ADVERTISEMENT

ಮೈಸೂರು | ಲಕ್ಷ್ಮೀಕಾಂತ ರೆಡ್ಡಿ ಹೊಸ ಡಿಸಿ, ಅಧಿಕಾರ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 5 ಜುಲೈ 2024, 14:32 IST
Last Updated 5 ಜುಲೈ 2024, 14:32 IST
<div class="paragraphs"><p>ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ ಶುಕ್ರವಾರ ಅಧಿಕಾರ ಸ್ವೀಕರಿಸಿದ ಜಿ.ಲಕ್ಷ್ಮೀಕಾಂತ ರೆಡ್ಡಿ ಅವರಿಗೆ ನಿರ್ಗಮಿತ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಶುಭ ಹಾರೈಸಿದರು</p></div>

ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ ಶುಕ್ರವಾರ ಅಧಿಕಾರ ಸ್ವೀಕರಿಸಿದ ಜಿ.ಲಕ್ಷ್ಮೀಕಾಂತ ರೆಡ್ಡಿ ಅವರಿಗೆ ನಿರ್ಗಮಿತ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಶುಭ ಹಾರೈಸಿದರು

   

–ಪ್ರಜಾವಾಣಿ ಚಿತ್ರ

ಮೈಸೂರು: ಐಎಎಸ್ ಅಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಅವರನ್ನು ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದ್ದು, ಅಧಿಕಾರ ಸ್ವೀಕರಿಸಿದ್ದಾರೆ.

ADVERTISEMENT

ಇಲ್ಲಿ ಈವರೆಗೆ ಜಿಲ್ಲಾಧಿಕಾರಿಯಾಗಿದ್ದ ಡಾ.ಕೆ.ವಿ.ರಾಜೇಂದ್ರ ಅವರನ್ನು ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ.

ರೆಡ್ಡಿ ಕೆಯುಐಡಿಎಫ್‌ಸಿ (ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮ) ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಅದಕ್ಕಿಂತ ಹಿಂದೆ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾಗಿ ಕೆಲಸ ಮಾಡಿದ್ದರು.

ಅಧಿಕಾರ ಸ್ವೀಕಾರ: ಸರ್ಕಾರದ ಆದೇಶದಂತೆ ಜಿಲ್ಲಾಧಿಕಾರಿಯಾಗಿ ಲಕ್ಷ್ಮೀಕಾಂತ ರೆಡ್ಡಿ ಅವರು ಬೆಳಿಗ್ಗೆಯೇ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ರಾಜೇಂದ್ರ ಅವರು ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು.

‘ಹಿಂದೆ ನಾನು ಇಲ್ಲಿನ ಮಹಾನಗರ ಪಾಲಿಕೆ ಆಯುಕ್ತರಾಗಿ ಎರಡೂಕಾಲು ವರ್ಷ ಕೆಲಸ ಮಾಡಿದ್ದೆ. ಈಗ ಜಿಲ್ಲಾಧಿಕಾರಿಯಾಗಿ ಬಂದಿದ್ದೇನೆ. ಇಲ್ಲಿ ಮತ್ತೊಮ್ಮೆ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿರುವುದು ನನ್ನ ಅದೃಷ್ಟ’ ಎಂದು ರೆಡ್ಡಿ ಪ್ರತಿಕ್ರಿಯಿಸಿದರು.

‘ಮುಖ್ಯಮಂತ್ರಿ ತವರು ಜಿಲ್ಲೆಯಾದ್ದರಿಂದ ಜವಾಬ್ದಾರಿ ಜಾಸ್ತಿ ಇದೆ. ನನ್ನ ಮೇಲೆ ವಿಶ್ವಾಸವಿಟ್ಟು ಜವಾಬ್ದಾರಿಯನ್ನು ನೀಡಿದ್ದಾರೆ. ಅದನ್ನು ನಿರ್ವಹಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತೇನೆ. ಪಾಲಿಕೆಯಲ್ಲಿ ಕೆಲಸ ಮಾಡಿದ್ದ ಅನುಭವ ನೆರವಾಗಲಿದೆ. ತಾಲ್ಲೂಕು ಕೇಂದ್ರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಹಲವು ವಿಷಯಗಳಿರುತ್ತವೆ. ಅವುಗಳೆಲ್ಲವನ್ನೂ ತಿಳಿದುಕೊಂಡು ಕೆಲಸ ಮಾಡುತ್ತೇನೆ’ ಎಂದು ಹೇಳಿದರು.

ಇದಕ್ಕೂ ಮುನ್ನ ಅವರು, ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.