ಮಂಡ್ಯ: ಜಿಲ್ಲಾಡಳಿತದ ವತಿಯಿಂದ ಅ.17ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಮಹರ್ಷಿ ವಾಲ್ಮೀಕಿ ಅವರ ಜಯಂತಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಕುಮಾರ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ಸಂಬಂಧ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಗುರುವಾರ ಪೂರ್ವಭಾವಿ ಸಿದ್ಧತಾ ಸಭೆ ನಡೆಸಿ ಮಾತನಾಡಿದರು.
ಮಹರ್ಷಿ ವಾಲ್ಮೀಕಿ ಅವರ ಕೊಡುಗೆ, ಸಾಧನೆ ಅಪಾರ. ಅವರ ಮೌಲ್ಯಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು. ಸಂಘ ಸಂಸ್ಥೆಗಳ ಮುಖ್ಯಸ್ಥರು ಹೆಚ್ಚಿನ ಜನರನ್ನು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸಂಘಟಿಸಬೇಕು ಎಂದು ಹೇಳಿದರು.
ಅ.17ರಂದು ಬೆಳಿಗ್ಗೆ 9.30 ಗಂಟೆಯಿಂದ ಸಿಲ್ವರ್ ಜುಬ್ಲಿ ಪಾರ್ಕ್‌ನಿಂದ ಜಿಲ್ಲಾ ಪಂಚಾಯಿತಿವರೆಗೆ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ವೀರಗಾಸೆ ಸೇರಿದಂತೆ ವಿವಿಧ ಕಲಾತಂಡಗಳು ಭಾಗವಹಿಸಲಿದೆ. ಇದರೊಂದಿಗೆ ಪೂರ್ಣಕುಂಭ ಹೊತ್ತ ಮಹಿಳೆಯರು ಭಾಗವಹಿಸಿ ಮೆರವಣಿಗೆಗೆ ವಿಶೇಷ ಮೆರುಗು ನೀಡಲಿದ್ದಾರೆ ಎಂದರು.
ಜಿಲ್ಲೆಯಲ್ಲಿ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ.ಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದವರಿಗೆ ಸನ್ಮಾನ ಮಾಡಲಾಗುವುದು ಮತ್ತು ಕೃಷಿ, ಶಿಕ್ಷಣ ಹಾಗೂ ಸಾಹಿತ್ಯ ಸೇರಿದಂತೆ ಒಟ್ಟು ಐದು ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿರುವವರನ್ನು ಗುರುತಿಸಿ ವೇದಿಕೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಕುಡಿಯುವ ನೀರು ಹಾಗೂ ಊಟದ ವ್ಯವಸ್ಥೆಯಾಗಬೇಕು. ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯ ಮುದ್ರಣ ಹಾಗೂ ವಿತರಣೆಯ ಕೆಲಸವಾಗಬೇಕು ಎಂದರು.
ಸಭೆಯಲ್ಲಿ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಕೆ.ಎನ್ ಕೇಶವಮೂರ್ತಿ, ಸಮಾಜ ಕಲ್ಯಾಣಾಧಿಕಾರಿ ಸಿದ್ದಲಿಂಗೇಶ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್.ಶಿವರಾಮೇಗೌಡ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ರಾಘವೇಂದ್ರ, ಬಿ.ಇ.ಒ ಮಹಾದೇವ, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಕೋಮಲ್ ಕುಮಾರ್ ಎಸ್.ಎಸ್, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಕಾವ್ಯಾ, ನಗರಸಭೆ ಪರಿಸರ ಎಂಜಿನಿಯರ್ ರುದ್ರೇಗೌಡ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.