ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ಉಪಸ್ಥಿತಿಯಲ್ಲಿ ಇಲ್ಲಿನ ಅಂಬಾವಿಲಾಸ ಅರಮನೆ ಆವರಣದಲ್ಲಿ ಜೂನ್ 21ರಂದು ನಡೆಯಲಿರುವ ಯೋಗ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಮತ್ತು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಜಿಲ್ಲಾಡಳಿತದಿಂದ ಅಧಿಕೃತವಾಗಿ ಆಮಂತ್ರಣ ನೀಡಿ ಆಹ್ವಾನಿಸಲಾಯಿತು.
ಸಂಸದ ಪ್ರತಾಪ ಸಿಂಹ, ಶಾಸಕರಾದ ಎಸ್.ಎ. ರಾಮದಾಸ್, ಎಲ್. ನಾಗೇಂದ್ರ, ಮೇಯರ್ ಸುನಂದಾ ಪಾಲನೇತ್ರ, ‘ಮುಡಾ’ ಅಧ್ಯಕ್ಷ ಎಚ್.ವಿ. ರಾಜೀವ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಮೊದಲಾದವರು ಆಮಂತ್ರಿಸಿದರು.
ಪ್ರಧಾನಿ ಭಾಗವಹಿಸುವ ಯೋಗ ದಿನದ ಕಾರ್ಯಕ್ರಮದ ಮುಖ್ಯ ವೇದಿಕೆಯಲ್ಲಿ ರಾಜವಂಶಸ್ಥರಿಗೆ ಅವಕಾಶ ನೀಡುವಂತೆ ಸಾಮಾಜಿಕ ಜಾಲತಾಣದಲ್ಲಿ ಒತ್ತಾಯ ಕೇಳಿಬಂದಿತ್ತು. ‘ಪ್ರಧಾನಿಯೊಂದಿಗೆ ರಾಜ್ಯಪಾಲರು, ಮುಖ್ಯಮಂತ್ರಿ, ಕೇಂದ್ರ ಸಚಿವರು ಮತ್ತು ಮುಖ್ಯಮಂತ್ರಿಗೆ ಮಾತ್ರವೇ ವೇದಿಕೆಯಲ್ಲಿ ಅವಕಾಶ ಇರಲಿದೆ’ ಎಂಬ ಸಂಸದ ಪ್ರತಾಪ ಸಿಂಹ ಹೇಳಿಕೆಗೆ ಆಕ್ಷೇಪ ವ್ಯಕ್ತವಾಗಿತ್ತು. ಅವರ ಹೇಳಿಕೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೂ ಗ್ರಾಸವಾಗಿತ್ತು. ಇದರಿಂದ ಎಚ್ಚೆತ್ತ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ರಾಜವಂಶಸ್ಥರಿಗೆ ಆಮಂತ್ರಣ ನೀಡಿದ್ದಾರೆ. ಯಧುವೀರ್ ಪ್ರಧಾನಿಯೊಂದಿಗೆ ಯೋಗಾಸನ ಮಾಡುವ ನಿರೀಕ್ಷೆ ಇದೆ. ಪ್ರಧಾನಿಯು, ಯೋಗ ಕಾರ್ಯಕ್ರಮದ ನಂತರ ರಾಜವಂಶಸ್ಥರ ಆಹ್ವಾನದ ಮೇರೆಗೆ ಅವರ ನಿವಾಸದಲ್ಲಿ ಉಪಾಹಾರ ಸೇವಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.