ಮಳವಳ್ಳಿ: ‘ಸತ್ಯವನ್ನು ಎತ್ತಿ ಹಿಡಿಯುವಲ್ಲಿ ಮತ್ತು ಸಾಮಾಜಿಕ ನ್ಯಾಯವನ್ನು ಪರಿಪಾಲಿಸುವಲ್ಲಿ ಸದಾ ಮಗ್ನರಾಗಿದ್ದ ಮಹಾತ್ಮ ಗಾಂಧೀಜಿ ಅವರ ಆದರ್ಶಗಳನ್ನು ನಾವೆಲ್ಲ ಪಾಲಿಸಬೇಕು’ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಕರೆ ನೀಡಿದರು.
ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬುಧವಾರ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಗಾಂಧಿ ಜಯಂತಿ ಅಂಗವಾಗಿ ಆಯೋಜಿಸಿದ್ದ ‘ಗಾಂಧಿ ಭಾರತ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ದೇಶದ ಅಭಿವೃದ್ಧಿ ಹಾಗೂ ಶಾಂತಿಗಾಗಿ ನೀಡಿರುವ ಅನೇಕ ಸಂದೇಶಗಳು ಸರ್ವಕಾಲಿಕ ನಮ್ಮ ಬದ್ಧತೆಯಿಂದ ಕೆಲಸ ಕಾರ್ಯಗಳನ್ನು ಮಾಡುವ ಸಂಕಲ್ಪವನ್ನು ಕಾರ್ಯಕರ್ತರು ಹೊಂದಬೇಕು. 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆಯನ್ನು ಮಹಾತ್ಮ ಗಾಂಧೀಜಿ ವಹಿಸಿ, ನೂರು ವರ್ಷ ಪೂರೈಸಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಅವರ ತ್ಯಾಗ ಮರೆಯುವಂತಿಲ್ಲ’ ಎಂದು ಬಣ್ಣಿಸಿದರು.
ವಿಧಾನಸೌಧ ಹಾಗೂ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದ ನೇರಪ್ರಸಾರ ಮಾಡಲಾಯಿತು. ಶಾಸಕರು ಸೇರಿದಂತೆ ಎಲ್ಲರೂ ಪ್ರತಿಜ್ಞಾ ವಿಧಿ ಸ್ವೀಕಾರ ಮಾಡಿದರು.
ಇದಕ್ಕೂ ಮುನ್ನ ಪಟ್ಟಣದ ಪ್ರವಾಸಿ ಮಂದಿರ ಮುಂಭಾಗದ ಡಾ. ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಮಾಲಾರ್ಪಣೆ ಮಾಡಿ ನಂತರ ನೂರಾರು ಕಾರ್ಯಕರ್ತರೊಂದಿಗೆ ಘೋಷಣೆ ಕೂಗುತ್ತಾ ಸದ್ಭಾವನಾ ನಡಿಗೆ ಮೂಲಕ ಸಾಗಿದರು.
ಪುರಸಭೆ ಸದಸ್ಯರಾದ ಎಂ.ಎನ್.ಶಿವಸ್ವಾಮಿ, ಎಂ.ಆರ್.ರಾಜಶೇಖರ್, ಪ್ರಮೀಳಾ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಚಿಕ್ಕಲಿಂಗಯ್ಯ, ಶಾಸಕರ ಪುತ್ರ ಯುವರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ದೊಡ್ಡಯ್ಯ, ಸಿ.ಪಿ.ರಾಜು, ನಿಕಟ ಪೂರ್ವ ಅಧ್ಯಕ್ಷ ಕೆ.ಜೆ.ದೇವರಾಜು, ಮಹಿಳಾ ಘಟಕದ ಅಧ್ಯಕ್ಷೆ ಸುಷ್ಮಾ ರಾಜು, ಯುವ ಘಟಕದ ಅಧ್ಯಕ್ಷ ಕೃಷ್ಣಮೂರ್ತಿ, ಶಿವಮೂರ್ತಿ, ಕಾರ್ಯಾಧ್ಯಕ್ಷ ಶಿವಮಾದೇಗೌಡ, ಕೆಪಿಸಿಸಿ ಸದಸ್ಯ ಪುಟ್ಟಸ್ವಾಮಿ, ಮುಖಂಡರಾದ ಆರ್.ಎನ್.ವಿಶ್ವಾಸ್, ಮುಟ್ಟನಹಳ್ಳಿ ಅಂಬರೀಶ್, ಕುಂದೂರು ಪ್ರಕಾಶ್, ಎಂ.ಲಿಂಗರಾಜು, ಸಿ.ಮಾಧು, ಮಹದೇವು, ರೋಹಿತ್ ಗೌಡ (ದೀಪು), ಶ್ರೀನಿವಾಸ್, ಶ್ರೀಕಾಂತ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.