ಮೈಸೂರು: ಜಾತಿಗಣತಿ ವರದಿ ಹಾಗೂ ಪರಿಶಿಷ್ಟ ಜಾತಿ ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸೋಮವಾರ ಪ್ರತಿಭಟಿಸಿದರು.
‘ಪರಿಶಿಷ್ಟ ಜಾತಿಯಲ್ಲಿ ನೂರೊಂದು ಉಪಜಾತಿಗಳಿವೆ. ಸುಪ್ರೀಂಕೋರ್ಟ್ ಆದೇಶ ಬಂದರೂ ರಾಜ್ಯ ಸರ್ಕಾರ ಆದೇಶ ಅನುಷ್ಠಾನಗೊಳಿಸಿಲ್ಲ. ಕೂಡಲೇ ಸರ್ಕಾರ ಈ ಬಗ್ಗೆ ಚಿಂತನೆ ಮಾಡಬೇಕು. ಬಾಕಿ ಉಳಿದಿರುವ ಬ್ಯಾಕ್‌ಲಾಗ್ ಹುದ್ದೆ, ಹೊಸ ನೇಮಕಾತಿ ಪ್ರಕ್ರಿಯೆಗಳನ್ನು ಒಳ ಮೀಸಲಾತಿ ಜಾರಿಯಾಗುವವರೆಗೆ ತಡೆ ಹಿಡಿಯಬೇಕು’ ಎಂದು ಒತ್ತಾಯಿಸಿದರು.
‘ಈ ಬಗ್ಗೆ ಅನೇಕ ವರ್ಷದಿಂದ ಹೋರಾಟ ನಡೆಯುತ್ತಿದ್ದು, ಆ ವೇಳೆ ತೊಡಕು ಮುಂದಿಡುತ್ತಿದ್ದರು. ಈಗ ಕಾನೂನು ಮೂಲಕವೇ ಸ್ಪಷ್ಟನೆ ದೊರಕಿದೆ. ಆದರೆ ಅದರಲ್ಲಿನ ಕೆಲವು ಸಣ್ಣ ಅಂಶ ನೆಪವಾಗಿಟ್ಟು ಮೀಸಲಾತಿ ಜಾರಿಗೊಳಿಸುವುದನ್ನು ತಡೆಯುವ ಹುನ್ನಾರ ನಡೆಯುತ್ತಿದೆ. ಪ.ಜಾತಿಯೊಳಗಡೆ ಯಾವುದೇ ಸೌಲಭ್ಯ ದೊರೆಯದೆ ಅನ್ಯಾಯಕ್ಕೊಳಗಾಗಿರುವ ಸಮುದಾಯಗಳಿಗೆ ಮೀಸಲಾತಿಯು ಸಾಮಾಜಿಕ ನ್ಯಾಯ ದೊರಕಿಸಿಕೊಡಲಿದ್ದು, ಶೀಘ್ರ ಒಳಮೀಸಲಾತಿ ಜಾರಿಗೊಳಿಸಬೇಕು’ ಎಂದು ಆಗ್ರಹಿಸಿದರು.
‘2023ರ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಳಮೀಸಲಾತಿ ಜಾರಿಗೊಳಿಸುತ್ತೇವೆ ಎಂದು ಭರವಸೆ ನೀಡಿತ್ತು. ಕಾನೂನು ತೊಡಕು ನಿವಾರಣೆಯಾಗಿರುವುದರಿಂದ ಒಳಮೀಸಲಾತಿ ಜಾರಿಗೆ ಮುಂದಾಗಬೇಕು. ದೇಶದಲ್ಲಿ ಹತ್ತಾರು ಧರ್ಮ, ನೂರಾರು ಜಾತಿ, ಸಾವಿರಾರು ಉಪಜಾತಿಗಳಿದ್ದು, ಅವುಗಳ ಸರಿಯಾದ ಸಂಖ್ಯೆ ತಿಳಿದಿಲ್ಲ. ಹೀಗಾಗಿ ರಾಜಕೀಯ ಪ್ರಾತಿನಿಧ್ಯದಲ್ಲೂ ಕೆಲವು ಜಾತಿಗಳಿಗೆ ಅನ್ಯಾಯವಾಗಿದೆ. ಸರ್ಕಾರ ಜಾತಿಗಣತಿ ವರದಿ ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದರು.
‘ಸರ್ಕಾರ ಗ್ಯಾರಂಟಿ ಯೋಜನೆಗೆ ಬಳಸುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣಕ್ಕಾಗಿ ಮೀಸಲಾದ ಹಣವನ್ನು ವಾಪಸ್ ನಿಗಮಕ್ಕೆ ತುಂಬಿ ಅಭಿವೃದ್ಧಿ ಕಾರ್ಯಕ್ಕೆ ಬಳಸಬೇಕು’ ಎಂದರು.
ಸಂಘಟನೆಯ ಪದಾಧಿಕಾರಿಗಳಾದ ಬನ್ನಳ್ಳಿ ಸೋಮಣ್ಣ, ಮಲ್ಲಹಳ್ಳಿ ನಾರಾಯಣ, ದೊಡ್ಡಸಿದ್ದು ಹಾದನೂರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.