ರಾಯಚೂರು: ‘ಡಿಸೆಂಬರ್‌ನಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಬದಲಾವಣೆಯಾಗುವ ನಿರೀಕ್ಷೆಯಿದೆ’ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
‘ನಮ್ಮ ಹೋರಾಟ ಬಿಜೆಪಿ ವಿರುದ್ಧವಲ್ಲ. ಬಿ.ವೈ.ವಿಜಯೇಂದ್ರ ನಾಯಕತ್ವವನ್ನು ಒಪ್ಪುವುದಿಲ್ಲ. ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬೇಕು ಎನ್ನುವುದೇ ನಮ್ಮ ಉದ್ದೇಶವಾಗಿದೆ’ ಎಂದು ನಗರದಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದರು.
‘ವಿಜಯೇಂದ್ರ ನಾಯಕತ್ವವನ್ನು ಒಪ್ಪುವುದಿಲ್ಲ ಎಂದು ಪಕ್ಷದ ವರಿಷ್ಠರಿಗೂ ತಿಳಿಸಿದ್ದೇವೆ. ಸಾಮೂಹಿಕ ನಾಯಕತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಮುಂದಿನ ದಿನಗಳಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಬದಲಾವಣೆಯಾಗುವ ವಿಶ್ವಾಸವಿದೆ’ ಎಂದು ತಿಳಿಸಿದರು.
‘ಕೇಂದ್ರದ ಮಾಜಿ ಸಚಿವ ಬಸನಗೌಡ ಯತ್ನಾಳ, ಮಾಜಿ ಸಂಸದ ಪ್ರತಾಪ ಸಿಂಹ ಸೇರಿ ಹಲವರು ರಾಜ್ಯದಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ. 8–10 ಮುಖಂಡರು ಜಿಲ್ಲೆಗಳ ಉಸ್ತುವಾರಿ ವಹಿಸಿಕೊಂಡಿದ್ದಾರೆ. ನಾನು ಆರು ಜಿಲ್ಲೆಗಳ ಉಸ್ತುವಾರಿ ವಹಿಸಿಕೊಂಡು ಪಕ್ಷವನ್ನು ಸಂಘಟಿಸುವೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಪ್ರಯತ್ನ ನಡೆದಿದೆ’ ಎಂದು ಹೇಳಿದರು.
‘ನನ್ನನ್ನು ಮುಖ್ಯಮಂತ್ರಿ ಮಾಡಬೇಕು ಅಥವಾ ನನಗೆ ಉನ್ನತ ಹುದ್ದೆ ಕೊಡಬೇಕು ಎನ್ನುವ ಬೇಡಿಕೆ ಇಟ್ಟಿಲ್ಲ. ಎಂದು ತಿಳಿಸಿದರು.
‘ಹಣಕ್ಕಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರ ಆಪ್ತ ಪೀಡಿಸಿದ್ದರಿಂದ ಎಫ್‌ಡಿಎ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಾಗಲೂ ಸಿ.ಎಂ ಬೇಜವಾಬ್ದಾರಿ ಹೇಳಿಕೆ ನೀಡಿದ್ದರು. ಈಗಲೂ ಸಚಿವರ ರಕ್ಷಣೆ ನಡೆಯುತ್ತಿದೆ. ಜನರ ವಿಶ್ವಾಸವನ್ನು ಕಾಂಗ್ರೆಸ್ ಕಳೆದುಕೊಂಡಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.