ಮೈಸೂರು: ತ್ರಿವರ್ಣ ಧ್ವಜವನ್ನು ಕೈಗಳಲ್ಲಿ ಹಿಡಿದು ಸೋಮವಾರ ನಗರದ ವಿವಿಧ ಶಾಲೆಗಳಿಂದ ಬಂದಿದ್ದ ಮಕ್ಕಳು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದಲ್ಲಿ ಭಾಗಿಯಾದರು.
ಬನ್ನಿಮಂಟಪದ ಕವಾಯತು ಮೈದಾನದಲ್ಲಿ ಸೋಮವಾರ ಜಿಲ್ಲಾಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಯೋಜಿಸಿದ್ದ ಉತ್ಸವದಲ್ಲಿ ಶಾಲಾ ಸಮವಸ್ತ್ರದ ಜೊತೆಗೆ ವಿವಿಧ ವೇಷಧಾರಿಗಳಾಗಿ ಬಂದವರು, ಮೈದಾನದ ಗ್ಯಾಲರಿಗಳಲ್ಲಿ ತುಂಬಿದರು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವೈವಿಧ್ಯ ಭಾರತದ ವೈಭವವನ್ನು ಅನಾವರಣಗೊಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಧ್ವಜಾರೋಹಣ ನೆರವೇರಿಸಿದರು. ಪಥಸಂಚಲನದಲ್ಲಿ ಸಶಸ್ತ್ರ ದಳ, ಎನ್‌ಸಿಸಿ ಕೆಡೆಟ್‌ಗಳಿಂದ ಗೌರವ ವಂದನೆ ಸ್ವೀಕರಿಸಿದರು. ನಂತರ ತ್ರಿವರ್ಣದ ಬಲೂನ್‌ಗಳನ್ನು ಹಾರಿಬಿಡಲಾಯಿತು.
ಸಚಿವ ಸೋಮಶೇಖರ್ ಮಾತನಾಡಿ, ‘ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಹೋರಾಟಗಾರರನ್ನು ನಿತ್ಯ ಸ್ಮರಿಸಬೇಕು. ಅವರ ಆಶಯದಂತೆ ರಾಜ್ಯ ಸರ್ಕಾರ ಕೆಲಸ ಮಾಡುತ್ತಿದೆ. ಸಮೃದ್ಧ ಕರ್ನಾಟಕ ನಿರ್ಮಾಣಕ್ಕೆ ಯೋಜನೆಗಳನ್ನು ರೂಪಿಸಿ ಕಾರ್ಯಗತಗೊಳಿಸಿದೆ’ ಎಂದರು.
‘ಮನೆಮನೆಯಲ್ಲೂ ತ್ರಿವರ್ಣ ಧ್ವಜ ಅಭಿಯಾನ ಜಿಲ್ಲೆಯಲ್ಲಿ ಯಶಸ್ವಿಯಾಗಿದೆ. ದೇಶಪ್ರೇಮವು ಸ್ವಾತಂತ್ರ‍್ಯ ದಿನಾಚರಣೆಗೆ ಸೀಮಿತಗೊಳ್ಳಬಾರದು. ಅದು ನಿರಂತರವಾಗಿರಬೇಕು’ ಎಂದು ಸಲಹೆ ನೀಡಿದರು.
‘ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಪರಿಶಿಷ್ಟ ಸಮುದಾಯದ 100 ಯುವಕರಿಗೆ ಸ್ವಯಂ ಉದ್ಯೋಗ ನೀಡುವ ಯೋಜನೆಗೆ ಚಾಲನೆ ನೀಡಲಾಗಿದೆ. ರೈತರ ಆರೋಗ್ಯ ಕಾಪಾಡುವ ಯಶಸ್ವಿನಿ ಯೋಜನೆ ಆರಂಭಕ್ಕೆ ₹ 300 ಕೋಟಿ ಮೀಸಲಿಡಲಾಗಿದೆ. ₹ 24 ಸಾವಿರ ಕೃಷಿ ಸಾಲ ವಿತರಿಸುವ ಗುರಿಯಿದ್ದು, ನಂದಿನಿ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪಿಸಿ ₹ 360 ಕೋಟಿ ಬಂಡವಾಳ ನೀಡಲಾಗುತ್ತದೆ’ ಎಂದು ಮಾಹಿತಿ ನೀಡಿದರು.
‘ಮೈಸೂರು– ಬೆಂಗಳೂರು ದಶಪಥ ಕಾಮಗಾರಿ ಭರದಿಂದ ಸಾಗಿದೆ. ಮೈಸೂರು ವಿಮಾನ ನಿಲ್ದಾಣದ ರನ್‌ವೇ ವಿಸ್ತರಣೆಗೆ ಬಜೆಟ್‌ನಲ್ಲಿ ₹ 319 ಕೋಟಿ ಅನುದಾನ ನೀಡಲಾಗಿದೆ. ಚಾಮುಂಡಿ ಬೆಟ್ಟದಲ್ಲಿ ಕುಸಿದಿರುವ ನಂದಿ ರಸ್ತೆ ಪುನರ್‌ನಿರ್ಮಾಣ ಕಾಮಗಾರಿ ಆರಂಭವಾಗಿದೆ. ಏತ ನೀರಾವರಿ ಯೋಜನೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಅತಿವೃಷ್ಟಿಯಿಂದ ಸಂಕಷ್ಟಕ್ಕೀಡಾದವರಿಗೆ ತಲಾ ₹ 95 ಸಾವಿರ ಪರಿಹಾರ ನೀಡಲಾಗಿದೆ.’ ಎಂದರು.
‘ಮೈಸೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ಲೋಕೋಪಯೋಗಿ ಇಲಾಖೆಯು 1 ಸಾವಿರ ವಿದ್ಯಾರ್ಥಿಗಳಿಗೆ ಸೌಲಭ್ಯ ಕಲ್ಪಿಸುವ ಪಂಡಿತ್ ದೀನದಯಾಳ್ ಉಪಾಧ್ಯಾಯ ಸೌಹಾರ್ದ ಬಹು ಮಹಡಿ ವಿದ್ಯಾರ್ಥಿ ನಿಲಯ ನಿರ್ಮಿಸಲಿದೆ’ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಮೇಯರ್ ಸುನಂದಾ ಫಾಲನೇತ್ರ, ಸಂಸದ ಪ್ರತಾಪಸಿಂಹ, ಶಾಸಕ ಎಲ್.ಮಹೇಂದ್ರ, ನಗರ ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.