ADVERTISEMENT

ಮುಡಾ: ಮತ್ತೊಬ್ಬ ಅಧಿಕಾರಿ ವರ್ಗಾವಣೆ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2024, 21:28 IST
Last Updated 14 ಸೆಪ್ಟೆಂಬರ್ 2024, 21:28 IST
<div class="paragraphs"><p> ಮುಡಾ</p></div>

ಮುಡಾ

   

ಮೈಸೂರು: ಇಲ್ಲಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಶೇ 50:50 ಅನುಪಾತದ ಬದಲಿ ನಿವೇಶನ ಹಂಚಿಕೆ ಹಗರಣ ಬಹಿರಂಗವಾದ ನಂತರ ಮತ್ತೊಬ್ಬ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ. ಪ್ರಾಧಿಕಾರದ ವಿಶೇಷ ಭೂಸ್ವಾಧೀನ ಅಧಿಕಾರಿ ಆರ್.ಮಂಜುನಾಥ್ ಅವರನ್ನು ಕಬಿನಿ ಜಲಾಶಯ ಯೋಜನೆ-2ರ ವಿಶೇಷ ಭೂಸ್ವಾಧೀನಾಧಿಕಾರಿ ಸ್ಥಾನಕ್ಕೆ ನಿಯೋಜಿಸಲಾಗಿದೆ.

ಹಗರಣದ ಹಿನ್ನೆಲೆಯಲ್ಲಿ ವರ್ಗಾವಣೆಯಾದ 4ನೇ ಅಧಿಕಾರಿ ಇವರು. ಈ ಮುನ್ನ, ಆಯುಕ್ತ, ಕಾರ್ಯದರ್ಶಿ ಹಾಗೂ ಒಬ್ಬ ಎಂಜಿನಿಯರ್ ವರ್ಗಾವಣೆಯಾಗಿತ್ತು.

ADVERTISEMENT

‘ಹಗರಣದ ವಿಚಾರದಲ್ಲಿ ರಾಜ್ಯ ಸರ್ಕಾರದ ನಡೆ ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ’ ಎಂದು ಶಾಸಕ ಟಿ.ಎಸ್. ಶ್ರೀವತ್ಸ ದೂರಿದರು.

‘ಹಗರಣದಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದೆ. ಆ ಹಿನ್ನೆಲೆಯಲ್ಲಿ ಮಂಜುನಾಥ್ ವರ್ಗಾವಣೆ ಮಾಡಲಾಗಿದೆ. ಆದರೆ, ವರ್ಗಾವಣೆ ಶಿಕ್ಷೆಯಲ್ಲ. ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕು’ ಎಂದು ಒತ್ತಾಯಿಸಿದರು.

‘ಹಿಂದಿನ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಅವರ ಅಮಾನತು ಆದೇಶ ವಾಪಸ್ ಪಡೆದಿರುವ ಬಗ್ಗೆ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ. ಆದರೆ, ಆದೇಶದ ಪ್ರತಿ ಸಿಕ್ಕಿಲ್ಲ. ಅಧಿಕಾರಿಗಳೇ ಸರ್ಕಾರದ ಮೇಲೆ ಹಿಡಿತ ಹೊಂದಿದ್ದಾರೆ. ಅವರ ವಿರುದ್ದ ಕ್ರಮಕ್ಕೆ ಒತ್ತಾಯಿಸಿ ಮಂಗಳವಾರ (ಸೆ.17) ರಾಜ್ಯಪಾಲರು ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮತ್ತೊಮ್ಮೆ ದೂರು ಸಲ್ಲಿಸುವೆ. ಹೋರಾಟವನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.