ADVERTISEMENT

ಯುವಕರು ಮಾದಕ ವ್ಯಸನಕ್ಕೆ ಬಲಿಯಾಗದಿರಿ: ಪಿಎಸ್ಐ ರವಿಕುಮಾರ್

​ಪ್ರಜಾವಾಣಿ ವಾರ್ತೆ
Published 26 ಜೂನ್ 2024, 13:49 IST
Last Updated 26 ಜೂನ್ 2024, 13:49 IST
ನಾಗಮಂಗಲ ತಾಲ್ಲೂಕಿನ ದೇವಲಾಪುರ ಕರ್ನಾಟಕ ಪಬ್ಲಿಕ್ ಸ್ಕೂಲ್ ಶಾಲೆಯಲ್ಲಿ ಬುಧವಾರ ಆಯೋಜಿಸಿದ್ದ ಮಾದಕ ದ್ರವ್ಯ ವಿರೋಧಿ ದಿನದ ಅಂಗವಾಗಿ ವಿದ್ಯಾರ್ಥಿಗಳು ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಜಾಥಾ ನಡೆಸಿದರು
ನಾಗಮಂಗಲ ತಾಲ್ಲೂಕಿನ ದೇವಲಾಪುರ ಕರ್ನಾಟಕ ಪಬ್ಲಿಕ್ ಸ್ಕೂಲ್ ಶಾಲೆಯಲ್ಲಿ ಬುಧವಾರ ಆಯೋಜಿಸಿದ್ದ ಮಾದಕ ದ್ರವ್ಯ ವಿರೋಧಿ ದಿನದ ಅಂಗವಾಗಿ ವಿದ್ಯಾರ್ಥಿಗಳು ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಜಾಥಾ ನಡೆಸಿದರು   

ನಾಗಮಂಗಲ: ‘ಯುವ ಜನತೆ ಮಾದಕ ವ್ಯಸನಗಳಿಗೆ ದಾಸರಾಗಿ ಭವಿಷ್ಯವನ್ನು ಹಾಳು ಮಾಡಿಕೊಳ್ಳದೆ, ಮಾದಕ ದ್ರವ್ಯಗಳಿಂದ ದೂರವಿರಿ’ ಎಂದು ಗ್ರಾಮಾಂತರ ಠಾಣೆಯ ಪಿಎಸ್ಐ ರವಿಕುಮಾರ್ ವಿದ್ಯಾರ್ಥಿಗಳಿಗೆ ಹೇಳಿದರು.

ತಾಲ್ಲೂಕಿನ ದೇವಲಾಪುರ ಕರ್ನಾಟಕ ಪಬ್ಲಿಕ್ ಸ್ಕೂಲ್ ಶಾಲೆಯಲ್ಲಿ ಬುಧವಾರ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವಕ್ಕೆ ಒಳಗಾಗುತ್ತಿರುವ ಹಲವಾರು ಯುವಕರು ಮಾದಕ ದ್ರವ್ಯಕ್ಕೆ ಬಲಿಯಾಗುತ್ತಿದ್ದು, ಅವರಲ್ಲಿ ಜಾಗೃತಿ ಮೂಡಿಸುವ ಮೂಲಕ ಅವುಗಳಿಂದ ದೂರವಿರುವಂತೆ ಮಾಡುವ ಅನಿವಾರ್ಯತೆ ಹೆಚ್ಚಿದೆ’ ಎಂದರು.

ಶಿಕ್ಷಕ ಎನ್. ಸಿ.ಶಿವಕುಮಾರ್ ಮಾತನಾಡಿ, ‘ವಿದ್ಯಾರ್ಥಿಗಳು ತಾವು ಜಾಗೃತರಾಗುವ ಜೊತೆಗೆ ತಮ್ಮ ಸುತ್ತಮುತ್ತಲಿನ ಸಮಾಜದಲ್ಲೂ ಜಾಗೃತಿ ಮೂಡಿಸಿದಾಗ ಮಾತ್ರ ಇಂಥ ಕಾರ್ಯಕ್ರಮಗಳು ಅರ್ಥಪೂರ್ಣ ಎನಿಸುತ್ತವೆ’ ಎಂದರು.

ADVERTISEMENT

ವೇದಿಕೆ ಕಾರ್ಯಕ್ರಮದ ನಂತರ ಗ್ರಾಮದಲ್ಲಿ ಜಾಥಾ ನಡೆಸಿ ಪ್ರಮುಖ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಘೋಷಣೆಗಳನ್ನು ಕೂಗುವ ಮೂಲಕ ಸಾರ್ವಜನಿಕರಲ್ಲಿ ವಿದ್ಯಾರ್ಥಿಗಳು ಜಾಗೃತಿ ಮೂಡಿಸಿದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ನಂಜಮ್ಮಣ್ಣಿ, ಶಿಕ್ಷಕರಾದ ಗಿರೀಶ್, ನೂರ್ ಅಫ್ರೋಜ್, ನಾಗೇಂದ್ರ, ಇಂದ್ರೇಶ್, ನವೀನ್, ಶ್ಯಾಮಲಾ, ಸಮ್ಯ, ಕಾಂತರಾಜು, ಯೋಗೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.