ಮೈಸೂರು: ಪಿರಿಯಾಪಟ್ಟಣದ ರಾಣಿಗೇಟ್ ಹಾಡಿಯ ಆದಿವಾಸಿ ಸಮುದಾಯಕ್ಕೆ ಸೇರಿದ ಬಸವ ಎಂಬುವವರು ಬಹಿರ್ದೆಸೆಗೆ ಹೋಗಿದ್ದಾಗ ಅರಣ್ಯ ಇಲಾಖೆಯ ವಾಚರ್ ಸುಬ್ರಹ್ಮಣ್ಯ ಎಂಬುವವರು ಗುಂಡು ಹಾರಿಸಿದ್ದಾರೆ. ಗಾಯಗೊಂಡ ಬಸವ ಅವರನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸರು ಗಾಯಗೊಂಡಿರುವ ಬಸವ ಅವರ ಮೇಲೆಯೆ ಪ್ರಕರಣ ದಾಖಲಿಸಿದ್ದು, ಪ್ರತಿದೂರನ್ನು ಸ್ವೀಕರಿಸುತ್ತಿಲ್ಲ ಎಂದು ನಟ ಚೇತನ್ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಗುರುವಾರ ಆಕ್ರೋಶ ವ್ಯಕ್ತಪಡಿಸಿದರು.
ಆದಿವಾಸಿಗಳ ಮೇಲಿನ ದೌರ್ಜನ್ಯ ನಿಲ್ಲಬೇಕು. ಅವರಿಗೆ ನ್ಯಾಯ ಸಿಗಬೇಕು. ಈ ಕುರಿತು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು ಎಂದರು.
ಗಂಧದ ಮರ ಕತ್ತರಿಸಿ ಸಾಗಿಸುವ ವೇಳೆ ಗುಂಡಿನ ದಾಳಿ: ಅರಣ್ಯ ಇಲಾಖೆ ಸ್ಪಷ್ಟನೆ
ಪಿರಿಯಾಪಟ್ಟಣದ ರಾಣಿಗೇಟ್ ಹಾಡಿನ ನಿವಾಸಿ ಬಸವ ಎಂಬ ಆದಿವಾಸಿಯು ಇತರ ಇಬ್ಬರೊಂದಿಗೆ ಸೇರಿಕೊಂಡು ಗಂಧದ ಮರವನ್ನು ಕಡಿದು, ಸಾಗಿಸುವ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿನ ದಾಳಿ ನಡೆಸಿದ್ದಾರೆ ಎಂದು ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಹೇಶ್ ಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.
ಘಟನೆಯಲ್ಲಿ ಅರಣ್ಯ ಇಲಾಖೆಯ ಮೂವರು ಸಿಬ್ಬಂದಿಯೂ ಗಾಯಗೊಂಡು ಚಿಕಿತ್ಸೆ ಪಡೆದಿದ್ದಾರೆ. ಆರೋಪಿಗಳಿಂದ ಗಂಧದ ಮರಗಳನ್ನು ವಶಪಡಿಸಿಕೊಂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.