ADVERTISEMENT

ಸಂವಿಧಾನ ಉಳಿವಿಗೆ ಕಾಂಗ್ರೆಸ್ ಬೆಂಬಲಿಸಿ: ಯತೀಂದ್ರ ಸಿದ್ದರಾಮಯ್ಯ ಮನವಿ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2024, 16:03 IST
Last Updated 5 ಏಪ್ರಿಲ್ 2024, 16:03 IST
ಚಾಮುಂಡೇಶ್ವರಿ ಕ್ಷೇತ್ರದ ನಾಗವಾಲ ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಮಾತನಾಡಿದರು
ಚಾಮುಂಡೇಶ್ವರಿ ಕ್ಷೇತ್ರದ ನಾಗವಾಲ ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಮಾತನಾಡಿದರು   

ಮೈಸೂರು: ‘ದೇಶದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದ್ದು, ಸಂವಿಧಾನ ಉಳಿವಿಗೆ ಕಾಂಗ್ರೆಸ್ ಬೆಂಬಲಿಸಬೇಕು’ ಎಂದು ವರುಣ ಆಶ್ರಯ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಚಾಮುಂಡೇಶ್ವರಿ ಕ್ಷೇತ್ರದ ಗುಂಗ್ರಾಲ್ ಛತ್ರ ದೊಡ್ಡಗೌಡನಕೊಪ್ಪಲು, ಆನಂದೂರು, ನಾಗವಾಲ, ಬೆಳವಾಡಿ, ಬಸವನಪುರ ಗ್ರಾಮಗಳಲ್ಲಿ ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ಪರವಾಗಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

‘ಕೇಂದ್ರದಲ್ಲಿ ಮೋದಿ ಸರ್ಕಾರ ಬಂದ ಮೇಲೆ ಬಡವರು ಬಡವರಾಗಿಯೇ ಉಳಿದಿದ್ದಾರೆ. ಶ್ರೀಮಂತರು ಶ್ರೀಮಂತರಾಗುತ್ತಿದ್ದಾರೆ. ಕೇಂದ್ರ ಸರ್ಕಾರ ಬಡವರ ವಿರೋಧಿ ಸರ್ಕಾರವಾಗಿದೆ. ದಿನನಿತ್ಯ ಬಳಕೆಯ ಡೀಸೆಲ್, ಪೆಟ್ರೋಲ್, ಗ್ಯಾಸ್, ಆಹಾರ ವಸ್ತುಗಳ ಬೆಲೆ ಏರಿಸುತ್ತಿದೆ. ಇದರಿಂದ ಬಡವರು ಬದುಕುವುದೇ ಕಷ್ಟವಾಗಿದೆ. ಮೋದಿ ಸರ್ಕಾರ ಕೊಟ್ಟ ಭರವಸೆಗಳಲ್ಲಿ ಇದುವರೆಗೂ ಶೇ 10ರಷ್ಟು ಈಡೇರಿಸಿಲ್ಲ’ ಎಂದು ದೂರಿದರು.

ADVERTISEMENT

‘ಕಾಂಗ್ರೆಸ್ ನುಡಿದಂತೆ ನಡೆದಿದೆ. ಈ ಹಿಂದೆ ಸಿದ್ದರಾಮಯ್ಯರವರ ನೇತೃತ್ವದ ಸರ್ಕಾರ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿತ್ತು. ಇದೀಗ 5 ಗ್ಯಾರಂಟಿಗಳನ್ನು ಈಡೇರಿಸಿದೆ. ಬಡವರು ನೆಮ್ಮದಿಯಾಗಿ ಬದುಕು ಸಾಗಿಸುತ್ತಿದ್ದಾರೆ. ಕೇಂದ್ರದಲ್ಲಿ ಈ ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಒಂದು ವರ್ಷಕ್ಕೆ ₹1 ಲಕ್ಷ ನೀಡುತ್ತಾರೆ. ಜತೆಗೆ ರೈತರ ಸಾಲಮನ್ನಾ ಮಾಡಲಾಗುವುದು. ಕೃಷಿ ಕ್ಷೇತ್ರದ ಜಿಎಸ್‌ಟಿಯೂ ತೆಗೆಯಲಾಗುವುದು’ ಎಂದು ತಿಳಿಸಿದರು.

‘ಕಾಂಗ್ರೆಸ್ ಕಾರ್ಯಕರ್ತರು ಮನೆಮನೆಗೆ ತೆರಳಿ ಪಕ್ಷದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಬೇಕು. ಅಭ್ಯರ್ಥಿ ಎಂ. ಲಕ್ಷ್ಮಣ ಗೆಲುವಿಗೆ ಶ್ರಮಿಸಬೇಕು’ ಎಂದು ಕರೆ ನೀಡಿದರು.

ಮೈಮುಲ್ ಮಾಜಿ ಅಧ್ಯಕ್ಷ ಸಿದ್ದೇಗೌಡ, ಜಿ.ಪಂ ಮಾಜಿ ಅಧ್ಯಕ್ಷ ಕೂರ್ಗಳ್ಳಿ ಮಹದೇವ್, ಮಾಜಿ ಸದಸ್ಯರಾದ ಅರುಣ್‌ ಕುಮಾರ್, ಬೀರಿಹುಂಡಿ ಬಸವಣ್ಣ, ಮಾದೇಗೌಡ ರಾಕೇಶ್ ಪಾಪಣ್ಣ, ಕಾಂಗ್ರೆಸ್ ಸೇವಾದಳದ ಮಾಜಿ ಅಧ್ಯಕ್ಷ ಜಯರಾಮೇಗೌಡ, ಆನಂದೂರು ರಾಮೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ. ಗುರುಸ್ವಾಮಿ, ಮುಖಂಡರಾದ ಕೃಷ್ಣಕುಮಾರ ಸಾಗರ್, ನಾಗವಾಲ ನರೇಂದ್ರ, ಜಿ.ಕೆ. ಬಸವಣ್ಣ, ಡಾ. ಪ್ರಕಾಶ್, ಯದುಕುಮಾರ್, ಮಾರ್ಬಳ್ಳಿ ಕುಮಾರ್, ಹರೀಶ್ ಮೊಗಣ್ಣ, ಮಹೇಶ್, ಡಾ. ಪ್ರಕಾಶ್, ಚಲುವೇಗೌಡ, ಸೀಗಳ್ಳಿ ಕುಮಾರ್, ಹುಯಿಲಾಳು ರಾಘವೇಂದ್ರ, ಕಾಮಾಕ್ಷಮ್ಮ, ಭಾಗ್ಯ, ಸ್ವಾಮಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.