ADVERTISEMENT

ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಜೊತೆ ಮೈತ್ರಿ ಅನಿವಾರ್ಯ: ಜಿ.ಟಿ. ದೇವೇಗೌಡ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2023, 10:54 IST
Last Updated 8 ಸೆಪ್ಟೆಂಬರ್ 2023, 10:54 IST
ಜಿ.ಟಿ. ದೇವೇಗೌಡ
ಜಿ.ಟಿ. ದೇವೇಗೌಡ   

ಮೈಸೂರು: ‘ನಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಜೊತೆ ಮೈತ್ರಿ ಅನಿವಾರ್ಯವಾಗಿದೆ’ ಎಂದು ಶಾಸಕ, ಆ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ತಿಳಿಸಿದರು.

ಇಲ್ಲಿ ಪತ್ರಕರ್ತರೊಂದಿಗೆ ಶುಕ್ರವಾರ ಮಾತನಾಡಿದ ಅವರು, ‘ಮುಂದಿನ ದಿನಗಳಲ್ಲಿ ಏನಾದರೂ ಮಾಡಿಕೊಳ್ಳಿ. ಆದರೆ, ಲೋಕಸಭಾ ಚುನಾವಣೆಯಲ್ಲಿ ಮಾತ್ರ ಹೊಂದಾಣಿಕೆ ಮಾಡಿಕೊಳ್ಳುವಂತೆ ವರಿಷ್ಠ ಎಚ್‌.ಡಿ. ದೇವೇಗೌಡರನ್ನು ಕೋರಿದ್ದೇನೆ’ ಎಂದು ಹೇಳಿದರು.

‘ಈಚೆಗೆ ನಡೆದ ಪಕ್ಷದ ಸಭೆಯಲ್ಲಿ ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಮುಖಂಡರು ಭಾಗವಹಿಸಿದ್ದೆವು. ಸೆ.10ರಂದು ಬೆಂಗಳೂರಿನಲ್ಲಿ ನಡೆಯಲಿರುವ ಸಮಾವೇಶದ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಾಯಿತು. ಕಾಂಗ್ರೆಸ್‌ನವರ ದಬ್ಬಾಳಿಕೆಯ ಬಗ್ಗೆ ಜನಪ್ರತಿನಿಧಿಗಳು ಅಳಲು ತೋಡಿಕೊಂಡರು. ಪಿರಿಯಾಪಟ್ಟಣದಲ್ಲಿ ಕಾರ್ಯಕರ್ತರನ್ನು ಜೈಲಿಗೆ ಕಳುಹಿಸಲು ಎಫ್‌ಐಆರ್‌ ದಾಖಲಿಸಲಾಗುತ್ತಿದೆ. ಅಧಿಕಾರಿಗಳ ವರ್ಗಾವಣೆ ದಂಧೆ ನಡೆಯುತ್ತಿದೆ. ಕಾರ್ಯಕರ್ತರಿಗೆ ರಕ್ಷಣೆ ಸಿಗುತ್ತಿಲ್ಲ. ಗ್ಯಾರಂಟಿಗಳ ಕಾರಣದಿಂದಾಗಿ ಅಭಿವೃದ್ಧಿ ಕುಂಠಿತವಾಗುತ್ತಿದೆ. ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸಬೇಕು. ಆದ್ದರಿಂದ ಬಿಜೆಪಿ ಜೊತೆ ಮೈತ್ರಿಗೆ ಒಲವು ವ್ಯಕ್ತವಾಯಿತು’ ಎಂದರು.

ADVERTISEMENT

‘ಕಾಂಗ್ರೆಸ್ ಜೊತೆ ಹೋಗಲು ನಮಗೆ ಇಷ್ಟವಿಲ್ಲ. ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಹೊಟ್ಟೆ ಉರಿಯಿಂದಾಗಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರು. ಕಾಂಗ್ರೆಸ್ ಹೊಡೆತ ತಡೆಯಲಾಗುತ್ತಿಲ್ಲ. ಲೋಕಸಭಾ ಚುನಾವಣೆಯನ್ನು ಒಟ್ಟಾಗಿ ಎದುರಿಸಬೇಕು ಎನ್ನುವ ಅಭಿಪ್ರಾಯ ಬಂತು. ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದ ಎಚ್.ಡಿ. ದೇವೇಗೌಡರು ನಮಗೆ ಧೈರ್ಯ ತುಂಬಿದ್ದರು’ ಎಂದು ತಿಳಿಸಿದರು.

‘ಸೆ. 10ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾವೇಶದ ಮೂಲಕ ಪಕ್ಷದ ಶಕ್ತಿ ಪ್ರದರ್ಶನ ನಡೆಯಲಿದೆ. ಕುಮಾರಸ್ವಾಮಿ ಅವರಿಗೆ ಬಿಜೆಪಿ ಬಗ್ಗೆ ಯಾವುದೇ ವಿರೋಧವಿಲ್ಲ. ನಾನು ಕಾರ್ಯಕರ್ತರು ಹಾಗೂ ಮುಖಂಡರ ಅಭಿಪ್ರಾಯದ ಪರ ಇರುತ್ತೇನೆ. ಹಿಂದೆ ಬಿಜೆಪಿಗೆ ಹೋಗಿದಕ್ಕೆ ಜನರು ನನ್ನನ್ನು ಸೋಲಿಸಿದ್ದರು. ಆದರೆ, ಈಗ ಪರಿಸ್ಥಿತಿ ಬದಲಾಗಿದೆ. ಈಗ ಮೈತ್ರಿಗೆ ಯಾರೂ ವಿರೋಧ ಮಾಡುತ್ತಿಲ್ಲ. ಕಾಂಗ್ರೆಸ್ ವಿರುದ್ಧ ಇದ್ದಾರೆ’ ಎಂದು ಹೇಳಿದರು.

ಇವನ್ನೂ ಓದಿ...

ಲೋಕಸಭೆ ಚುನಾವಣೆ | ಜೆಡಿಎಸ್ ಜತೆ ಮೈತ್ರಿ ಖಚಿತ, ಈಗಾಗಲೇ 4 ಕ್ಷೇತ್ರ ಅಂತಿಮ: ಯಡಿಯೂರಪ್ಪ

ಸಂಘರ್ಷವೇ ಆಗಲಿ, ಮಹಿಷ ದಸರೆಗೆ ಅವಕಾಶ ಕೊಡುವುದಿಲ್ಲ: ಸಂಸದ ಪ್ರತಾಪ ಸಿಂಹ

Lok Sabha Election 2024 | ಜೆಡಿಎಸ್‌ – ಬಿಜೆಪಿ ಮೈತ್ರಿಗೆ ಸಹಮತ: ಪ್ರತಾಪ ಸಿಂಹ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.