ಮಳವಳ್ಳಿ/ಬೆಳಕವಾಡಿ: ತಾಲ್ಲೂಕಿನ ಶಿವನಸಮುದ್ರ(ಬ್ಲಪ್) ಬಳಿಯ ವಿಶ್ವವಿಖ್ಯಾತ ಗಗನಚುಕ್ಕಿ ಜಲಪಾತೋತ್ಸವವು ಸೆಪ್ಟೆಂಬರ್‌ನಲ್ಲಿ ಆಯೋಜಿಸಲಿದ್ದು, ಶಾಸಕ ಪಿ.ಎಂ.ನರೇಂದ್ರಸ್ವಾಮಿ ನೇತೃತ್ವದಲ್ಲಿ ಸಿದ್ಧತೆ ಆರಂಭಗೊಂಡಿವೆ.
ಭಾನುವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಕುಮಾರ, ಜಿಲ್ಲಾ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯಿತಿಸಿಇಒ ಶೇಕ್ ತನ್ವೀರ್ ಆಸೀಫ್, ಉಪ ವಿಭಾಗಾಧಿಕಾರಿ ಎಂ.ಶಿವಮೂರ್ತಿ, ಇಲಾಖೆಗಳ ಅಧಿಕಾರಿಗಳೊಂದಿಗೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಭೇಟಿದರು. ಮಲ್ಲಿಕ್ಯಾತನಹಳ್ಳಿ ಬಳಿ ವಾಹನ ನಿಲುಗಡೆಗೆ ಜಾಗ ಗುರುತಿಸಿ ಲೋಕೋಪಯೋಗಿ ಇಲಾಖೆ ಹಾಗೂ ಪಂಚಾಯತ್ ರಾಜ್ ಇಲಾಖೆಗೆ ಸೂಚನೆನೀಡಿದರು.
ಗಗನಚುಕ್ಕಿ ಜಲಪಾತದ ಬಳಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಯನ್ನು ವೀಕ್ಷಿಸಿದ ಅವರು ತ್ವರಿತ ಕೆಲಸ ಮುಗಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು. ವೇದಿಕೆ ನಿರ್ಮಾಣ, ಊಟದ ವ್ಯವಸ್ಥೆಗೆ ಹಾಗೂ ಅತಿಥಿಗಳ ವಾಹನ ನಿಲುಗಡೆಗೆ ಗುರುತಿಸಿರುವ ಜಾಗವನ್ನು ಪರಿಶೀಲಿಸಿದರು. ಮಧ್ಯಾಹ್ನ ಲಕ್ಷದ್ವೀಪ ಹೋಟೆಲ್ ಸಭಾಂಗಣದಲ್ಲಿ ಸಭೆ ನಡೆಸಿದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅಧಿಕಾರಿಗಳಿಗೆ ಹಲವು ಜವಾಬ್ದಾರಿಯನ್ನು ವಹಿಸಿದರು.
ಅವರು ಮಾತನಾಡಿ, ಎರಡು ದಿನ ನಡೆಯುವ ಗಗನಚುಕ್ಕಿ ಜಲಪಾತೋತ್ಸವವು ಪ್ರತಿದಿನ ಬೆಳಿಗ್ಗೆ 11 ಗಂಟೆಯಿಂದ ರಾತ್ರಿ 11ಗಂಟೆವರೆಗೆ ನಡೆಯಲಿದೆ. ಸ್ಥಳೀಯ ಕಲಾವಿದರು ಸೇರಿದಂತೆ ಖ್ಯಾತನಾಮರಿಂದ ರಸಮಂಜರಿ, ಕಾಮಿಡಿ ಕಿಲಾಡಿಗಳಿಂದ ಮನೋರಂಜನೆ ಹಮ್ಮಿಕೊಳ್ಳಲಾಗಿದೆ. ಎರಡು ದಿನಗಳ ಕಾಲ ಲಕ್ಷಾಂತರ ಮಂದಿ ಭಾಗಿಯಾಗಲಿದ್ದಾರೆ. ಎಲ್ಲರಿಗೂ ಬೆಳಗಿನ ತಿಂಡಿ, ಮಧ್ಯಾಹ್ನ ಹಾಗೂ ರಾತ್ರಿ ಉಟದ ಜತೆಗೆ ನೀರಿನ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮವನ್ನು ಉದ್ಘಾಟಿಸುವ ನಿರೀಕ್ಷೆ ಇದೆ. ಸಚಿವರು ಹಾಗೂ ಶಾಸಕರು ಭಾಗಿಯಾಗಲಿದ್ದಾರೆ. 7ಗಂಟೆ ನಂತರ ಮಣಿಕಾಂತ್ ಕದ್ರಿ, ಚಂದನ್ ಶೆಟ್ಟಿ ನೇತೃತ್ವದಲ್ಲಿ ಸಂಗೀತ ಸಂಜೆ ನಡೆಯಲಿದೆ. 2ನೇ ದಿನ ಸಹ ಸ್ಥಳೀಯ ಕಲಾವಿದರ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅವಕಾಶ ಕಲ್ಪಿಸಿದ್ದು, ಸಂಜೆ 7ಗಂಟೆಗೆ ಹೆಸರಾಂತ ಸಂಗೀತ ನಿರ್ದೇಶಕ ರವಿ ಬಸ್ರೂರ್ ಸಾರಥ್ಯದಲ್ಲಿ ವಿಭಿನ್ನ ಕಾರ್ಯಕ್ರಮ ನಡೆಯಲಿದೆ. ಜಲಪಾತದ ವಿದ್ಯುತ್ ದೀಪಾಲಂಕಾರಕ್ಕೆ ಹೊಸ ವಿನ್ಯಾಸದ ರೂಪಿಸಲಾಗಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಲಕ್ಷಾಂತರ ಮಂದಿ ಭಾಗಿಯಾಗುವುದರಿಂದ ಭದ್ರತೆಯಲ್ಲಿ ಲೋಪವಾಗದಂತೆ ಮುನ್ನಚ್ಚರಿಕೆ ವಹಿಸಲಾಗುವುದು. ಇಲಾಖೆಯ ಸಲಹೆ-ಸೂಚನೆಗಳನ್ನು ಎಲ್ಲರೂ ಪಾಲಿಸಬೇಕು ಎಂದರು.
ಜಿಲ್ಲಾ ಪಂಚಾಯಿತಿ ಸಿಇಒ ಶೇಕ್ ತನ್ವೀರ್ ಆಸೀಫ್, ಉಪ ವಿಭಾಗಾಧಿಕಾರಿ ಎಂ.ಶಿವಮೂರ್ತಿ, ತಹಶೀಲ್ದಾರ್ ಕೆ.ಎನ್.ಲೋಕೇಶ್, ಡಿವೈಎಸ್ಪಿ ವಿ.ಕೃಷ್ಣಪ್ಪ, ತಾಲ್ಲೂಕು ಪಂಚಾಯಿತಿ ಇಒ ಎಚ್.ಸಿ.ಶ್ರೀನಿವಾಸ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಹದೇವಮ್ಮ ಅಧಿಕಾರಿಗಳು ಭಾಗಿಯಾಗಿದ್ದರು.
‘ಜಾನಪದ ಸೊಗಡು’
ಜಲಪಾತೋತ್ಸವದಲ್ಲಿ ಜಾನಪದ ಸೊಗಡಿನ ಹಳ್ಳಿಗಾಡಿನ ವೈಭವವನ್ನು ಬಿಂಬಿಸುವ ನಿಟ್ಟಿನಲ್ಲಿ ರೊಟ್ಟಿ ಕಟ್ಟೆಯಿಂದ ವೇದಿಕೆವರೆಗೂ ರಸ್ತೆ ಬದಿಯಲ್ಲಿ ಜಾನಪದ ಚಿತ್ರಗಳೊಂದಿಗೆ ಸ್ವಾಗತ ಫಲಕಗಳನ್ನು ಅಳವಡಿಸಬೇಕು ಹಾಗೂ ವಿದ್ಯುತ್ ದೀಪಾಲಂಕಾರ ಮಾಡಬೇಕು. ಮಲ್ಲಿಕ್ಯಾತನಹಳ್ಳಿ ಸಮೀಪವೇ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದು ಅಲ್ಲಿಂದ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಹೋಬಳಿಗಳಿಂದ ಉಚಿತ ಸಾರಿಗೆ ಸೌಲಭ್ಯ ಒದಗಿಸುವಂತೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.
ಭರದ ಸಿದ್ಧತೆ: ಕುಮಾರ ಜಿಲ್ಲಾಧಿಕಾರಿ ಕುಮಾರ ಮಾತನಾಡಿ ಈ ಬಾರಿ ಉತ್ತಮ ಮಳೆಯಾಗಿ ಕೆ.ಆರ್.ಎಸ್ ತುಂಬಿರುವುದರಿಂದ ಗಗನಚುಕ್ಕಿ ಜಲಪಾತೋತ್ಸವಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು ಸೆಪ್ಟೆಂಬರ್ ಮೊದಲ ಮೂರು ವಾರಗಳಲ್ಲಿ ಮಳೆಯ ಪ್ರಮಾಣವನ್ನು ಗಮನಿಸಿ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು. ಯಶ್ವಸಿ ಉತ್ಸವ ಆಯೋಜನೆ ಹಿನ್ನೆಲೆಯಲ್ಲಿ ವಿವಿಧ ಸಮಿತಿಗಳನ್ನು ರಚನೆ ಮಾಡಿ ಹಲವು ಇಲಾಖೆಗಳ ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.