ಮೈಸೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ಗೆ ಹಾಲಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರ ಅಳಿಯಂದಿರಾದ ಡಾ.ಮೋಹನ್ ಹಾಗೂ ಮಾಜಿ ಶಾಸಕ ಬಿ.ಹರ್ಷವರ್ಧನ್ ನಡುವೆ ತೀವ್ರ ಪೈಪೋಟಿ ಕಂಡುಬಂದಿದ್ದು, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಗುರುವಾರ ಈ ಬಗ್ಗೆ ಪ್ರಸಾದ್ ಅವರೊಂದಿಗೆ ಚರ್ಚಿಸಿದರು.
ಇಲ್ಲಿನ ಜಯಲಕ್ಷ್ಮಿಪುರಂನಲ್ಲಿರುವ ಪ್ರಸಾದ್ ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ‘ಮಾರ್ಚ್ 17ಕ್ಕೆ ಪ್ರಸಾದ್ ಅವರ ರಾಜಕೀಯ ಜೀವನ 50 ವರ್ಷ ಪೂರೈಸಲಿದೆ. ಚಾಮರಾಜನಗರ, ಮೈಸೂರು- ಕೊಡಗು ಕ್ಷೇತ್ರದ ಅಭ್ಯರ್ಥಿಗಳ ವಿಚಾರದಲ್ಲಿ ಸಲಹೆ ಪಡೆದಿದ್ದೇನೆ. ರಾಜಕೀಯ ನಿವೃತ್ತಿ ಪಡೆಯುವುದಾಗಿ ಅವರು ತಿಳಿಸಿದ್ದಾರೆ. ಚಾಮರಾಜನಗರ ಕ್ಷೇತ್ರದಿಂದ ಸೂಕ್ತ ಅಭ್ಯರ್ಥಿಯನ್ನು ವರಿಷ್ಠರು ಕಣಕ್ಕಿಳಿಸುತ್ತಾರೆ’ ಎಂದು ಪ್ರತಿಕ್ರಿಯಿಸಿದರು.
ಶ್ರೀನಿವಾಸಪ್ರಸಾದ್ ಮಾತನಾಡಿ, ‘ಬಿಜೆಪಿ ಟಿಕೆಟ್‌ಗೆ ನಮ್ಮ ಮನೆಯಲ್ಲಿಯೇ ಇಬ್ಬರು ಆಕಾಂಕ್ಷಿಗಳಿದ್ದಾರೆ. ಇಬ್ಬರ ನಡುವೆಯೂ ಉತ್ತಮ ಸಂಬಂಧವಿದೆ. ಯಾರಿಗೆ ಟಿಕೆಟ್ ಕೊಟ್ಟರೂ ಹೊಂದಾಣಿಕೆಯಿಂದ ಕೆಲಸ ಮಾಡುತ್ತಾರೆ’ ಎಂದು ‘ಕುಟುಂಬದವರಿಗೇ ಟಿಕೆಟ್ ದೊರೆಯಬೇಕು’ ಎಂಬ ಇಂಗಿತವನ್ನು ವ್ಯಕ್ತಪಡಿಸಿದರು. ‘ಇಬ್ಬರ ನಡುವೆಯೂ ನೀವು (ಮಾಧ್ಯಮದವರು) ತಂದು ಹಾಕುವ ಕೆಲಸ ಮಾಡಬೇಡಿ’ ಎಂದು ಕೋರಿದರು.
‘ಚಾಮರಾಜನಗರ ಕ್ಷೇತ್ರದ ಕುರಿತು ವಿಜಯೇಂದ್ರ ಜೊತೆ ಅಭಿಪ್ರಾಯ ಹಂಚಿಕೊಂಡಿದ್ದೇನೆ. ಚುನಾವಣಾ ರಾಜಕೀಯದಿಂದ ನಿವೃತ್ತಿ ಪಡೆದ ಬಳಿಕ ಬಹಿರಂಗ ಪ್ರಚಾರಕ್ಕೆ ಹೋಗುವುದಿಲ್ಲ. ಆದರೆ, ಬಿಜೆಪಿ ಬೆಂಬಲಿಸುವಂತೆ ಎಲ್ಲರನ್ನೂ ಕೇಳಿಕೊಳ್ಳುತ್ತೇನೆ’ ಎಂದರು.
ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಎಂ.ರಾಜೇಂದ್ರ, ನಗರ ಜಿಲ್ಲಾ ಘಟಕದ ಅಧ್ಯಕ್ಷ ಎಲ್.ನಾಗೇಂದ್ರ, ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ, ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ರಘು ಆರ್. ಕೌಟಿಲ್ಯ, ಅಲ್ಪಸಂಖ್ಯಾತರ ಮೋರ್ಚಾ ಅಧ್ಯಕ್ಷ ಡಾ.ಅನಿಲ್ ಥಾಮಸ್, ಮಾಜಿ ಸಂಸದ ಸಿ.ಎಚ್. ವಿಜಯಶಂಕರ್, ಬಿ. ಹರ್ಷವರ್ಧನ್ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.