ADVERTISEMENT

ಕೆ.ಆರ್‌.ಎಸ್‌. ಜಲಾಶಯದಿಂದ ನಾಲೆಗೆ ನೀರು ಹರಿಸಲು ರೈತರ ಆಗ್ರಹ

​ಪ್ರಜಾವಾಣಿ ವಾರ್ತೆ
Published 25 ಜೂನ್ 2024, 12:51 IST
Last Updated 25 ಜೂನ್ 2024, 12:51 IST
   

ಮಂಡ್ಯ: ಕೆ.ಆರ್‌.ಎಸ್ ಮತ್ತು ಹೇಮಾವತಿ ಜಲಾಶಯಗಳಿಂದ ನೀರು ಹರಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾವಣೆಗೊಂಡ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು. ನಂತರ ಹೆಚ್ಚುವರಿ ಜಿಲ್ಲಾಧಿಕಾರಿ ಎಚ್‌.ಎಲ್‌.ನಾಗರಾಜು ಅವರಿಗೆ ಮನವಿ ನೀಡಿದರು.

ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎ.ಎಲ್‌.ಕೆಂಪೂಗೌಡ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ ಕೂಡಲೇ ವಿಶ್ವೇಶ್ವರಯ್ಯ ನಾಲೆಗೆ ನೀರು ಹರಿಸಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ. ಕೃಷ್ಣರಾಜಸಾಗರ ಜಲಾಶಯ ಹಾಗೂ ಹೇಮಾವತಿ ಜಲಾಶಯಗಳಿಂದ ಜನ– ಜಾನುವಾರುಗಳಿಗೆ ಹಾಗೂ ಹಾಲಿ ಬೆಳೆದಿರುವ ಬೆಳೆಗಳು ಹಾಗೂ ಒಣಗಿ ನಿಂತಿರುವ ಬೆಳೆಗಳ ರಕ್ಷಣೆಗೆ ತಕ್ಷಣ ನೀರು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ADVERTISEMENT

ರೈತರ ಸಮಸ್ಯೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಕಲ್ಲು ಗಣಿಗಾರಿಕೆ ನಡೆಸುವುದರ ಸಂಬಂಧ ಅಣೆಕಟ್ಟೆ ಸುರಕ್ಷಣಾ ಸಮಿತಿ ಮಾಡಿದರೆ ಸಮಸ್ಯೆ, ಗೊಂದಲ ನಿವಾರಣೆಯಾಗುತ್ತದೆ. ಆದರೆ, ಈ ವಿಷಯದಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಾಲು ಉತ್ಪಾದಕರಿಗೆ ನೀಡಬೇಕಾಗಿರುವ ಹಾಲಿನ ಪ್ರೋತ್ಸಾಹಧನವನ್ನು ಈ ಕೂಡಲೇ ಬಿಡುಗಡೆ ಮಾಡಬೇಕು. ಕೇಂದ್ರ ಸರ್ಕಾರವು ಕಬ್ಬಿಗೆ ಎಫ್.ಆರ್.ಪಿ. ದರವನ್ನು ಶೇ 8.5 ಇಳುವರಿಗೆ ನಿಗದಿಪಡಿಸಿ ಟನ್ ಕಬ್ಬಿಗೆ ₹4,500 ಘೋಷಣೆ ಮಾಡಬೇಕು. ರಾಜ್ಯ ಸರ್ಕಾರವು ಈಗಾಗಲೇ ಘೋಷಣೆ ಮಾಡಿರುವಂತೆ ಬಾಕಿ ₹150 ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

2020ರ ಅಣೆಕಟ್ಟು ಸುರಕ್ಷತಾ ಕಾಯಿದೆಯನ್ನು ಕೂಡಲೇ ಜಾರಿಗೊಳಿಸಲು ಸರ್ಕಾರವನ್ನು ಒತ್ತಾಯಿಸುವುದು. ಹಾಗೂ ರಾಷ್ಟ್ರೀಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಈಗಾಗಲೇ ಅಣೆಕಟ್ಟೆಗೆ ಗಣಿಗಾರಿಕೆಯಿಂದ ಅಪಾಯವಿದೆ ಎಂದು ಹೇಳಿರುವುದರಿಂದ ಕೆ.ಆರ್.ಎಸ್. ಸುತ್ತ ಪರೀಕ್ಷಾರ್ಥ ಸ್ಫೋಟ ಮಾಡದಂತೆ ಸರ್ಕಾರವು ಸುಗ್ರೀವಾಜ್ಞೆ ತರಬೇಕು. ಕೇಂದ್ರ ಸರ್ಕಾರವು ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನಾತ್ಮಕವಾಗಿ ಶಾಸನ ರೂಪಿಸಬೇಕು ಎಂದು ಆಗ್ರಹಿಸಿದರು.

ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿಕೊಳ್ಳಲು ಈ ಹಿಂದೆ ಇದ್ದಂತಹ ಅಕ್ರಮ– ಸಕ್ರಮ ಪದ್ಧತಿಯನ್ನು ಸರ್ಕಾರವು ಮುಂದುವರಿಸಬೇಕು. ಜಿಲ್ಲೆಯ ಎಲ್ಲಾ ಸಕ್ಕರೆ ಕಾರ್ಖಾನೆಗಳಿಗೆ ದರ ನಿಗದಿಪಡಿಸಿ ಪ್ರಾರಂಭಿಸುವಂತೆ ಸರ್ಕಾರ ನಿರ್ದೇಶನ ನೀಡಬೇಕು. ಜತೆಗೆ ನೀಟ್ ಪರೀಕ್ಷೆಯಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಪಟ್ಟಂತೆ ಕಾನೂನು ಕ್ರಮ ಕೈಗೊಳ್ಳಬೇಕು. ಹಾಗೂ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯ ಸರಿಪಡಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಕೆ.ಟಿ.ಗೋವಿಂದೇಗೌಡ, ಕೆ.ಆರ್.ಪೇಟೆ ರಾಜೇಗೌಡ, ಲಿಂಗಾಪ್ಪಾಜಿ, ಪ್ರಸನ್ನ ಎನ್.ಗೌಡ, ಜಿ.ಮಲ್ಲಿಗೆರೆ ಅಣ್ಣಯ್ಯ, ಜಯರಾಂ, ನಾಗಣ್ಣ, ಶಿವಳ್ಳಿ ಚಂದ್ರು, ವಿಜಯಕುಮಾರ್, ಕೋಣನಹಳ್ಳಿ ಮಂಜು, ರವಿಕುಮಾರ್, ಹಿರೇಮರಳಿ ಶಿವಕುಮಾರ್, ಎಣ್ಣೆಹೊಳೆಕೊಪ್ಪಲು ಮಂಜು, ರಘು, ಲತಾ ಶಂಕರ್, ಮಲ್ಲೇಶ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.