ಮೈಸೂರು: ‘ವೈದ್ಯಕೀಯ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ದಕ್ಷಿಣ ಭಾರತದ ರಾಜ್ಯಗಳ ಕುರಿತು ಕೇಂದ್ರ ಸರ್ಕಾರವು ಮಲತಾಯಿ ಧೋರಣೆ ಅನುಸರಿಸುತ್ತಿದೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ವಾಗ್ದಾಳಿ ನಡೆಸಿದರು.
ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ರಾಷ್ಟ್ರೀಯ ವೈದ್ಯಕೀಯ ಆಯೋಗವು ಪ್ರತಿ 10 ಲಕ್ಷ ಜನಸಂಖ್ಯೆಗೆ 100 ವೈದ್ಯಕೀಯ ಸೀಟು ನಿಗದಿಗೊಳಿಸಿ ಸುತ್ತೋಲೆ ಹೊರಡಿಸಿದ್ದು, ಅದನ್ನು ವಿರೋಧಿಸಿ ಕೇಂದ್ರಕ್ಕೆ ಪತ್ರ ಬರೆಯುತ್ತಿದ್ದೇವೆ’ ಎಂದರು.
‘ರಾಜ್ಯದ 7 ಕೋಟಿ ಜನಸಂಖ್ಯೆಗೆ 12 ಸಾವಿರ ಸೀಟುಗಳಿದ್ದು, ಹೊಸ ಮಾನದಂಡಕ್ಕಿಂತ ಹೆಚ್ಚುವರಿ ಸೀಟುಗಳಿವೆ. ಕೇಂದ್ರದ ನಿರ್ಬಂಧವು ಅವೈಜ್ಞಾನಿಕ ಕ್ರಮವಾಗಿದ್ದು, ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದೆ. ಹೊಸ ಕಾಲೇಜುಗಳನ್ನು ತೆರೆಯಲು ಈ ಮಾನದಂಡವು ಅಡ್ಡಿಯಾಗಲಿದೆ’ ಎಂದು ತಿಳಿಸಿದರು.
‘23 ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳಿವೆ. ಚಿತ್ರದುರ್ಗದಲ್ಲಿ ಈಗಾಗಲೇ ಆರಂಭವಾಗಿದೆ. ರಾಮನಗರ ಹಾಗೂ ಕನಕಪುರದಲ್ಲೂ ತೆರೆಯುವ ಬಗ್ಗೆ ಚಿಂತನೆ ನಡೆದಿದೆ. ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಜೊತೆ ಚರ್ಚಿಸಲಾಗುವುದು. ಪ್ರತಿ ಜಿಲ್ಲೆಯಲ್ಲೂ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಕ್ರಮ ವಹಿಸಲಾಗುವುದು’ ಎಂದರು.
ಕೋಲಾರದ ಆಸ್ಪತ್ರೆಯಲ್ಲಿ ಮಗು ಅಪಹರಣ ಪ್ರಕರಣದ ಪ್ರಶ್ನೆಗೆ ಪ್ರತಿಕ್ರಿಯಿಸಿ, ‘ರಾಜ್ಯದ ಎಲ್ಲ ಆಸ್ಪತ್ರೆಗಳಲ್ಲೂ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಈಗಾಗಲೇ ನಿರ್ದೇಶನ ನೀಡಲಾಗಿದೆ. ಇಂಥ ಪ್ರಕರಣಗಳು ನಡೆಯದಂತೆ ಎಚ್ಚರ ವಹಿಸಲಾಗಿದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.