ADVERTISEMENT

ಪ್ರತಿ ವಿಧಾನಸಭೆ ಕ್ಷೇತ್ರಕ್ಕೆ ₹40 ಲಕ್ಷ ಅನುದಾನ: ವೆಂಕಟರಾವ್‌ ನಾಡಗೌಡ

ಹೈದರಾಬಾದ್‌ ಕರ್ನಾಟಕ ವಿಮೋಚನಾ ದಿನಾಚರಣೆ ಧ್ವಜಾರೋಹಣ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2018, 10:12 IST
Last Updated 17 ಸೆಪ್ಟೆಂಬರ್ 2018, 10:12 IST
ರಾಯಚೂರು ಜಿಲ್ಲಾ ಪೊಲೀಸ್‌ ಮೈದಾನದಲ್ಲಿ ಸೋಮವಾರ ನಡೆದ ಹೈದರಾಬಾದ್‌ ಕರ್ನಾಟಕ ವಿಮೋಚನಾ ದಿನಾಚರಣೆ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್‌ ನಾಡಗೌಡ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದರು
ರಾಯಚೂರು ಜಿಲ್ಲಾ ಪೊಲೀಸ್‌ ಮೈದಾನದಲ್ಲಿ ಸೋಮವಾರ ನಡೆದ ಹೈದರಾಬಾದ್‌ ಕರ್ನಾಟಕ ವಿಮೋಚನಾ ದಿನಾಚರಣೆ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್‌ ನಾಡಗೌಡ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದರು   

ರಾಯಚೂರು: ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವುದು ಸೇರಿದಂತೆ ಬರ ಪರಿಸ್ಥಿತಿ ನಿಭಾಯಿಸಲು ಪ್ರತಿ ವಿಧಾನಸಭೆ ಕ್ಷೇತ್ರಕ್ಕೆ ರಾಜ್ಯ ಸರ್ಕಾರವು ₹ 40 ಲಕ್ಷ ಅನುದಾನ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್‌ ನಾಡಗೌಡ ಹೇಳಿದರು.

ಜಿಲ್ಲಾ ಪೊಲೀಸ್‌ ಮೈದಾನದಲ್ಲಿ ಸೋಮವಾರ ಏರ್ಪಡಿಸಿದ್ದ ಹೈದರಾಬಾದ್‌ ಕರ್ನಾಟಕ ವಿಮೋಚನಾ ದಿನಾಚರಣೆ ಸಮಾರಂಭದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ರಾಜ್ಯದ 85 ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೊಷಣೆ ಮಾಡಿದೆ. ಇದಕ್ಕೆ ಸಂಬಂಧಿಸಿದ ಆದೇಶವು ಶೀಘ್ರದಲ್ಲೆ ಆಯಾ ಜಿಲ್ಲಾಧಿಕಾರಿಗಳಿಗೆ ತಲುಪಲಿದೆ. ರೈತರ ಸಂಕಷ್ಟ ಅರಿತ ಸರ್ಕಾರವು ಸುಮಾರು ₹ ೪೦ ಸಾವಿರ ಕೋಟಿ ಸಾಲಮನ್ನಾ ಘೋಷಿಸಿದ್ದು, ರೈತರ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಇಸ್ರೇಲ್ ಮಾದರಿಯ ಕೃಷಿ ಪದ್ಧತಿ ಜಾರಿ, ಕಡಿಮೆ ನೀರಿನಲ್ಲಿ ಹೆಚ್ಚು ಇಳುವರಿ ಬರುವಂತಹ ಪದ್ಧತಿಗಳನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದರು.

ADVERTISEMENT

ಅತಂತ್ರವಾಗಿದ್ದ ದೇಶವನ್ನು ಹಿರಿಯರು ಅಪಾರ ಪರಿಶ್ರಮದಿಂದ ಸ್ವಾತಂತ್ರ್ಯಗೊಳಿಸಿ ಕೊಟ್ಟಿದ್ದಾರೆ. ಅಂತಹ ಸ್ವಾತಂತ್ರ್ಯವನ್ನು ಮತ್ತಷ್ಟು ಗಟ್ಟಿಗೊಳಿಸಿ ಉಳಿಸಿ-ಬೆಳೆಸಿ ಮುಂದಿನ ಪೀಳಿಗೆಗೆ ನೀಡುವ ಜವಾಬ್ದಾರಿ ಎಲ್ಲರ ಮೇಲಿದೆ. ದೇಶ ಏಳು ದಶಕಗಳಲ್ಲಿ ಸಾಕಷ್ಟು ಅಭಿವೃದ್ಧಿ ಸಾಧಿಸಿದ್ದು, ಸಾಧಿಸಬೇಕಾಗಿರುವುದು ಇನ್ನೂ ಬಹಳಷ್ಟಿದೆ. 2020 ರ ಗುರಿಯನ್ನಿಟ್ಟುಕೊಂಡು ಯುವ ಶಕ್ತಿಯನ್ನು ಸರಿಯಾದ ರೀತಿಯಲ್ಲಿ ಸದುಪಯೋಗ ಪಡಿಸಿಕೊಂಡು ಮುನ್ನುಗ್ಗಬೇಕಾಗಿದೆ ಎಂದು ತಿಳಿಸಿದರು.

ಇಷ್ಟು ವರ್ಷಗಳ ಕಾಲ ಕಡ್ಡಾಯ ಶಿಕ್ಷಣಕ್ಕೆ ಮಹತ್ವ ನೀಡಿದ್ದ ಸರ್ಕಾರ ಇದೀಗ ಕಡ್ಡಾಯ ಶಿಕ್ಷಣದ ಜೊತೆಗೆ ಗುಣಮಟ್ಟದ ಶಿಕ್ಷಣ ನೀಡುವುದಕ್ಕೆ ಹೆಚ್ಚಿನ ಆದ್ಯತೆ ವಹಿಸಿದೆ. ಸರ್ಕಾರಿ ಶಾಲೆಗಳ ವ್ಯವಸ್ಥೆಯಲ್ಲಿ ಸುಧಾರಣೆ, ಎಲ್ಲ ಕಡೆಗಳಲ್ಲೂ ವಸತಿ ಶಾಲೆಗಳ ಪ್ರಾರಂಭಿಸಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಲು ಸರ್ಕಾರ ಮುಂದಾಗಿದೆ ಎಂದು ಹೇಳಿದರು.

ಶಾಸಕ ಡಾ.ಶಿವರಾಜ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ವಿಧಾನಪರಿಷತ್ ಸದಸ್ಯರಾದ ಎನ್.ಎಸ್.ಬೋಸರಾಜು, ಬಸವರಾಜ ಪಾಟೀಲ್ ಇಟಗಿ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿಲ್ಲಾ ಪಂಚಾಯಿತಿ ಸಿಇಒ ನಲಿನ್ ಅತುಲ್, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಕಿಶೋರ ಬಾಬು, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.