ADVERTISEMENT

ಅಣ್ಣಾಮಲೈ ವಿರುದ್ಧ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರ ಆಕ್ರೋಶ, ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2021, 11:09 IST
Last Updated 5 ಆಗಸ್ಟ್ 2021, 11:09 IST
ಮೇಕೆದಾಟು ಅಣೆಕಟ್ಟು ಯೋಜನೆಯನ್ನು ವಿರೋಧಿಸುತ್ತಿರುವ ತಮಿಳುನಾಡು ಸರ್ಕಾರದ ವಿರುದ್ಧ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು
ಮೇಕೆದಾಟು ಅಣೆಕಟ್ಟು ಯೋಜನೆಯನ್ನು ವಿರೋಧಿಸುತ್ತಿರುವ ತಮಿಳುನಾಡು ಸರ್ಕಾರದ ವಿರುದ್ಧ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು   

ಮೈಸೂರು: ಮೇಕೆದಾಟು ಅಣೆಕಟ್ಟು ಯೋಜನೆಯನ್ನು ವಿರೋಧಿಸುತ್ತಿರುವ ತಮಿಳುನಾಡು ಸರ್ಕಾರ ಹಾಗೂ ಅಲ್ಲಿನ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ವಿರುದ್ಧ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

‘ಕರ್ನಾಟಕದ ಪೊಲೀಸ್‌ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ಅಣ್ಣಾಮಲೈ ಕನ್ನಡ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಈ ಯೋಜನೆಯನ್ನು ವಿರೋಧಿಸಿ ಉಪವಾಸ ಸತ್ಯಾಗ್ರಹ ನಡೆಸಿರುವುದು ಅತ್ಯಂತ ಖಂಡನೀಯ. ಅವರೇನಾದರೂ ಕರ್ನಾಟಕ ಪ್ರವೇಶಿಸಿದರೆ ಘೇರಾವ್‌ ಮಾಡಲಾಗುವುದು’ ಎಂದು ಕರ್ನಾಟಕ ಸೇನಾ ಪಡೆ ಜಿಲ್ಲಾ ಘಟಕದ ಅಧ್ಯಕ್ಷ ತೇಜೇಶ ಲೋಕೇಶ್ ಗೌಡ ಎಚ್ಚರಿಕೆ ನೀಡಿದರು.

‘ಕರ್ನಾಟಕದಿಂದ ನಿಗದಿತ ಪ್ರಮಾಣಕ್ಕಿಂತಲೂ ಹೆಚ್ಚಿನ ನೀರು ತಮಿಳುನಾಡಿಗೆ ಬಿಡುಗಡೆಯಾಗುತ್ತಿದೆ. ಪ್ರತಿ ವರ್ಷ 60ರಿಂದ 70 ಟಿಎಂಸಿ ಅಡಿ ನೀರು ಸಮುದ್ರದ ಪಾಲಾಗುತ್ತಿದೆ. ಹೀಗಾಗಿ ತಮಿಳುನಾಡಿಗೆ ಬಿಡಬೇಕಾದ ನೀರನ್ನು ಬಿಟ್ಟು, ವೃಥಾ ಪೋಲಾಗುವ ಹೆಚ್ಚುವರಿ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಮೇಕೆದಾಟುವಿನಲ್ಲಿ ಅಣೆಕಟ್ಟೆ ನಿರ್ಮಿಸಲು ಕರ್ನಾಟಕ ಮುಂದಾಗಿದೆ. ಇದರಿಂದ ಬೆಂಗಳೂರು ಮತ್ತು ಸುತ್ತಮುತ್ತಲ ನಗರಗಳಿಗೆ ಕುಡಿಯುವ ನೀರಿಗಾಗಿ ಹಾಗೂ ವಿದ್ಯುತ್ ಉತ್ಪಾದನೆಗೆ ಬಳಸಲಾಗುತ್ತದೆ. ವಿದ್ಯುತ್ ಉತ್ಪಾದನೆ ನಂತರದ ನೀರು ಸಹಜವಾಗಿ ತಮಿಳುನಾಡಿಗೆ ಹರಿಯುತ್ತದೆ. ಅವರಿಗೆ ನೀರಿನ ಪ್ರಮಾಣದಲ್ಲಿ ಯಾವುದೇ ವ್ಯತ್ಯಾಸ ಆಗುವುದಿಲ್ಲ’ ಎಂದರು.

‘ಕೇಂದ್ರ ಸರಕಾರ ಈ ವಿಚಾರದಲ್ಲಿ ಜಾಣ ಕುರುಡು ನೀತಿ ಅನುಸರಿಸುತ್ತಿರುವುದು ನಾಚಿಕೆಗೇಡಿನ ಸಂಗತಿ. ರಾಜ್ಯದ ಸರ್ವ ಪಕ್ಷಗಳೂ ಒಗ್ಗೂಡಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು. ಈ ಯೋಜನೆಯನ್ನು ಶೀಘ್ರ ಕಾರ್ಯ ರೂಪಕ್ಕೆ ತರಬೇಕು’ ಎಂದು ಆಗ್ರಹಿಸಿದರು.

ಕರ್ನಾಟಕ ಸೇನಾ ಪಡೆಯ ಪಿ.ಶಾಂತರಾಜೇ ಅರಸ್, ಎಂ.ಬಿ.ಪ್ರಭುಶಂಕರ್, ಎಸ್.ಯೋಗೀಶ್, ಎಂ.ಜೆ.ಚಂದ್ರ, ಪ್ರಜೇಶ್, ಮನುನಾಯಕ್, ಗೊರೂರು ಮಲ್ಲೇಶ್ ಮತ್ತು ಸೋಮಶೇಖರ್, ಬಸವರಾಜು, ಸುಬ್ಬೇಗೌಡ, ಡಾ.ಮೊಗಣ್ಣಾಚಾರ್, ಬಂಗಾರಪ್ಪ, ಕುಮಾರ್ ಗೌಡ, ವಿಜಯೇಂದ್ರ, ಎಳನೀರು ರಾಮಣ್ಣ, ದರ್ಶನ್ ಗೌಡ, ಮಂಜುನಾಥ್, ರಮೇಶ್, ರವಿ ನಾಯಕ್, ಗುರುಮಲ್ಲಪ್ಪ, ಚೇತನ್, ನಂದಕುಮಾರ್, ಗಣೇಶ್ ಪ್ರಸಾದ್, ಮಹದೇವ ಸ್ವಾಮಿ, ರಮಾಬಾಯಿ ಸುಂದರಪ್ಪ, ಶ್ರೀಕಂಠೇಗೌಡ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.