ADVERTISEMENT

ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2021, 13:17 IST
Last Updated 30 ಏಪ್ರಿಲ್ 2021, 13:17 IST

ಸಿಂಧನೂರು: ‘ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿಗೆ ಮೇ. 12 ರವರೆಗೂ ಅವಕಾಶ ನೀಡಲಾಗಿದೆ. ತಪ್ಪಿದಲ್ಲಿ ನಗರಸಭೆ ಕಚೇರಿ ವತಿಯಿಂದ ಕಟ್ಟಡಗಳನ್ನು ತೆರವು ಮಾಡಲಾಗುವುದು’ ಎಂದುನಗರಸಭೆ ಪೌರಾಯುಕ್ತ ಆರ್.ವಿರೂಪಾಕ್ಷಮೂರ್ತಿ ತಿಳಿಸಿದ್ದಾರೆ.

ಹೈಕೋರ್ಟ್‌ ಆದೇಶದ ಕಾರಣ ಮೇ. 31 ರೊಳಗೆ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ತೆರವು ಮಾಡಬೇಕು ಎಂದು ಜಿಲ್ಲಾಧಿಕಾರಿ ನೇತೃತ್ವದ ಸಮಿತಿ ಸೂಚಿಸಿದೆ. ಒತ್ತುವರಿ ತೆರವಿನ ಕುರಿತು ಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಸಿಂಧನೂರು ನಗರಸಭೆ ವ್ಯಾಪ್ತಿಯಲ್ಲಿ ಒಟ್ಟು 61 ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ಗುರುತಿಸಲಾಗಿತ್ತು. ಆ ಪೈಕಿ 28 ಕಟ್ಟಡಗಳನ್ನು ತೆರವುಗೊಳಿಸಲಾಗಿದೆ.

ADVERTISEMENT

ಬಾಕಿ ಉಳಿದ 33 ಅನಧಿಕೃತ ಧಾರ್ಮಿಕ ಕಟ್ಟಡಗಳ ಪೈಕಿ 9 ಧಾರ್ಮಿಕ ಕಟ್ಟಡಗಳಿಗೆ ದಾಖಲೆಗಳನ್ನು ಒದಗಿಸಲಾಗಿದೆ. ಅವುಗಳನ್ನು ಹೊರತುಪಡಿಸಿ ಇನ್ನುಳಿದ 24 ಧಾರ್ಮಿಕ ಕಟ್ಟಡಗಳನ್ನು ಮೇ. 30 ರೊಳಗೆ ತೆರವು ಮಾಡಿ ವರದಿ ಸಲ್ಲಿಸಬೇಕಾಗಿದೆ ಎಂದಿದ್ದಾರೆ.

ಸಂಬಂಧಿಸಿದವರು ತಾವಾಗಿಯೇ ತೆರವುಗೊಳಿಸಬೇಕು. ಇಲ್ಲದಿದ್ದರೆ ನಗರಸಭೆಯಿಂದ ತೆರವು ಮಾಡುವುದು ಅನಿವಾರ್ಯವಾಗಲಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.