಕರು ಪ್ರಾಮಾಣಿಕ, ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ, ಸರ್ಕಾರ ಸೇವಾ ಭದ್ರತೆ ಇತರ ಸೌಲಭ್ಯ ನೀಡದಿರುವುದರಿಂದ ಜೀವನ ಸಾಮಾಜಿಕ ಮತ್ತು ಆರ್ಥಿಕವಾಗಿ ಶೋಚನೀಯ ಸ್ಥಿತಿಯಲ್ಲಿದೆ ಎಂದು ಆರೋಪಿಸಿದರು.
‘ಅತಿಥಿ ಉಪನ್ಯಾಸಕರ ಸೇವೆ ಕಾಯಂ ಮಾಡುವುದಾಗಿ ಆಶ್ವಾಸನೆ ನೀಡಿದ್ದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು ಅತಿಥಿ ಉಪನ್ಯಾಸಕರಿಗೆ ಜೀವನ ಭದ್ರತೆ ಒದಗಿಸಬೇಕು. ಅದೇ ರೀತಿ ಸರ್ಕಾರದ ಸವಲತ್ತುಗಳನ್ನು ದೊರಕಿಸಿಕೊಡಬೇಕು. ಇಲ್ಲವಾದರೆ ಪ್ರತಿಭಟನೆ ತೀವ್ರಗೊಳಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಸಂಘದ ಜಿ.ವಿ.ರಮೇಶ್, ಕೆ.ಪರಮೇಶ್, ಎಂ.ಎಸ್.ಚೆಲುವರಾಜು, ಎಸ್.ಮಂಜು, ಗಣೇಶ್, ಬಿ.ಆರ್.ಕುಮಾರ್, ಎಸ್.ಆರ್.ರಮ್ಯಾ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.