ಮಂಡ್ಯ: ‘ನ್ಯಾ.ನಾಗಮೋಹನ್‌ದಾಸ್ ವರದಿ ಪರಿಗಣಿಸಿ ಮುಂಬರುವ ಲೋಕಸಭೆ ಚುನಾವಣೆಯೊಳಗೆ ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆ ನೀಡಬೇಕು. ಇಲ್ಲವಾದಲ್ಲಿ ದೇಶದಾದ್ಯಂತ ಹೋರಾಟ ಮಾಡಲಾಗುವುದು’ ಎಂದು ಕುಂಬಳಗೋಡು ಚನ್ನಬಸವೇಶ್ವರ ಜ್ಞಾನಪೀಠದ ಪೀಠಾಧ್ಯಕ್ಷ ಚನ್ನಬಸವಾನಂದ ಸ್ವಾಮೀಜಿ ಎಚ್ಚರಿಕೆ ನೀಡಿದರು.
‘ಅಖಿಲ ಭಾರತ ಲಿಂಗಾಯತ ಸಮನ್ವಯ ಸಮಿತಿ ವತಿಯಿಂದ ನಿಯೋಗ ತೆರಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಸಲ್ಲಿಸಲಾಗುವುದು. ಹಲವು ವರ್ಷಗಳಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ನನೆಗುದಿಗೆ ಬಿದ್ದಿರುವ ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಯ ಹೋರಾಟವನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
‘ಪ್ರತಿಯೊಂದು ಜಿಲ್ಲಾ ಕೇಂದ್ರದಲ್ಲಿ ಬಸವೇಶ್ವರರ ಪುತ್ಥಳಿ ನಿರ್ಮಾಣವಾಗಬೇಕು, ಸರ್ಕಾರಿ ಕಚೇರಿಗಳಲ್ಲಿ ಬಸವೇಶ್ವರರ ಭಾವಚಿತ್ರ ಹಾಕಬೇಕು. ಕನಕಪುರ ತಾಲ್ಲೂಕಿನ ಸಾತನೂರು ಬಳಿಯ ದಾಳಿಂಬ ಗ್ರಾಮದ ಶ್ರೀಗುರು ಬಸವೇಶ್ವರ ಪ್ರಾರ್ಥನಾ ಮಂದಿರದ ಉದ್ಘಾಟನೆ ಹಾಗೂ ಬಸವಣ್ಣನವರ ಪುತ್ಥಳಿ ಅನಾವರಣ ಕಾರ್ಯಕ್ರಮ ಜುಲೈ 23ರಂದು ನಡೆಯಲಿದೆ’ ಎಂದರು.
ಲಿಂಗಾಯತ ಮಹಾಸಭಾ ಟ್ರಸ್ಟ್ ಅಧ್ಯಕ್ಷ ಎಂ.ಎಸ್.ಮಂಜುನಾಥ್ ಬೆಟ್ಟಹಳ್ಳಿ, ಶಿವಲಿಂಗಯ್ಯ, ನಂದೀಶ್, ಚಂದ್ರಶೇಖರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.