ಮೈಸೂರು: ‘ಹಿಂದಿನ ಸರ್ಕಾರ ಘೋಷಿಸಿದ್ದ ಬ್ರಹ್ಮಶ್ರೀ ನಾರಾಯಣಗುರು ಈಡಿಗ ಅಭಿವೃದ್ಧಿ ನಿಗಮಕ್ಕೆ ₹ 500 ಕೋಟಿ ಅನುದಾನ ನೀಡಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೊಪ್ಪಳ ಜಿಲ್ಲೆಯ ಗಂಗಾವತಿಯ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ಡಿ.10ರಂದು ಉಪವಾಸ ಸತ್ಯಾಗ್ರಹ ನಡೆಸಲಾಗುವುದು’ ಎಂದು ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠದ ಪ್ರಣವಾನಂದ ಸ್ವಾಮೀಜಿ ತಿಳಿಸಿದರು.
‘ಕುಲಶಾಸ್ತ್ರೀಯ ಅಧ್ಯಯನವನ್ನು ತ್ವರಿತವಾಗಿ ಮುಗಿಸಿ ಈಡಿಗ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು’ ಎಂದು ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಆಗ್ರಹಿಸಿದರು.
‘ಸಮಾಜದವರು ಕುಲಕಸುಬು ಕೈಗೊಳ್ಳಲು ಅವಕಾಶ ಕೊಡಬೇಕು. ಇಲ್ಲವೇ ಪ್ರತಿ ಕುಟುಂಬಕ್ಕೆ ಎರಡು ಎಕರೆ ಜಮೀನು ಕೊಡಬೇಕು. ಬಡ ಕುಟುಂಬಗಳಿಗೆ 25ಸಾವಿರ ಮನೆ ಮಂಜೂರು ಮಾಡಬೇಕು. ಉತ್ತರ ಕರ್ನಾಟಕ ಭಾಗದಲ್ಲಿ ಕುಲಕಸುಬು ಕಳೆದುಕೊಂಡವರು ಅತಂತ್ರವಾಗಿದ್ದು, ಅವರಿಗೆ ನೆರವಾಗಬೇಕು’ ಎಂದು ಒತ್ತಾಯಿಸಿದರು.
‘ವಿಧಾನಸೌಧದ ಆವರಣದಲ್ಲಿ ನಾರಾಯಣ ಗುರು ಪುತ್ಥಳಿ ಸ್ಥಾಪಿಸಬೇಕು. ಶರಣ ಹೆಂಡದ ಮಾರಯ್ಯ ಜಯಂತಿಯನ್ನು ಸರ್ಕಾರದಿಂದ ಆಚರಿಸಬೇಕು. ಶಿವಮೊಗ್ಗ ರಾಷ್ಟ್ರೀಯ ವಿಮಾನನಿಲ್ದಾಣ ಹಾಗೂ ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ದೊಡ್ಡಕೆರೆಗೆ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಹೆಸರಿಟ್ಟು ಗೌರವ ಸಲ್ಲಿಸಬೇಕು. ಸಮಾಜದ ಮಹಿಳೆಯರ ಸ್ವಯಂ ಉದ್ಯೋಗಕ್ಕಾಗಿ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಬೇಕು’ ಎಂದು ಸರ್ಕಾರವನ್ನು ಆಗ್ರಹಿಸಿದರು.
‘ಉತ್ತರಕನ್ನಡ ಜಿಲ್ಲೆಯಲ್ಲಿ ನಮ್ಮ ಯುವಕರಿಗೆ ಯುಪಿಎಸ್‌ಸಿ ಪರೀಕ್ಷೆ ತರಬೇತಿ ಕೇಂದ್ರ ಸ್ಥಾಪಿಸಬೇಕು. ಮಂಗಳೂರು, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಮಾಜಕ್ಕೆ ಗ್ರಾಮ ಪಂಚಾಯಿತಿಯಿಂದ ಹಿಡಿದು ಲೋಕಸಭೆವರೆಗೂ ಹೆಚ್ಚಿನ ರಾಜಕೀಯ ಪ್ರಾತಿನಿಧ್ಯವನ್ನು ಒದಗಿಸಬೇಕು’ ಎಂದು ಒತ್ತಾಯಿಸಿದರು.
‘ಸರ್ಕಾರಿ ಹುಲ್ಲುಗಾವಲು, ಗೋಮಾಳ, ಜಮೀನುಗಳಲ್ಲಿ ಸರ್ಕಾರಿ ವೆಚ್ಚದಲ್ಲಿ ಈಚಲು ಮರಗಳನ್ನು ಬೆಳೆಸಬೇಕು. ನೀರಾ ಮಾರಾಟಕ್ಕೆ ನಿಗಮ ಸ್ಥಾಪಿಸಬೇಕು. ಮದ್ಯ ಮಾರಾಟದಲ್ಲಿ ನಮ್ಮ ಸಮಾಜಕ್ಕೆ ಶೇ 20ರಷ್ಟು ಮೀಸಲಾತಿ ನೀಡಬೇಕು. ಇಲ್ಲದಿದ್ದಲ್ಲಿ, ಹೋರಾಟವನ್ನು ತೀವ್ರಗೊಳಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.
ರಾಜ್ಯ ಸಂಘಟನಾ ಕಾರ್ಯದರ್ಶಿ ವಸಂತ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ. ವಾಸು, ಮುಖಂಡರಾದ ಧ್ರುವರಾಜ್, ಕೃಷ್ಣ, ಲೋಕೇಶ್ ಹಾಗೂ ಸಿದ್ದಪ್ಪಾಜಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.