ADVERTISEMENT

ಪ್ರವೇಶಾತಿ ಹೆಚ್ಚಳಕ್ಕೆ ಕಡಿವಾಣ: ಮೈಸೂರು ವಿವಿ ಕ್ರಮಕ್ಕೆ ಖಂಡನೆ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2024, 7:06 IST
Last Updated 24 ಅಕ್ಟೋಬರ್ 2024, 7:06 IST
<div class="paragraphs"><p>ಮೈಸೂರು ವಿಶ್ವವಿದ್ಯಾಲಯ&nbsp;</p></div>

ಮೈಸೂರು ವಿಶ್ವವಿದ್ಯಾಲಯ 

   

ಮೈಸೂರು: ‘ನಗರದ ಮಹಾರಾಣಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಪ್ರವೇಶಾತಿ ಹೆಚ್ಚಳಕ್ಕೆ ಕಡಿವಾಣ ಹಾಕುವಂತೆ ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಸೂಚಿಸಿರುವುದನ್ನು ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್ಒ) ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತದೆ’ ಎಂದು ಉಪಾಧ್ಯಕ್ಷೆ ಸ್ವಾತಿ ತಿಳಿಸಿದ್ದಾರೆ.

ಈ ಬಗ್ಗೆ ಬುಧವಾರ ಪ್ರಕಟಣೆ ನೀಡಿರುವ ಅವರು, ‘ಶಿಕ್ಷಣ ಮಂಡಳಿ ಸಭೆಯಲ್ಲಿ ಮಾತನಾಡಿದ ಕುಲಪತಿಯು ಸೀಟುಗಳ ಸಂಖ್ಯೆಯನ್ನು ಶೇ 15ಕ್ಕಿಂತ ಹೆಚ್ಚಿಸಬಾರದು ಎಂದು ಸೂಚಿಸಿದ್ದಾರೆ. ಆ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಪ್ರವೇಶಾತಿ ಮಿತಿಯನ್ನು 690ರಿಂದ 1,100ಕ್ಕೇರಿಸಿರುವ ಕ್ರಮದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವುದು ಶಿಕ್ಷಣ ವಿರೋಧಿ ನಿಲುವಾಗಿದೆ’ ಎಂದು ಹೇಳಿದ್ದಾರೆ.

ADVERTISEMENT

‘ಸರ್ಕಾರಿ ಶಾಲಾ– ಕಾಲೇಜುಗಳನ್ನು ಆಯ್ಕೆ ಮಾಡಿಕೊಳ್ಳುವವರು ಬಡ, ರೈತರು, ಕಾರ್ಮಿಕರು ಹಾಗೂ ದಲಿತರ ಮಕ್ಕಳಾಗಿದ್ದು, ಅವರು ಕಾಲೇಜಿಗೆ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾದರೆ ಅದನ್ನು ಸ್ವಾಗತಿಸಬೇಕು. ಬದಲಿಗೆ, ಕಾಲೇಜಿನಲ್ಲಿ ಮೂಲ ಸೌಕರ್ಯಗಳು ಇಲ್ಲ ಎಂದು ಹೇಳಿ ಹೆಚ್ಚಿನ ಪ್ರವೇಶಾತಿಗೆ ಕಡಿವಾಣ ಹಾಕುವ ಧೋರಣೆ ಸರಿಯಲ್ಲ. ತಕ್ಷಣ ಈ ನಿರ್ಧಾರವನ್ನು ವಾಪಸ್ ಪಡೆಯಬೇಕು’ ಎಂದು ಆಗ್ರಹಿಸಿದ್ದಾರೆ.

‘ಪ್ರವೇಶಾತಿ ಕಡಿಮೆ ಮಾಡಿ ಖಾಸಗಿ ಕಾಲೇಜುಗಳಿಗೆ ದಾಖಲಾಗುವಂತೆ ನಿರ್ಧಾರ ತೆಗೆದುಕೊಂಡಿರುವುದರಲ್ಲಿ ವಿಶ್ವವಿದ್ಯಾಲಯದ ವ್ಯಾಪಾರಿ ಧೋರಣೆ ಎದ್ದು ಕಾಣುತ್ತಿದೆ. ಪ್ರತಿ ವಿದ್ಯಾರ್ಥಿಗೂ ಪ್ರವೇಶಾತಿ ನಿರಾಕರಿಸಬಾರದು ಎಂದು ಸರ್ಕಾರ ಹೇಳುತ್ತದೆ. ಆದರೆ, ಇದಕ್ಕೆ ವಿರುದ್ಧವಾಗಿ ವಿಶ್ವವಿದ್ಯಾಲಯ ನಿರ್ಧಾರ ತೆಗೆದುಕೊಂಡಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ’ ಎಂದು ಹೇಳಿದ್ದಾರೆ.

‘ಮೂಲಸೌಲಭ್ಯವನ್ನು ಹೆಚ್ಚಿಸಿ ಎಲ್ಲ ವಿದ್ಯಾರ್ಥಿಗಳಿಗೂ ಶಿಕ್ಷಣ ನೀಡುವ ಜವಾಬ್ದಾರಿಯನ್ನು ವಿಶ್ವವಿದ್ಯಾಲಯ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.