ADVERTISEMENT

ಸರ್ಕಾರ–ಜನರ ನಡುವೆ ಸೇತುವೆಯಾಗಿ: ಸರ್ಕಾರಿ ನೌಕರರಿಗೆ ಶಾಸಕ ಹಂಪನಗೌಡ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2023, 14:35 IST
Last Updated 28 ನವೆಂಬರ್ 2023, 14:35 IST
ಸಿಂಧನೂರಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಾಯಚೂರು ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ, ನೂತನ ಸಚಿವರು, ಶಾಸಕರಿಗೆ ಅಭಿನಂದನಾ ಸಮಾರಂಭ, ವಾರ್ಷಿಕ ಮಹಾಸಭೆ ಹಾಗೂ ಕಾರ್ಯಾಗಾರವನ್ನು ಶಾಸಕ ಹಂಪನಗೌಡ ಬಾದರ್ಲಿ ಉದ್ಘಾಟಿಸಿದರು
ಸಿಂಧನೂರಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಾಯಚೂರು ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ, ನೂತನ ಸಚಿವರು, ಶಾಸಕರಿಗೆ ಅಭಿನಂದನಾ ಸಮಾರಂಭ, ವಾರ್ಷಿಕ ಮಹಾಸಭೆ ಹಾಗೂ ಕಾರ್ಯಾಗಾರವನ್ನು ಶಾಸಕ ಹಂಪನಗೌಡ ಬಾದರ್ಲಿ ಉದ್ಘಾಟಿಸಿದರು   

ಸಿಂಧನೂರು: ಸರ್ಕಾರ ಮತ್ತು ಜನರ ನಡುವೆ ಸೇತುವೆಯಂತೆ ಸರ್ಕಾರಿ ನೌಕರರು ಕಾರ್ಯನಿರ್ವಹಿಸುವ ಮೂಲಕ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.

ಸ್ಥಳೀಯ ಟೌನ್‍ಹಾಲ್‍ನಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಹಾಗೂ ತಾಲ್ಲೂಕು ಘಟಕದ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಾಯಚೂರು ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ, ನೂತನ ಸಚಿವರು, ಶಾಸಕರಿಗೆ ಅಭಿನಂದನಾ, ವಾರ್ಷಿಕ ಮಹಾಸಭೆ ಹಾಗೂ ‘ಪ್ರಜಾಸ್ನೇಹಿ ಆಡಳಿತ ನೌಕರರ ಪಾತ್ರ ಹಾಗೂ ಕೆಲಸದ ಒತ್ತಡ ನಿರ್ವಹಣೆ’ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಈಗಾಗಲೇ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕ ಸಲ್ಲಿಸಿದ 15 ಬೇಡಿಕೆಗಳನ್ನು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಪರಿಹರಿಸುವಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ. ಜಿಲ್ಲೆಯಲ್ಲಿ ಜ್ವಲಂತ ಸಮಸ್ಯೆಗಳಿದ್ದು, ಅವುಗಳನ್ನು ಪರಿಹರಿಸುವಲ್ಲಿ ಸರ್ಕಾರಿ ನೌಕರರು ಶ್ರಮವಹಿಸಬೇಕು. ತಾಲ್ಲೂಕಿನಲ್ಲಿ ಸರ್ಕಾರಿ ನೌಕರರ ಭವನಕ್ಕೆ ಅನುದಾನ ನೀಡುವ ಜೊತೆಗೆ ಅದಕ್ಕೆ ಬೇಕಾಗುವ ಎಲ್ಲ ರೀತಿಯ ಸಹಾಯ ಸಹಕಾರ ಕೊಡುತ್ತೇನೆ’ ಎಂದು ಭರವಸೆ ನೀಡಿದರು.

ADVERTISEMENT

‘ಮೂಲಸೌಕರ್ಯ, ಶಾಲಾ ಕಟ್ಟಡ, ಕುಡಿಯುವ ನೀರು, ಸ್ಮಾರ್ಟ್ ಕ್ಲಾಸ್, ಶೌಚಾಲಯ ಹೀಗೆ ಎಲ್ಲದಕ್ಕೂ ಅನುದಾನ ಕೊಟ್ಟರೂ ಪರಿವರ್ತನೆ ಕಾಣದಿರುವುದು ಬೇಸರ ತಂದಿದೆ. ಹೀಗಾಗಿ ಶಿಕ್ಷಕರ ಸಂಘ ಬದಲಾವಣೆ ತರುವ ನಿಟ್ಟಿನಲ್ಲಿ ಪ್ರಯತ್ನ ಮಾಡಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯ ಆಧಾರ ಸ್ತಂಭಗಳಾದ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಮತ್ತು ಪತ್ರಿಕಾರಂಗ ತಮ್ಮ ಜವಾಬ್ದಾರಿಗಳನ್ನು ಅರಿತು ಕಾರ್ಯನಿರ್ವಹಿಸಿದರೆ ದೇಶವು ಆರ್ಥಿಕ, ಶೈಕ್ಷಣಿಕ, ಸಾಂಸ್ಕೃತಿಕವಾಗಿ ಬಲಿಷ್ಠಗೊಳ್ಳಲಿದೆ’ ಎಂದರು.

ಸಾಹಿತಿ ಸಿದ್ದು ಯಾಪಲಪರ್ವಿ ವಿಶೇಷ ಉಪನ್ಯಾಸ ನೀಡಿದರು.

ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಮಸ್ಕಿ ಶಾಸಕ ಆರ್.ಬಸನಗೌಡ ತುರ್ವಿಹಾಳ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಭೀಮಪ್ಪ ನಾಯಕ್, ತಹಶೀಲ್ದಾರ್ ಅರುಣ್ ಎಚ್.ದೇಸಾಯಿ, ನಗರಸಭೆ ಪೌರಾಯುಕ್ತ ಮಂಜುನಾಥ ಗುಂಡೂರು, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ ಹಿರೇಮಠ, ತಾಲ್ಲೂಕು ಪಂಚಾಯಿತಿ ಇಒ ಚಂದ್ರಶೇಖರ, ಲೋಕೋಪಯೋಗಿ ಇಲಾಖೆ ಎಇಇ ಸಿ.ಎಸ್.ಪಾಟೀಲ, ಸಂಘದ ರಾಜ್ಯ ಖಜಾಂಚಿ ಸಿದ್ರಾಮಣ್ಣ, ರಾಜ್ಯ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಬಳ್ಳಾರಿ, ರಾಜ್ಯ ಹಿರಿಯ ಉಪಾಧ್ಯಕ್ಷ ಎಸ್.ಬಸವರಾಜ, ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಬಸಲಿಂಗಪ್ಪ ಇದ್ದರು. ಪ್ರಕಾಶ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.