ಮೈಸೂರು: ‘ಮುಡಾದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣವನ್ನು ರಾಜ್ಯ ಸರ್ಕಾರವು ಸಿಬಿಐಗೆ ವಹಿಸಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಗ್ರಹಿಸಿದರು.
ಬಿಜೆಪಿ ಕಚೇರಿಯಲ್ಲಿ ಭಾನುವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ತವರು ಜಿಲ್ಲೆಯ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ₹2,500 ಕೋಟಿಗೂ ಅಧಿಕ ಅವ್ಯವಹಾರ ನಡೆದಿದೆ ಎನ್ನಲಾಗಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ನಿವೇಶನಗಳನ್ನು ಕಾನೂನು ಬಾಹಿರವಾಗಿ ಪರಭಾರೆ ಮಾಡಲಾಗಿದೆ. ಸಿದ್ದರಾಮಯ್ಯ ಕೃಪಾಕಟಾಕ್ಷದಲ್ಲಿಯೇ ಈ ಹಗರಣ ನಡೆದಿದ್ದು, ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ತಪ್ಪಿತಸ್ಥರ ತಲೆ ದಂಡವಾಗಬೇಕು’ ಎಂದು ಒತ್ತಾಯಿಸಿದರು.
‘ಈ ಬಗ್ಗೆ ಪಕ್ಷದ ಶಾಸಕ ಟಿ.ಎಸ್. ಶ್ರೀವತ್ಸ ಮತ್ತು ಮುಖಂಡ ರಘು ಕೌಟಿಲ್ಯ ಮಾಹಿತಿ ಕಲೆ ಹಾಕುತ್ತಿದ್ದಾರೆ. ಸದನದಲ್ಲಿ ಈ ಬಗ್ಗೆ ಹೋರಾಟ ನಡೆಸಿ, ಸಿಬಿಐ ತನಿಖೆಗೆ ಒತ್ತಾಯಿಸಲಾಗುವುದು’ ಎಂದರು.
ಬಳಿಕ ಅವರು ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಿದರು. ಬಿಜೆಪಿ ರಾಜ್ಯ ಉಪಾಧ್ಯಕ್ಷ ರಾಜೇಂದ್ರ, ಶಾಸಕ ಟಿ.ಎಸ್. ಶ್ರೀವತ್ಸ, ನಗರ ಘಟಕದ ಅಧ್ಯಕ್ಷ ಎಲ್. ನಾಗೇಂದ್ರ, ಗಿರಿಧರ್, ಬಿ.ಎಂ. ರಘು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.