ADVERTISEMENT

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗುರುಪಾದಸ್ವಾಮಿ ಬಿಜೆಪಿ ಸೇರ್ಪಡೆ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2024, 15:49 IST
Last Updated 11 ಏಪ್ರಿಲ್ 2024, 15:49 IST
ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಗುರುವಾರ ಕಾಂಗ್ರೆಸ್ ಮುಖಂಡ ಗುರುಪಾದಸ್ವಾಮಿ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಪಕ್ಷಕ್ಕೆ ಬರಮಾಡಿಕೊಂಡರು. ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ಬಾಲರಾಜ್‌, ಎಲ್‌.ಆರ್. ಮಹದೇವಸ್ವಾಮಿ, ಎಲ್.ನಾಗೇಂದ್ರ, ಶಾಸಕ ಶ್ರೀವತ್ಸ ಜೊತೆಗಿದ್ದರು –ಪ್ರಜಾವಾಣಿ ಚಿತ್ರ
ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಗುರುವಾರ ಕಾಂಗ್ರೆಸ್ ಮುಖಂಡ ಗುರುಪಾದಸ್ವಾಮಿ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಪಕ್ಷಕ್ಕೆ ಬರಮಾಡಿಕೊಂಡರು. ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ಬಾಲರಾಜ್‌, ಎಲ್‌.ಆರ್. ಮಹದೇವಸ್ವಾಮಿ, ಎಲ್.ನಾಗೇಂದ್ರ, ಶಾಸಕ ಶ್ರೀವತ್ಸ ಜೊತೆಗಿದ್ದರು –ಪ್ರಜಾವಾಣಿ ಚಿತ್ರ   

ಮೈಸೂರು: ‘ಪ್ರಧಾನಿ ನರೇಂದ್ರ ಮೋದಿ ಏ.14ರಂದು ಸಂಜೆ 4ಕ್ಕೆ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಬೃಹತ್‌ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೈಸೂರು–ಕೊಡಗು, ಮಂಡ್ಯ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯ ಲಕ್ಷಾಂತರ ಮತದಾರರು ಪಾಲ್ಗೊಳ್ಳಲಿದ್ದಾರೆ’ ಎಂದು ಮಾಹಿತಿ ನೀಡಿದರು.

‘ಎನ್‌ಡಿಎ ಮೈತ್ರಿಕೂಟದ ಮಂಡ್ಯ ಅಭ್ಯರ್ಥಿ ಎಚ್.ಡಿ. ಕುಮಾರಸ್ವಾಮಿ, ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಮೂರು ಕ್ಷೇತ್ರದಲ್ಲಿ ಈಗಾಗಲೇ ಎನ್‌ಡಿಎ ಅಭ್ಯರ್ಥಿಗಳು ಗೆಲ್ಲುವ ವಾತಾವರಣ ನಿರ್ಮಾಣವಾಗಿದೆ. ಮೋದಿ ಭೇಟಿ ಗೆಲುವಿನ ಅಂತರ ಹೆಚ್ಚಿಸಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

‘ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು ಚುನಾವಣೆಯಲ್ಲಿ ಯಾವುದೇ ಪರಿಣಾಮ ಬೀರುವುದಿಲ್ಲ. ಸರ್ಕಾರ ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಸಿಯುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿ ಶೂನ್ಯವಾಗಿದೆ. ಕಿಸಾನ್ ಸಮ್ಮಾನ್ ಯೋಜನೆ ಹಣ ಬಂದ್ ಮಾಡಿದೆ. ಸ್ಕಾಲರ್‌ಶಿಪ್ ನಿಲ್ಲಿಸಿದೆ. ಹಾಲು– ವಿದ್ಯುತ್ ದರ ಹೆಚ್ಚಿಸಿದೆ. ಹೊಲಕ್ಕೆ ವಿದ್ಯುತ್‌ ಪರಿವರ್ತಕ ಹಾಕಿಸಿಕೊಳ್ಳಲು ರೈತರು ₹3 ಲಕ್ಷ ಕಟ್ಟಬೇಕಿದೆ’ ಎಂದು ಟೀಕಿಸಿದರು.

ಇದೇ ಸಂದರ್ಭ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗುರುಪಾದಸ್ವಾಮಿ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರಿದರು.

ಶಾಸಕ ಟಿ.ಎಸ್.ಶ್ರೀವತ್ಸ, ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ಬಾಲರಾಜ್‌, ಪಕ್ಷದ ರಾಜ್ಯ ಉಪಾಧ್ಯಕ್ಷ ರಾಜೇಂದ್ರ, ಜಿಲ್ಲಾ ಗ್ರಾಮಾಂತರ ಘಟಕದ ಅಧ್ಯಕ್ಷ ಎಲ್‌.ಆರ್. ಮಹದೇವಸ್ವಾಮಿ, ನಗರ ಘಟಕದ ಅಧ್ಯಕ್ಷ ನಾಗೇಂದ್ರ ಹಾಗೂ ಪಕ್ಷದ ಮುಖಂಡರು ಜೊತೆಗಿದ್ದರು.

ವೇದಿಕೆ ನಿರ್ಮಾಣಕ್ಕೆ ಚಾಲನೆ

ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್‌ ವೇದಿಕೆ ನಿರ್ಮಾಣಕ್ಕೆ ಪಕ್ಷದ ನಗರ ಘಟಕದ ಅಧ್ಯಕ್ಷ ಎಲ್. ನಾಗೇಂದ್ರ ಗುರುವಾರ ಚಾಲನೆ ನೀಡಿದರು. ಮೈಸೂರು–ಕೊಡಗು ಕ್ಷೇತ್ರದ ಬಿಜೆಪಿ ಸಹ ಉಸ್ತುವಾರಿ ಪ್ರೀತಂ ಗೌಡ ಗೈರಾದರು. ಒಂದು ಲಕ್ಷಕ್ಕೂ ಅಧಿಕ ಮಂದಿ ಈ ಸಮಾವೇಶದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಪಕ್ಷದ ಮುಖಂಡರು ತಿಳಿಸಿದರು. ಎಸ್‌ಪಿಜಿ ಅಧಿಕಾರಿಗಳು ಈಗಾಗಲೇ ನಗರದಲ್ಲಿ ಬೀಡು ಬಿಟ್ಟಿದ್ದು ಗುರುವಾರ ವೇದಿಕೆ ನಿರ್ಮಾಣ ಹಾಗೂ ಭದ್ರತೆಗೆ ಕೈಗೊಂಡ ಸಿದ್ಧತೆಗಳನ್ನು ಪರಿಶೀಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.