ADVERTISEMENT

ಕೊಳವೆಬಾವಿ ವಿದ್ಯುದ್ದೀಕರಣ ಅಪೂರ್ಣ: 20 ಗುತ್ತಿಗೆದಾರರು ಕಪ್ಪುಪಟ್ಟಿಗೆ

​ಪ್ರಜಾವಾಣಿ ವಾರ್ತೆ
Published 5 ಜುಲೈ 2024, 13:19 IST
Last Updated 5 ಜುಲೈ 2024, 13:19 IST
   

ಮೈಸೂರು: ‘ಎಸ್‌ಇಪಿ ಹಾಗೂ ಟಿಎಸ್‌ಪಿ ಯೋಜನೆ ಅಡಿಯಲ್ಲಿ ಕೊರೆಸಲಾದ ಕೊಳವೆಬಾವಿಗಳ ವಿದ್ಯುದ್ದೀಕರಣ ಕಾಮಗಾರಿ ಪೂರ್ಣಗೊಳಿಸದಿರುವ 20 ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು’ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌.ಎಸ್. ಭೋಸರಾಜು ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ಜಲದರ್ಶಿನಿ ಅತಿಥಿಗೃಹದ ಸಭಾಂಗಣದಲ್ಲಿ ಸಣ್ಣ ನೀರಾವರಿ ಇಲಾಖೆಯ ಮೈಸೂರು ವೃತ್ತದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ನಬಾರ್ಡ್‌, ಎಸ್‌ಡಿಆರ್‌ಎಫ್‌ ಮತ್ತು ಬಜೆಟ್‌ನಲ್ಲಿ ಘೋಷಣೆ ಮಾಡಲಾದ ಯೋಜನೆಗಳ ಅನುಷ್ಠಾನ ಹಾಗೂ ಅವುಗಳ ಪ್ರಸ್ತುತ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದಿದ್ದೇನೆ. ಲೋಕಸಭೆ ಚುನಾವಣೆ ಮಾದರಿ ನೀತಿಸಂಹಿತೆಯ ಕಾರಣ ನೀಡಿ ಹಲವಾರು ಯೋಜನೆಗಳ ಟೆಂಡರ್‌ ಪ್ರಕ್ರಿಯೆ ನಿಧಾನಗೊಳಿಸಿರುವುದು ಸರಿಯಲ್ಲ’ ಎಂದು ತರಾಟೆಗೆ ತೆಗೆದುಕೊಂಡರು.

ADVERTISEMENT

ಮೂರು ವರ್ಷದಿಂದ ಬಾಕಿ:

‘ವಿಶೇಷ ಘಟಕ ಯೋಜನೆಯಡಿ ಕೊಳವೆ ಬಾವಿಗಳನ್ನು ಕೊರೆಸಲಾಗಿದೆ. ಆದರೆ, ಹಲವು ಕಡೆಗಳಲ್ಲಿನ ಬೋರ್‌ವೆಲ್‌ಗಳನ್ನು ಗುತ್ತಿಗೆದಾರರು ವಿದ್ಯುದ್ದೀಕರಣಗೊಳಿಸುವ ಕಾರ್ಯವನ್ನು ಪೂರ್ಣಗೊಳಿಸಿಲ್ಲ. ಕೆಲವು ಪ್ರಕರಣಗಳಲ್ಲಿ ಮೂರು ವರ್ಷಗಳಿಂದ ಈ ಕಾರ್ಯವನ್ನು ಬಾಕಿ ಉಳಿಸಿಕೊಳ್ಳಲಾಗಿದೆ. ಅಂತಹ ಗುತ್ತಿಗೆದಾರರ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.

‘ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಕೈಗೊಳ್ಳಬೇಕಾಗಿದ್ದ 7 ಕೆರೆ ತುಂಬಿಸುವ ಯೋಜನೆಗೆ 2022ರ ಮಾರ್ಚ್‌ನಲ್ಲಿ ಟೆಂಡರ್‌ ಪ್ರಕ್ರಿಯೆ ಪೂರೈಸಿ ಕರಾರು ಪತ್ರವನ್ನು ಮಾಡಿಕೊಡಲಾಗಿತ್ತು. ಇದುವರೆಗೂ ಕಾಮಗಾರಿ ಪ್ರಾರಂಭಿಸಲ್ಲ. ಪ್ರಾರಂಭಿಸುವಂತೆ ಗುತ್ತಿಗೆದಾರರಿಗೆ ಹಲವು ಬಾರಿ ನೋಟಿಸ್ ನೀಡಿದ್ದರೂ ಪ್ರಯೋಜನವಾಗಿಲ್ಲ. ಈ ಗುತ್ತಿಗೆಯನ್ನೂ ರದ್ದುಪಡಿಸಿ ಶಿಸ್ತು ಕ್ರಮ ಜರುಗಿಸಬೇಕು’ ಎಂದು ಸೂಚಿಸಿದರು.

‘ಯಾವುದೇ ಕಾಮಗಾರಿ ಪ್ರಾರಂಭಿಸುವ ಮುನ್ನ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳಬೇಕು. ಇದನ್ನು ಪೂರ್ಣಗೊಳಿಸದೆ ಬೇರೆ ಪ್ರಕ್ರಿಯೆ ಪ್ರಾರಂಭಿಸಿದರೆ ಬಹಳಷ್ಟು ತೊಂದರೆಗಳೂ ಎದುರಾಗುತ್ತವೆ. ಈ ಹಿನ್ನೆಲೆಯಲ್ಲಿ ಭೂಸ್ವಾಧೀನ ಪ್ರಕ್ರಿಯೆಗೆ ಆದ್ಯತೆ ಕೊಡಬೇಕು’ ಎಂದು ತಿಳಿಸಿದರು.

‘ಕೆರೆಗಳನ್ನು ಸುಸ್ಥಿತಿಯಲ್ಲಿ ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಗಮನ ಹರಿಸಬೇಕು. ಅವುಗಳಿಗೆ ಮಳೆ ನೀರು ಹೆಚ್ಚಾಗಿ ಸಂಗ್ರಹವಾಗುವಂತೆ ಕ್ರಮ ಕೈಗೊಳ್ಳಬೇಕು. ಅಲ್ಲದೇ, ಮುಗಿದಿರುವ ಕಾಮಗಾರಿಗಳ ವರದಿಯನ್ನು ಸಕಾಲಕ್ಕೆ ಸಲ್ಲಿಸಬೇಕು. ಕಾಮಗಾರಿಗಳನ್ನು ಚುರುಕುಗೊಳಿಸಿ ಪೂರ್ಣಗೊಳಿಸಬೇಕು’ ಎಂದು ಸೂಚಿಸಿದರು.

ಸಣ್ಣ ನೀರಾವರಿ ಇಲಾಖೆಯ ದಕ್ಷಿಣ ವಲಯದ ಮುಖ್ಯ ಎಂಜಿನಿಯರ್‌ ರಾಘವನ್‌, ಎಸ್‌ಇ ವಿನಾಯಕ್‌ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.