ADVERTISEMENT

ಕನ್ನಡಿಗರಿಗೇ ಉದ್ಯೋಗ; ಕಾಯ್ದೆ ರೂಪಿಸಿ: ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ

ಡಿಸಿ ಕಚೇರಿ ಎದುರು ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ, ಒತ್ತಾಯ

​ಪ್ರಜಾವಾಣಿ ವಾರ್ತೆ
Published 1 ಜುಲೈ 2024, 16:26 IST
Last Updated 1 ಜುಲೈ 2024, 16:26 IST

ಮೈಸೂರು: ಕನ್ನಡ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಸಂಬಂಧ ಕಾಯ್ದೆ ರೂಪಿಸಿ ಜಾರಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಜಿಲ್ಲಾಧಿಕಾರಿ ಕಚೇರಿ ಬಳಿ ಸೋಮವಾರ ಪ್ರತಿಭಟನೆ ನಡೆಯಿತು.

‘ರಾಜ್ಯಕ್ಕೆ ವರಸೆ ಬರುವವರ ಸಂಖ್ಯೆ ಹೆಚ್ಚಿದೆ. ಮೊದಲು ದಕ್ಷಿಣದ ರಾಜ್ಯಗಳಿಂದ ವಲಸೆ ಬಂದು ನೆಲೆ ನಿಂತರು. ಈಗ ಉತ್ತರದ ರಾಜ್ಯಗಳಿಂದ ವಲಸಿಗರ ಪ್ರವಾಹವೇ ಹರಿದುಬರುತ್ತಿದೆ. ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಮಂಗಳೂರಿನಂತಹ ಮಹಾನಗರಗಳಲ್ಲಿ ವಲಸೆ ಪ್ರಮಾಣ ಮಿತಿ ಮೀರಿದ್ದು, ಕನ್ನಡ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗ ಇಲ್ಲದಂತಾಗಿದೆ’ ಎಂದು ಪ್ರತಿಭಟನಕಾರರು ಕಿಡಿಕಾರಿದರು.

‘ಕನ್ನಡಿಗರ ಉದ್ಯೋಗಕ್ಕಾಗಿ ಹಲವು ದಶಕಗಳಿಂದ ಹೋರಾಟ ಮಾಡಲಾಗುತ್ತಿದ್ದರೂ, ಸರೋಜಿನಿ ಮಹಿಷಿ ವರದಿ ಜಾರಿಯಾಗಿಲ್ಲ. ಖಾಸಗಿ ಸಂಸ್ಥೆಗಳು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಬೇರೆ ರಾಜ್ಯದವರನ್ನು ನೇಮಿಸಿಕೊಳ್ಳುತ್ತಿದ್ದಾರೆ. ರಾಜ್ಯ ಸರ್ಕಾರ ಕಾರ್ಮಿಕ ಇಲಾಖೆಯ ಮೂಲಕ ಕನ್ನಡಿಗರಿಗೆ ಉದ್ಯೋಗ ನೀಡಬೇಕೆಂದು ಸೂಚಿಸಿದ್ದರೂ ಸಮರ್ಪಕವಾಗಿ ಜಾರಿಯಾಗಿಲ್ಲ. ಈ ವಿಚಾರದಲ್ಲಿ ಸರ್ಕಾರ ಇಚ್ಛಾಶಕ್ತಿ ತೋರಬೇಕು. ಕಾನೂನು ರೂಪಿಸುವ ವೇಳೆ ಎಚ್ಚರಿಕೆ ವಹಿಸಿ ನ್ಯಾಯಾಲಯಗಳಲ್ಲಿ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು’ ಎಂದು ಆಗ್ರಹಿಸಿದರು.

ADVERTISEMENT

ಹಕ್ಕೊತ್ತಾಯಗಳು: ‘ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶ ಕಾಯ್ದೆ 1949ರ ಅನ್ವಯ ರಾಜ್ಯ ಸರ್ಕಾರ ಬಲಿಷ್ಠ ಕಾನೂನು ರೂಪಿಸಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಬೇಕು. ಕೇಂದ್ರ ಸರ್ಕಾರದ ಇಲಾಖೆಗಳು, ಸಾರ್ವಜನಿಕ ವಲಯದ ಘಟಕಗಳಲ್ಲಿ, ಎಲ್ಲಾ ಖಾಸಗಿ ಸಂಸ್ಥೆಯ ಸಿ ಮತ್ತು ಡಿ ದರ್ಜೆಯ ನೌಕರಿಯಲ್ಲಿ ಶೇ 100ರಷ್ಟು ಉದ್ಯೋಗ ಕನ್ನಡಿಗರಿಗೆ ಮೀಸಲಿಡಬೇಕು. ಎಲ್ಲಾ ಖಾಸಗಿ ಸಂಸ್ಥೆಗಳ ಹುದ್ದೆಗಳಲ್ಲಿ ಶೇ80 ಉದ್ಯೋಗ ಕನ್ನಡಿಗರಿಗೆ ನೀಡಬೇಕು. 15 ವರ್ಷ ಕರ್ನಾಟಕದಲ್ಲಿ ನೆಲೆಸಿರುವವರು ಕಡ್ಡಾಯವಾಗಿ ಕನ್ನಡ ಪರೀಕ್ಷೆ ಉತ್ತೀರ್ಣರಾಗಬೇಕು. ನಿಯಮಾವಳಿ ಪಾಲಿಸದ ಸಂಸ್ಥೆಗಳಿಗೆ ನೀಡಿರುವ ಮಾನ್ಯತೆ ರದ್ದುಗೊಳಿಸಬೇಕು. ರಾಜ್ಯ ಸರ್ಕಾರ ರೂಪಿಸುವ ಕನ್ನಡ ಪರ ಕಾನೂನು ಸಮರ್ಪಕವಾಗಿ ಜಾರಿಗೆ ತರಲು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಅಧಿಕಾರ ನೀಡಬೇಕು ಸೇರಿದಂತೆ ವಿವಿಧ ಹಕ್ಕೊತ್ತಾಯ ಮಂಡಿಸಿದರು.

ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಪ್ರವೀಣ್ ಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.