ಮಂಡ್ಯ: ‘ಜಿಲ್ಲೆಯಲ್ಲಿ ಆ.27ರಂದು ಕರ್ನಾಟಕ ಲೋಕಸೇವಾ ಆಯೋಗದಿಂದ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ‘ಎ’ ಮತ್ತು ಗ್ರೂಪ್ ’ಬಿ’ ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಜರುಗಲಿದ್ದು, ಪರೀಕ್ಷೆಗಳನ್ನು ಪಾರದರ್ಶಕವಾಗಿ, ಯಾವುದೇ ಅವ್ಯವಹಾರಗಳಿಗೆ ಆಸ್ಪದ ನೀಡದೆ ನಿಷ್ಪಕ್ಷಪಾತವಾಗಿ ನಡೆಸಲು ಸಿದ್ಧತೆ ಮಾಡಿಕೊಳ್ಳಿ’ ಎಂದು ಜಿಲ್ಲಾಧಿಕಾರಿ ಕುಮಾರ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಬಗ್ಗೆ ವಿಡಿಯೊ ಸಂವಾದ ಸಭೆ ನಡೆಸಿ ಮಾತನಾಡಿದರು.
ಪರೀಕ್ಷೆ ನಡೆಸಲು ಮಂಡ್ಯ ಜಿಲ್ಲೆಯಲ್ಲಿ 12 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಒಟ್ಟು 6,617 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಯು ಬೆಳಿಗ್ಗೆ 10 ರಿಂದ 12 ಗಂಟೆವರೆಗೆ ಪತ್ರಿಕೆ-1 ಮತ್ತು ಮಧ್ಯಾಹ್ನ 2ರಿಂದ ಸಂಜೆ 4 ಗಂಟೆವರೆಗೆ ಪತ್ರಿಕೆ-2 ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಪರೀಕ್ಷೆ ಗೋಪ್ಯತೆಯಲ್ಲಿ ಯಾವುದೇ ರಾಜಿಯಿಲ್ಲದಂತೆ ನ್ಯಾಯ ಸಮ್ಮತವಾಗಿ ನಡೆಸಿ ಎಂದು ನಿರ್ದೇಶನ ನೀಡಿದರು. ಪರೀಕ್ಷೆಯು ನಡೆಯುವ ದಿನದಂದು ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ವ್ಯಾಪ್ತಿಯನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಿ ಮತ್ತು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಿ ಎಂದು ಹೇಳಿದರು.
ಪರೀಕ್ಷಾ ಕೊಠಡಿಯ ಒಳಗೆ ಯಾವುದೇ ರೀತಿಯ ಕೈಗಡಿಯಾರ, ಆಧುನಿಕ ಎಲೆಕ್ಟ್ರಾನಿಕ್ ಉಪಕರಣಗಳು, ಮೊಬೈಲ್ ಫೋನ್, ಬ್ಲೂಟೂತ್, ವೈಟ್ ಫ್ಲೂಯಿಡ್, ವೈರ್ ಲೆಸ್ ಸೆಟ್ಸ್, ಕ್ಯಾಲ್ಕುಲೇಟರ್ ಇತ್ಯಾದಿಗಳನ್ನು ತರುವುದನ್ನು ನಿಷೇಧಿಸಲಾಗಿದೆ ಎಂದರು.
ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರು ವೈದ್ಯರು/ ಆರೋಗ್ಯ ಸಿಬ್ಬಂದಿ ನೇಮಕ ಮಾಡುವುದು ಕೇಂದ್ರಗಳ ಸುತ್ತಮುತ್ತ ಸ್ವಚ್ಛತೆ ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಮೂಲಸೌಕರ್ಯ, ಸೂಕ್ತ ಆಸನ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸಬೇಕು ಎಂದು ಹೇಳಿದರು.
ಪರೀಕ್ಷಾ ಕೊಠಡಿಗಳಲ್ಲಿನ ಸಿ.ಸಿ.ಟಿ.ವಿ ಕ್ಯಾಮೆರಾಗಳು ಮತ್ತು ಬಾಡಿ ಕ್ಯಾಮೆರಾಗಳು ಪರೀಕ್ಷಾ ಪ್ರಕ್ರಿಯೆಯನ್ನು ಮತ್ತು ಎಲ್ಲಾ ಅಭ್ಯರ್ಥಿಗಳು ಹಾಗೂ ಸಂವೀಕ್ಷಕರ ಚಲನವಲನಗಳನ್ನು ಸ್ಪಷ್ಟವಾಗಿ ಸೆರೆಹಿಡಿಯುವಂತೆ ಅಳವಡಿಸುವ ಸಲುವಾಗಿ ಸೂಕ್ತ ಕ್ರಮವಹಿಸುವಂತೆ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಮತ್ತು ಸಂಬಂಧಪಟ್ಟ ಅಧಿಕಾರಿ/ ಸಿಬ್ಬಂದಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಉಪ ನಿರ್ದೇಶಕ ಕೃಷ್ಣಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್.ರಾಜಮೂರ್ತಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.