ರಾಯಚೂರು: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯವು ಮೀರಟ್‌ನ ಆಸ್ಥಾ ಫೌಂಡೇಶನ್ ಸಹಯೋಗದಲ್ಲಿ ಡಿ.18 ರಿಂದ ಮೂರು ದಿನಗಳವರೆಗೆ ಅಂತರರಾಷ್ಟ್ರೀಯ ಜಾಗತಿಕ ಸುಸ್ಥಿರ ಕೃಷಿ ಮತ್ತು ಕೃಷಿ ಸಂಬಂಧಿತ ಸಂಶೋಧನಾ ಉಪಕ್ರಮಗಳ ಸಮ್ಮೇಳನ ಆಯೋಜಿಸಿದೆ.
ಕೃಷಿ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಬೆಳಿಗ್ಗೆ 10 ಗಂಟೆಗೆ ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಆರ್.ಸಿ.ಜಗದೀಶ ಚಾಲನೆ ನೀಡುವರು. ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಎಂ.ಹನುಮಂತಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿಶ್ರಾಂತ ಕುಲಪತಿ ಬಿ.ವಿ.ಪಾಟೀಲ, ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಎ.ಚಂದ್ರಣ್ಣ, ಕೊಪ್ಪಳದ ಜಲಚರ ಸಾಕಣೆ ಅಧ್ಯಕ್ಷ ದಿಲೀಪಕುಮಾರ ಝಾ, ನೇಪಾಳ ಹಾಗೂ ಬಾಂಗ್ಲಾದೇಶ ಅಂತರರಾಷ್ಟ್ರೀಯ ಸಲಹೆಗಾರ ಬಿ.ಕೆ. ಚಕ್ರವರ್ತಿ ಪಾಲ್ಗೊಳ್ಳಲಿದ್ದಾರೆ.
ಭಾರತ, ನೇಪಾಳ, ಬಾಂಗ್ಲಾದೇಶ, ಶ್ರೀಲಂಕಾ, ಇಂಡೊನೇಷಿಯಾ ಹಾಗೂ ಮತ್ತಿತರ ದೇಶಗಳ 200 ಕೃಷಿ ವಿಜ್ಞಾನಿಗಳು ಭಾಗವಹಿಸಿ ಜಾಗತಿಕ ವಲಯದಲ್ಲಿನ ಸುಸ್ಥಿರ ಕೃಷಿ ಮತ್ತು ಕೃಷಿ ಸಂಬಂಧಿತ ಸಂಶೋಧನಾ ಉಪಕ್ರಮಗಳ ಬಗ್ಗೆ ವಿಸ್ತೃತವಾಗಿ ಚರ್ಚಿಸಲಿದ್ದಾರೆ ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.