ADVERTISEMENT

ಕೆಆರ್‌ಎಸ್‌ನಿಂದ ನಾಲೆಗಳಿಗೆ ಹರಿಯದ ನೀರು; ಆಕ್ರೋಶ

​ಪ್ರಜಾವಾಣಿ ವಾರ್ತೆ
Published 9 ಜುಲೈ 2024, 13:38 IST
Last Updated 9 ಜುಲೈ 2024, 13:38 IST
ಪಾಂಡು
ಪಾಂಡು   

ಶ್ರೀರಂಗಪಟ್ಟಣ: ಕೆಆರ್‌ಎಸ್‌ ಅಣೆಕಟ್ಟೆಯಿಂದ, ಜುಲೈ 8ರಿಂದ ವಿಶ್ವೇಶ್ವರಯ್ಯ ನಾಲೆ ಸೇರಿದಂತೆ ಇತರ ನಾಲೆಗಳಿಗೆ ನೀರು ಹರಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎನ್‌. ಚಲುವರಾಯಸ್ವಾಮಿ ಹೇಳಿಕೆ ನೀಡಿದ್ದು, ಜುಲೈ 9ರ ಸಂಜೆವರೆಗೂ ನಾಲೆಗಳಿಗೆ ನೀರು ಬಿಟ್ಟಿಲ್ಲದೇ ಇರುವುದು ರೈತರ ಅಸಮಾಧಾನಕ್ಕೆ ಕಾರಣವಾಗಿದೆ.

ಬರಗಾಲದ ಹಿನ್ನೆಲೆಯಲ್ಲಿ ಕಳೆದ ಫೆಬ್ರುವರಿಯಿಂದ ನಾಲೆಗಳಿಗೆ ನೀರು ಹರಿಸಿಲ್ಲ. ಕೆಆರ್‌ಎಸ್‌ ಅಣೆಕಟ್ಟೆಯ ಅಚ್ಚುಕಟ್ಟು ಪ್ರದೇಶದಲ್ಲಿ ಬೆಳೆದಿರುವ ಕಬ್ಬು, ಬಾಳೆ, ಅಡಿಕೆ, ತೆಂಗು ಇನ್ನಿತರ ನಿಂತಿರುವ ಬೆಳೆಗಳಿಗೆ ನೀರಿನ ಅಗತ್ಯವಿದೆ. ಮುಂಗಾರು ಹಂಗಾಮಿನಲ್ಲಿ ಭತ್ತದ ಬೆಳೆ ಬೆಳೆಯಲು ಜಮೀನು ಸಿದ್ಧತೆ ಮಾಡಿಕೊಳ್ಳಲು ಇದು ಸಕಾಲವಾಗಿದೆ. ಹಾಗಾಗಿ ನಾಲೆಗಳಲ್ಲಿ ನೀರು ಬರುತ್ತದೆ ಎಂದು ರೈತರು ಚಾತಕ ಪಕ್ಷಿಯಂತೆ ಕಾದು ಕುಳಿತಿದ್ದಾರೆ.

‘ಕೆಆರ್‌ಎಸ್‌ ಅಣೆಕಟ್ಟೆಯಿಂದ ಜು.8ರಿಂದಲೇ ನಾಲೆಗಳಿಗೆ ನೀರು ಹರಿಸುವುದಾಗಿ ಸಚಿವ ಎನ್‌. ಚಲುವರಾಯಸ್ವಾಮಿ ಎರಡು ಬಾರಿ ಹೇಳಿಕೆ ನೀಡಿದ್ದಾರೆ. ಆದರೆ ಅವರು ಹೇಳಿದಂತೆ ವಿಸಿ ಇತರ ನಾಲೆಗಳಿಗೆ ನೀರು ಬಿಟ್ಟಿಲ್ಲ. ಕಾಮಗಾರಿ ನೆಪ ಹೇಳುತ್ತಿದ್ದಾರೆ. ಮುಂಗಾರು ಹಂಗಾಮಿಗೆ ಬಿತ್ತನೆ ಬೀಜವನ್ನೂ ಕೊಡದೆ ರೈತರಿಗೆ ಮೋಸ ಮಾಡುತ್ತಿದ್ದಾರೆ’ ಎಂದು ರೈತ ಸಂಘದ ತಾಲ್ಲೂಕು ಘಟಕದ ಸಂಚಾಲಕ ಪಾಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT

‘ತಕ್ಷಣದಿಂದಲೇ ಕೆಆರ್‌ಎಸ್‌ ಅಣೆಕಟ್ಟೆಯ ಎಲ್ಲ ನಾಲೆಗಳಿಗೆ ನೀರು ಹರಿಸಬೇಕು. ಇಲ್ಲದಿದ್ದರೆ ಪ್ರತಿಭಟನೆಯ ಹಾದಿ ಹಿಡಿಯಬೇಕಾಗುತ್ತದೆ’ ಎಂದು ಅವರು ಎಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.