ಮಂಡ್ಯ: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿಯಿಂದ ಅ.4ರಿಂದ 7ರವರೆಗೆ ಶ್ರೀರಂಗಪಟ್ಟಣದಲ್ಲಿ ನಾಡಹಬ್ಬ 414ನೇ ಶ್ರೀರಂಗಪಟ್ಟಣ ದಸರಾವನ್ನು ಆಯೋಜಿಸಲಾಗಿದೆ.
ಅ.4ರಂದು ಮಧ್ಯಾಹ್ನ 12.30ಕ್ಕೆ ನಂದಿಧ್ವಜ ಪೂಜೆ ನೆರವೇರಿಸಲಾಗುವುದು. ಮಧ್ಯಾಹ್ನ 2.30ರಿಂದ 3 ಗಂಟೆಯವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಅಗ್ರಪೂಜೆ ಹಾಗೂ ಜಂಬೂಸವಾರಿ ಮೆರವಣಿಗೆಗೆ ನಟ ಶಿವರಾಜ್ ಕುಮಾರ್ ಅವರು ಚಾಲನೆ ನೀಡಲಿದ್ದಾರೆ.
ಅ.4ರಂದು ಸಂಜೆ 6ಕ್ಕೆ ಶ್ರೀರಂಗನಾಥಸ್ವಾಮಿ ದೇವಾಲಯದ ಆವರಣದ ಶ್ರೀರಂಗ ವೇದಿಕೆಯಲ್ಲಿ ಶ್ರೀರಂಗಪಟ್ಟಣ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ ಜರುಗಲಿದೆ. ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಶ್ರೀರಂಗಪಟ್ಟಣದ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ ಬಂಡಿಸಿದ್ದೇಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ ಮಹದೇವಪ್ಪ, ಇಂಧನ ಸಚಿವ ಕೆ.ಜೆ. ಜಾರ್ಜ್, ಕಂದಾಯ ಸಚಿವ ಕೃಷ್ಣ ಭೈರೇಗೌಡ, ಕಾನೂನು ಸಚಿವ ಎಚ್.ಕೆ. ಪಾಟೀಲ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ವೈದ್ಯಕೀಯ ಶಿಕ್ಷಣ ಶರಣಪ್ರಕಾಶ ಪಾಟೀಲ್, ವಿಧಾನಪರಿಷತ್ ಸದಸ್ಯರಾದ ಮಧು ಜಿ. ಮಾದೇಗೌಡ, ದಿನೇಶ ಗೂಳಿಗೌಡ, ಕೆ. ವಿವೇಕಾನಂದ ಹಾಗೂ ಶಾಸಕರಾದ ಪಿ.ರವಿಕುಮಾರ್, ಪಿ.ಎಂ. ನರೇಂದ್ರಸ್ವಾಮಿ, ದರ್ಶನ್ ಪುಟ್ಟಣ್ಣಯ್ಯ, ಎಚ್.ಟಿ. ಮಂಜು, ಕೆ.ಎಂ ಉದಯ, ಮೈಸೂರು ಸಕ್ಕರೆ ಕಂಪನಿ ಅಧ್ಯಕ್ಷ ಸಿ.ಡಿ. ಗಂಗಾಧರ ಮತ್ತು ಕಿರಂಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಚ್.ಪಿ. ಶ್ರುತಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮಗಳ ವಿವರ: ಅ.4ರಂದು ಬೆಳಿಗ್ಗೆ 7 ಗಂಟೆಗೆ ತಾಲ್ಲೂಕು ಕ್ರೀಡಾಂಗಣದಲ್ಲಿ ಫಿಟ್ ಇಂಡಿಯಾ ಮ್ಯಾರಥಾನ್ ಸ್ಪರ್ಧೆ ನಡೆಯಲಿದೆ. ಮಧ್ಯಾಹ್ನ 2.30ಕ್ಕೆ ಕಿರಂಗೂರು ಬನ್ನಿಮಂಟಪದಲ್ಲಿ ಜಂಬೂ ಸವಾರಿ ನಡೆಯಲಿದೆ. ಸಂಜೆ 6 ಕ್ಕೆ ಶ್ರೀರಂಗನಾಥಸ್ವಾಮಿ ದೇವಾಲಯದ ಆವರಣದ ಶ್ರೀರಂಗ ವೇದಿಕೆಯಲ್ಲಿ ದಸರಾ ಉದ್ಘಾಟನಾ ಸಮಾರಂಭ ನಡೆಯಲಿದೆ. ಸಂಜೆ 7ಕ್ಕೆ ಗಾಯಕರು ಹಾಗೂ ಸಂಗೀತ ನಿರ್ದೇಶಕರಾದ ವಾಸುಕಿ ವೈಭವ್ ಮತ್ತು ತಂಡದಿಂದ ಸಂಗೀತ ರಸಸಂಜೆ ಕಾರ್ಯಕ್ರಮ ನಡೆಯಲಿದೆ.
ಅ.6ರಂದು ಬೆಳಿಗ್ಗೆ 6 ಗಂಟೆಗೆ ಶ್ರೀರಂಗನಾಥಸ್ವಾಮಿ ದೇವಾಲಯದ ಆವರಣದ ಶ್ರೀರಂಗ ವೇದಿಕೆಯಲ್ಲಿ ಸಾಮೂಹಿಕ ಸೂರ್ಯ ನಮಸ್ಕಾರ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ಶ್ರೀರಂಗಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಹಗ್ಗ ಜಗ್ಗಾಟ ನಡೆಯಲಿದೆ. ಬೆಳಿಗ್ಗೆ 10 ಗಂಟೆಯಿಂದ 12.30ಕ್ಕೆ ಗಂಜಾಂನ ಶ್ರೀದೇವಿ ಚಿತ್ರಮಂದಿರ, ಬಾಬುರಾಯನ ಕೊಪ್ಪಲಿನ ಭಾರತಿ ಚಿತ್ರಮಂದಿರ ಹಾಗೂ ಅರಕೆರೆಯ ಮಂಜುನಾಥ್ ಚಿತ್ರಮಂದಿರಗಳಲ್ಲಿ ‘ಸಿನಿಮೋತ್ಸವ’ ನಡೆಯಲಿದೆ.
ಮಧ್ಯಾಹ್ನ 2ಕ್ಕೆ ಶ್ರೀರಂಗ ವೇದಿಕೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ವಿಚಾರಗೋಷ್ಠಿ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ಸ್ಥಳೀಯ ಕಲಾತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಸಂಜೆ 7ಕ್ಕೆ ಕಲಾವಿದರು ಹಾಗೂ ಹಿನ್ನೆಲೆ ಗಾಯಕರಾದ ಆಲ್ ಓಕೆ ಮತ್ತು ತಂಡ ಹಾಗೂ ರಾತ್ರಿ 9ಕ್ಕೆ ಹಿನ್ನೆಲೆ ಗಾಯಕರಾದ ಲಗೋರಿ ಮತ್ತು ತಂಡದಿಂದ ಸಂಗೀತ ರಸಸಂಜೆ ಕಾರ್ಯಕ್ರಮ ನಡೆಯಲಿದೆ.
ಅರ್ಜುನ್ ಜನ್ಯಾ, ವಿಜಯಪ್ರಕಾಶ್ ತಂಡದಿಂದ ‘ರಸಸಂಜೆ’ ವಿವಿಧ ಚಿತ್ರಮಂದಿರಗಳಲ್ಲಿ ‘ಸಿನಿಮೋತ್ಸವ’ ಸಾಂಸ್ಕೃತಿಕ ಕಾರ್ಯಕ್ರಗಳ ರಸದೌತಣ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.