ADVERTISEMENT

ಕಾಟಾಚಾರಕ್ಕೆ ಕರ್ತವ್ಯ ನಿರ್ವಹಿಸಬೇಡಿ: ಶಾಸಕಿ ಕರೆಮ್ಮ ಜಿ.ನಾಯಕ ಖಡಕ್ ಸೂಚನೆ

​ಪ್ರಜಾವಾಣಿ ವಾರ್ತೆ
Published 8 ಜುಲೈ 2024, 16:13 IST
Last Updated 8 ಜುಲೈ 2024, 16:13 IST
ದೇವದುರ್ಗ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಕೆಡಿಪಿ ಸಭೆ ನಡೆಯಿತು
ದೇವದುರ್ಗ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಕೆಡಿಪಿ ಸಭೆ ನಡೆಯಿತು   

ದೇವದುರ್ಗ: ‘ಜನರ ಸಮಸ್ಯೆಗಳಿಗೆ ಸ್ಪಂದಿಸಿ ಉತ್ತಮ ಸೇವೆ ಸಲ್ಲಿಸಬೇಕು. ಕಾಟಾಚಾರಕ್ಕೆ ಕರ್ತವ್ಯ ನಿರ್ವಹಿಸಬೇಡಿ’ ಎಂದು ಶಾಸಕಿ ಕರೆಮ್ಮ ಜಿ.ನಾಯಕ ಖಡಕ್‌ ಸೂಚನೆ ನೀಡಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ತಾಲ್ಲೂಕುಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಕೆಲವು ಅಧಿಕಾರಿಗಳು ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ ಎಂದು ಸಾರ್ವಜನಿಕರಿಂದ ದೂರುಗಳು ಬಂದಿವೆ. ಅಂಥ ಅಧಿಕಾರಿಗಳ ಹೆಸರು ಹೇಳಿ ಮುಜುಗರ ಮಾಡುವುದಿಲ್ಲ. ಆದರೆ, ನೀವೇ ಅರ್ಥ ಮಾಡಿಕೊಂಡು ದೂರುಗಳು ಬರದಂತೆ ಕೆಲಸ ಮಾಡಿದರೆ ಎಂದೂ ನಿಮ್ಮ ಹೆಸರನ್ನು ಹೇಳುವುದಿಲ್ಲ. ದೂರು ಬಂದರೆ ಪರಿಣಾಮ ನೀವೇ ಎದುರಿಸಬೇಕಾಗುತ್ತದೆ’ ಎಂದರು.

ADVERTISEMENT

ಕೃಷಿ ಇಲಾಖೆಯಲ್ಲಿ ಪ್ರಗತಿ ಪರಿಶೀಲನೆ ವೇಳೆ ಭ್ರಷ್ಟಾಚಾರದಲ್ಲಿ ಭಾಗಿಯಾದ ವಿಮಾ ಕಂಪನಿ ವಿರುದ್ಧ ಕ್ರಮಕೈಗೊಳ್ಳುವಂತೆ ಸೂಚಿಸಿದರು.

‘ಕೆಲವು ತಾಲ್ಲೂಕುಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ವಾಸಿಸದೇ ಜಿಲ್ಲಾ ಕೇಂದ್ರದಿಂದ ಪ್ರತಿನಿತ್ಯ ಕರ್ತವ್ಯಕ್ಕೆ ಹಾಜರಾಗುತ್ತಿದ್ದೀರಿ. ಸರಿಯಾದ ಸಮಯಕ್ಕೆ ಬಾರದ ಹಿನ್ನೆಲೆಯಲ್ಲಿ ಜನರು ಪರದಾಡುವಂತಾಗಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಸುಖದೇವ ಅವರನ್ನು ತರಾಟೆಗೆ ತೆಗೆದುಕೊಂಡರು.

ವಿಧಾನಪರಿಷತ್ ಸದಸ್ಯ ಶರಣಗೌಡ ಬಯ್ಯಾಪುರ ಮಾತನಾಡಿ , ‘ತಾಲ್ಲೂಕಿನ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ಮತ್ತು ಪರಿಶಿಷ್ಟ ಪಂಗಡ ಇಲಾಖೆಯ ವಸತಿ ನಿಲಯಗಳಲ್ಲಿ ಮೂಲಸೌಕರ್ಯ ಇಲ್ಲದೆ ಮಕ್ಕಳ ಪರದಾಡುತ್ತಿದ್ದಾರೆ. ಮಕ್ಕಳಿಗಾಗಿ ಇರುವ ಸೌಲಭ್ಯವನ್ನು ಪ್ರಾಮಾಣಿಕವಾಗಿ ಒದಗಿಸಿ. ಇಲ್ಲವಾದರೆ ನಿಮ್ಮ ಮೇಲೆ ನಿರ್ದಿಷ್ಟವಾಗಿ ಕ್ರಮಕ್ಕೆ ವರದಿ ಮಾಡುತ್ತೇವೆ’ ಎಂದು ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಜಕುಮಾರ ಅವರನ್ನು ತರಾಟೆಗೆ ತೆಗೆದುಕೊಂಡರು.

‌ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಮಲ್ಲನಗೌಡ ಗುಂಡಗುರ್ತಿ, ಟಿಎಪಿಎಂಸಿ ಅಧ್ಯಕ್ಷ ಶರಣಗೌಡ ಕಮತಗಿ, ತಹಶೀಲ್ದಾರ್‌ ಚನ್ನಮಲ್ಲಪ್ಪ ಘಂಟಿ, ಇಒ ಬಸವರಾಜ ಹಟ್ಟಿ, ಎಡಿ ಅಣ್ಣಾರಾವ್, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಬನದೇಶ್ವರ ಮತ್ತು ವಿವಿಧ ಇಲಾಖೆಗಳ ತಾಲ್ಲೂಕು ಅಧಿಕಾರಿಗಳು ಭಾಗವಹಿಸಿದ್ದರು.

ತಾಲ್ಲೂಕಿನಾದ್ಯಂತ ಅಪೌಷ್ಟಿಕ ಮಕ್ಕಳ ಸಂಖ್ಯೆ ಕಡಿಮೆ ಮಾಡಲು ಅಂಗನವಾಡಿ ಕೇಂದ್ರ ಮತ್ತು ಶಾಲೆಗಳಿಗೆ ಉತ್ತಮ ಗುಣಮಟ್ಟದ ಆಹಾರ ಪೂರೈಸಬೇಕು
- ಕರೆಮ್ಮ ಜಿ.ನಾಯಕ, ಶಾಸಕಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.