ಮೈಸೂರು: ಪರಿಸರ ಹೋರಾಟಗಾರ್ತಿ ದಿಶಾ ರವಿ ಅವರನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಇಲ್ಲಿನ ಜಿಲ್ಲಾ ನ್ಯಾಯಾಲಯದ ಮುಂಭಾಗದ ಮಹಾತ್ಮ ಗಾಂಧಿ ಪುತ್ಥಳಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು.
ಅರಸು ಪ್ರತಿಮೆ ಪ್ರತಿಷ್ಠಾಪನ ಸಮಿತಿ, ದಲಿತ ಸಂಘರ್ಷ ಸಮಿತಿ, ಸವಿತಾ ಸಮಾಜ ಸಂಘರ್ಷ ಸಮಿತಿ, ಕರ್ನಾಟಕ ಕನ್ನಡ ವೇದಿಕೆ, ಜಿಲ್ಲಾ ಕರ್ನಾಟಕ ಚಳವಳಿಗಾರರ ಸಂಘ, ಪರಿಸರವಾದಿಗಳ ಒಕ್ಕೂಟ, ಕರ್ನಾಟಕ ರಾಜ್ಯ ಕನಕ ಯುವ ಸೇನೆ, ಕರ್ನಾಟಕ ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆ, ಸಂವಿಧಾನ ರಕ್ಷಣಾ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ಸರ್ಕಾರದ ವಿರುದ್ಧ ಕಿಡಿಕಾರಿದರು.
ಈ ವೇಳೆ ಮಾತನಾಡಿದ ಸಾಹಿತಿ ಪ್ರೊ.ಕೆ.ಎಸ್.ಭಗವಾನ್, ‘ದಿಶಾ ರವಿ ಬಂಧನ ಪ್ರಜಾಪ್ರಭುತ್ವದ ತತ್ವಗಳಿಗೆ ವಿರುದ್ಧವಾಗಿದೆ. ಇವರು ಮಾಡಿದ ತಪ್ಪಾದರೂ ಏನು ಎಂಬುದು ಯಾರಿಗೂ ಗೊತ್ತಿಲ್ಲ. ಸರ್ಕಾರವೂ ಹೇಳುತ್ತಿಲ್ಲ. ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದರು.
‘ಸಂವಿಧಾನದ ಬಗ್ಗೆ ಗೌರವ ಇಟ್ಟುಕೊಂಡಿರುವ ಪ್ರಧಾನಮಂತ್ರಿ ಕೂಡಲೇ ಕ್ರಮ ಕೈಗೊಳ್ಳಬೇಕು. ಸಂವಿಧಾನವೇ ಶ್ರೇಷ್ಠ, ಅದರಂತೆ ಎಲ್ಲರೂ ನಡೆಯಬೇಕು’ ಎಂದು ಆಗ್ರಹಿಸಿದರು.
ಮೌನ ಪ್ರತಿಭಟನೆ ನಡೆಸುವ ಮೂಲಕ ದಿಶಾ ರವಿ ಅವರನ್ನು ಬಿಡುಗಡೆ ಮಾಡಬೇಕು ಎಂದು ಕಾರ್ಯಕರ್ತರು ಮನವಿ ಮಾಡಿದರು.
ಪ್ರತಿಭಟನೆಯಲ್ಲಿ ಹೋರಾಟಗಾರ ರಾದ ಜಾಕೀರ್ ಹುಸೇನ್, ಭಾನು ಮೋಹನ್, ಮಾಜಿ ಮೇಯರ್ ಪುರುಷೋತ್ತಮ್, ಡೈರಿ ವೆಂಕಟೇಶ್, ಎ.ಎಚ್.ಕೃಷ್ಣೇಗೌಡ, ದ್ಯಾವಪ್ಪನಾಯಕ, ಪ್ರಶಾಂತ್ ಆರ್ಯ, ಗೋಪಿ, ಪಿ.ರಾಜು, ಗೋಪಾಲಕೃಷ್ಣ, ವಿ.ಮಂಜುನಾಥ್, ತಿಮ್ಮಯ್ಯ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.