ADVERTISEMENT

ಚೆಕ್‌ ಪೋಸ್ಟ್‌‌ಗಳಲ್ಲಿ ಕೋವಿಡ್ ತಪಾಸಣೆ ಕಡ್ಡಾಯ- ಶಾಸಕ ರಾಜಾ ವೆಂಕಟಪ್ಪ ನಾಯಕ

​ಪ್ರಜಾವಾಣಿ ವಾರ್ತೆ
Published 17 ಜನವರಿ 2022, 13:36 IST
Last Updated 17 ಜನವರಿ 2022, 13:36 IST
ಮಾನ್ವಿ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಶಾಸಕ ರಾಜಾ ವೆಂಕಟಪ್ಪ ನಾಯಕ ಮಾತನಾಡಿದರು
ಮಾನ್ವಿ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಶಾಸಕ ರಾಜಾ ವೆಂಕಟಪ್ಪ ನಾಯಕ ಮಾತನಾಡಿದರು   

ಮಾನ್ವಿ: ‘ತಾಲ್ಲೂಕಿನ ಆಂಧ್ರ ಪ್ರದೇಶದ ಗಡಿಭಾಗ ಸೇರಿದಂತೆ ಚೆಕ್ ಪೋಸ್ಟ್‌ಗಳಲ್ಲಿ ಹೊರರಾಜ್ಯಗಳಿಂದ ಆಗಮಿಸುವವರನ್ನು ಕಡ್ಡಾಯವಾಗಿ ಕೋವಿಡ್ ತಪಾಸಣೆಗೆ ಒಳಪಡಿಸಬೇಕು’ ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸೋಮವಾರ ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಅವರು ಕೋವಿಡ್ ಮೂರನೇ ಅಲೆ ನಿಯಂತ್ರಣಕ್ಕಾಗಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

‘ತಾಲ್ಲೂಕಿನಲ್ಲಿ ಕೋವಿಡ್ ಮೊದಲ ಮತ್ತು ಎರಡನೇ ಅಲೆ ಸಂದರ್ಭದಲ್ಲಿ ತಾಲ್ಲೂಕಿನಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಮೊದಲ ಹಂತದ ಲಸಿಕೆ ಅಭಿಯಾನದಲ್ಲಿ ಶೇ 100ರಷ್ಟು ಗುರಿ ತಲುಪಲಾಗಿತ್ತು. ಆದರೆ 2ನೇ ಡೋಸ್ ನೀಡುವಲ್ಲಿ ನಿರೀಕ್ಷಿತ ಪ್ರಮಾಣದ ಗುರಿ ತಲುಪಿಲ್ಲ. ಈ ಕುರಿತು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.

ADVERTISEMENT

ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ 2ನೇ ಹಂತದ ಲಸಿಕೆ ಅಭಿಯಾನ ಚುರುಕುಗೊಳ್ಳಬೇಕು. ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಅಧಿಕಾರಿಗಳು ಪ್ರತ್ಯೇಕವಾಗಿ ಸಭೆ ನಡೆಸಬೇಕು. ಶಾಲಾ ಕಾಲೇಜುಗಳಲ್ಲಿ, ವ್ಯಾಪಾರ ಸ್ಥಳಗಳಲ್ಲಿ ಕೋವಿಡ್ ತಪಾಸಣೆ ಹಾಗೂ ಲಸಿಕೆ ಅಭಿಯಾನಕ್ಕೆ ಆದ್ಯತೆ ನೀಡಬೇಕು’ ಎಂದರು.

‘ಮಾನ್ವಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ನಿರ್ಮಾಣದ ಕಾಮಗಾರಿ ಪ್ರಗತಿಯಲ್ಲಿದ್ದು ಶೀಘ್ರ ಪೂರ್ಣಗೊಳಿಸಲಾಗುವುದು. ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕೋವಿಡ್ ಆರೈಕೆ ಕೇಂದ್ರ ಆರಂಭಕ್ಕೆ ವಿರೋಧ ವ್ಯಕ್ತವಾಗಿರುವ ಕುರಿತು ಜಿಲ್ಲಾಧಿಕಾರಿ ಅವರ ಗಮನಕ್ಕೆ ತರಲಾಗುವುದು’ ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ತಿಳಿಸಿದರು.

ತಹಶೀಲ್ದಾರ್ ಅಬ್ದುಲ್ ವಾಹಿದ್ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಚಂದ್ರಶೇಖರಯ್ಯ ಅವರು, ಕೋವಿಡ್ ನಿಯಂತ್ರಣಕ್ಕಾಗಿ ತಾಲ್ಲೂಕು ಆಡಳಿತದ ವತಿಯಿಂದ ಇದುವರೆಗೆ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ಸಭೆಯಲ್ಲಿ ಮಾಹಿತಿ ನೀಡಿದರು.

ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಸ್ಟೆಲ್ಲಾ ವರ್ಗೀಸ್, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ಗುಡಾಳ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರವೀಂದ್ರ ಉಪ್ಪಾರ್, ಪುರಸಭೆಯ ಮುಖ್ಯಾಧಿಕಾರಿ ಗಂಗಾಧರ, ವಲಯ ಅರಣ್ಯಾಧಿಕಾರಿ ರಾಜೇಶ ನಾಯಕ ಸೇರಿದಂತೆ ಇತರ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಇದ್ದರು.

‘ಪ್ರಜಾವಾಣಿ’ ವರದಿ ಪ್ರಸ್ತಾಪ

ರಾಜ್ಯದಲ್ಲಿ 2ನೇ ಹಂತದ ಕೋವಿಡ್ ಲಸಿಕೆ ವಿತರಣೆ ಅಭಿಯಾನದಲ್ಲಿ ರಾಯಚೂರು ಜಿಲ್ಲೆ ನಿರೀಕ್ಷಿತ ಪ್ರಮಾಣದಲ್ಲಿ ಗುರಿ ತಲುಪದೆ ಹಿಂದುಳಿದಿರುವ ಕುರಿತು ಪ್ರಕಟವಾದ ‘ಪ್ರಜಾವಾಣಿ’ ವಿಶೇಷ ವರದಿಯ ಬಗ್ಗೆ ಶಾಸಕ ರಾಜಾ ವೆಂಕಟಪ್ಪ ನಾಯಕ ಸಭೆಯಲ್ಲಿ ಪ್ರಸ್ತಾಪಿಸಿದರು.

ಜ.17 ಸೋಮವಾರದ ‘ಪ್ರಜಾವಾಣಿ’ಯಲ್ಲಿ ‘ 2ನೇ ಡೋಸ್‌ನಲ್ಲಿ ಹಿಂದೆ ಬಿದ್ದ 18 ಜಿಲ್ಲೆಗಳು’ ಶೀರ್ಷಿಕೆ ಅಡಿಯಲ್ಲಿ ಪ್ರಕಟವಾಗಿದ್ದ ವಿಶೇಷ ವರದಿಯ ಮುಖ್ಯಾಂಶಗಳನ್ನು ಅವರು ಸಭೆಯಲ್ಲಿ ಓದಿದರು.

ರಾಯಚೂರು ಜಿಲ್ಲೆ ಶೇ74.1ರಷ್ಟು ಗುರಿ ಸಾಧಿಸಿ ಲಸಿಕೆ ವಿತರಣೆಯಲ್ಲಿ ಹಿಂದುಳಿದಿರುವ ಐದು ಜಿಲ್ಲೆಗಳಲ್ಲಿ ಸ್ಥಾನ ಪಡೆದಿರುವ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದರು. ಅಧಿಕಾರಿಗಳು 2ನೇ ಹಂತದ ಲಸಿಕೆ ವಿತರಣೆ ಅಭಿಯಾನ ಚುರುಕುಗೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.